ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ಪಲ್ಸ್ ಪೋಲಿಯೊ ಅಭಿಯಾನ: ಜಿಲ್ಲೆಯ 1.35 ಲಕ್ಷ ಮಕ್ಕಳಿಗೆ ಲಸಿಕೆ

Published 23 ಫೆಬ್ರುವರಿ 2024, 15:47 IST
Last Updated 23 ಫೆಬ್ರುವರಿ 2024, 15:47 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಷ್ಟ್ರೀಯ ಪಲ್ಸ್‌ ಪೋಲಿಯೊ ಅಭಿಯಾನ ಮಾರ್ಚ್‌ 3ರಿಂದ 6ರವರೆಗೆ ನಡೆಯಲಿದ್ದು, ಐದು ವರ್ಷದೊಳಗಿನ ಜಿಲ್ಲೆಯ 1.35 ಲಕ್ಷ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಗುತ್ತದೆ.

ರಾಷ್ಟ್ರೀಯ ಪಲ್ಸ್‌ ಪೋಲಿಯೊ ಅಭಿಯಾನದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

‘ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಬೇಕು. ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರವಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು’ ಎಂದು ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ನಗರ ಪ್ರದೇಶಗಳಲ್ಲಿ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಡಿ ಜಾಥಾ ಆಯೋಜಿಸಬೇಕು. ಪೋಲಿಯೊದಿಂದ ಉಂಟಾಗುವ ಗಂಭೀರ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಜತೆಗೆ ವಿವಿಧ ಇಲಾಖೆಗಳ ಸಮನ್ವಯತೆ, ಸಹಕಾರ ಅಗತ್ಯ’ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ‘5 ವರ್ಷದೊಳಗಿನ 31,829 ಮಕ್ಕಳು ನಗರ ಪ್ರದೇಶದಲ್ಲಿ ಹಾಗೂ 1,03,276 ಮಕ್ಕಳು ಗ್ರಾಮೀಣ ಪ್ರದೇಶದಲ್ಲಿದ್ದಾರೆ. ಜಿಲ್ಲೆಯಲ್ಲಿ 1,35,105 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ’ ಎಂದು ಹೇಳಿದರು.

‘ಲಸಿಕಾ ಕಾರ್ಯಕ್ರಮಕ್ಕೆ 1,084 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. 2,291 ಲಸಿಕಾ ಕಾರ್ಯಕರ್ತರು, 259 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಮಾರ್ಚ್ 3 ರಂದು ಲಸಿಕಾ ಕೇಂದ್ರಗಳಲ್ಲಿಯೇ ಶೇ 95 ರಷ್ಟು ಮಕ್ಕಳಿಗೆ ಲಸಿಕೆ ಹಾಕುವ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಂತರದ ದಿನಗಳಲ್ಲಿ ಮನೆ ಮನೆಗೆ ಭೇಟಿ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.

ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಶ್ರೀಧರ್, ‘ಪಾಕಿಸ್ತಾನ ಮತ್ತು ಅಫಘಾನಿಸ್ತಾನಗಳಲ್ಲಿ ಕಳೆದ ವರ್ಷ 11 ಮಕ್ಕಳು ಪೋಲಿಯೊಗೆ ತುತ್ತಾಗಿದ್ದಾರೆ. ಭಾರತದಲ್ಲಿ ಕೂಡ ಪೋಲಿಯೊ ಕುರಿತು ಹೆಚ್ಚಿನ ಜಾಗೃತಿ ವಹಿಸಬೇಕಿದೆ. ರಾಜ್ಯದಲ್ಲಿ 2007ರ ನಂತರ ಈವರೆಗೆ ಯಾವುದೇ ಪೋಲಿಯೊ ಪ್ರಕರಣ ಕಂಡುಬಂದಿಲ್ಲ’ ಎಂದು ತಿಳಿಸಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ್, ‘ಪೋಲಿಯೊ ಮುಕ್ತ ಭಾರತ ನಿರ್ಮಾಣ ಮಾಡುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಪಾತ್ರ ಮುಖ್ಯ. ಮಾರ್ಚ್ 1 ರಿಂದ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ‘ಬೆಸ್ಕಾಂ’ ಅಧಿಕಾರಿಗಳು ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್ ಇದ್ದರು.

ಬೇಸಿಗೆಯಲ್ಲಿ ಬಿಸಿಲು ಹೆಚ್ಚಳವಾಗಿದ್ದು ಲಸಿಕೆ ಹಾಳಾಗುವ ಸಾಧ್ಯತೆ ಇದೆ. ತಾಲ್ಲೂಕು ಆರೋಗ್ಯಾಧಿಕಾರಿಗಳು ಹೆಚ್ಚು ಗಮನಹರಿಸಿ ಮುಂಜಾಗ್ರತಾ ಕ್ರಮವಹಿಸಬೇಕು.
ಡಾ.ಜಿ.ಪಿ.ರೇಣುಪ್ರಸಾದ್ ಜಿಲ್ಲಾ ಆರೋಗ್ಯಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT