ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಖಾಸಗೀಕರಣಕ್ಕೆ ರೈತರ ವಿರೋಧ

Last Updated 9 ಆಗಸ್ಟ್ 2021, 12:20 IST
ಅಕ್ಷರ ಗಾತ್ರ

ಚಿತ್ರದುರ್ಗ: ವಿದ್ಯುತ್‌ ಕಂಪನಿಗಳ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಮೂಲಸೌಲಭ್ಯದಲ್ಲಿ ಒಂದಾಗಿರುವ ವಿದ್ಯುತ್‌ ಅನ್ನು ಸೇವೆಯಾಗಿ ಪರಿಗಣಿಸಬೇಕೇ ಹೊರತು ಸರಕು ಎಂದು ಭಾವಿಸಬಾರದು. ಬಡವನಿಂದ ಶ್ರೀಮಂತನವರೆಗೆ ಎಲ್ಲರ ಬದುಕಿನಲ್ಲಿ ವಿದ್ಯುತ್‌ ಅವಿಭಾಜ್ಯ ಅಂಗವಾಗಿದೆ. ವಿದ್ಯುತ್‌ ಖಾಸಗೀಕರಣ ಮಾಡಿದರೆ ದೇಶದ ಎಲ್ಲರ ಬದುಕು ದರ್ಬರವಾಗಲಿದೆ. ಈ ಬಗ್ಗೆ ಸರ್ಕಾರ ಆಲೋಚನೆ ಮಾಡುವುದು ಸೂಕ್ತ ಎಂದು ರಾಜ್ಯ ರೈತ ಸಂಘದ ಕಾರ್ಯದರ್ಶಿ ಈಚಘಟ್ಟದ ಸಿದ್ದವೀರಪ್ಪ ಒತ್ತಾಯಿಸಿದರು.

ಶೇ 40ರಷ್ಟು ಕೃಷಿ ಕೊಳವೆಬಾವಿ ಮೇಲೆ ಅವಲಂಬಿತವಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ಅಳವಡಿಸಿದ್ದ ಮೀಟರ್‌ಗಳನ್ನು ಮುಖ್ಯಮಂತ್ರಿಯಾಗಿದ್ದ ಎಸ್‌.ಬಂಗಾರಪ್ಪ ಅವರು ತೆಗೆದುಹಾಕಿದರು. ವಿದ್ಯುತ್ ಶುಲ್ಕದ ಬಾಕಿಯನ್ನು ಎಸ್‌.ಎಂ.ಕೃಷ್ಣ ಅವರ ಅವಧಿಯಲ್ಲಿ ಮನ್ನಾ ಮಾಡಲಾಯಿತು. ಈಗ ಮತ್ತೆ ವಿದ್ಯುತ್‌ ಖಾಸಗೀಕರಣ ಮಾಡಿದರೆ ಕೃಷಿಯ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಹಣ ಗಳಿಕೆಯೇ ಪ್ರಮುಖ ಉದ್ದೇಶವಾಗಿರುವ ಖಾಸಗಿ ಕಂಪನಿಗಳು ವಿದ್ಯುತ್‌ ದರವನ್ನು ಹೆಚ್ಚಳ ಮಾಡಲಿವೆ. ಕೃಷಿ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದೆ. ಯಾವುದೇ ಕಾರಣಕ್ಕೂ ವಿದ್ಯುತ್‌ ಖಾಸಗೀಕರಣ ಮಾಡಬಾರದು. ಒಂದೂವರೆ ವರ್ಷದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ರಾಮರೆಡ್ಡಿ, ಬಸವರಾಜಪ್ಪ,ರಾಜಶೇಖರಪ್ಪ,ರಾಮದಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT