ಭಾನುವಾರ, ಮೇ 22, 2022
28 °C

ಸಾಲ ಮನ್ನಾಗೆ ಶ್ವೇತಪತ್ರ ಹೊರಡಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ರಾಜ್ಯದ ಆರು ಲಕ್ಷ ರೈತರ ಸಾಲ ಮನ್ನಾ ಮಾಡಲಾಗಿದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ರಾಜ್ಯ ರೈತ ಸಂಘ, ಸಾಲ ಮನ್ನಾ ಪ್ರಯೋಜನ ಪಡೆದ ರೈತರು ಹಾಗೂ ಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದೆ.

ಸಾಲ ಮನ್ನಾ ಜಾರಿಗೆ ತರುವಲ್ಲಿ ಸರ್ಕಾರ ಇಚ್ಛಾಶಕ್ತಿ ತೋರಿಲ್ಲ. ಸಾಲ ಪಡೆದ ರೈತರಿಗೆ ಬ್ಯಾಂಕುಗಳು ನೋಟಿಸ್‌ ಜಾರಿ ಮಾಡುತ್ತಿವೆ. ಕೆಲವು ರೈತರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುತ್ತಿದೆ. ಮುಂಗಾರು ಹಂಗಾಮಿಗೆ ಹೊಸ ಸಾಲ ನೀಡುತ್ತಿಲ್ಲ. ಇದರಿಂದ ರೈತ ಸಮುದಾಯ ಗೊಂದಲಕ್ಕೆ ಈಡಾಗಿದೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ 48 ಸಾವಿರ ಕೋಟಿ ಬೆಳೆ ಸಾಲವನ್ನು ಮನ್ನಾ ಮಾಡಿರುವುದಾಗಿ ಸರ್ಕಾರ ಹೇಳುತ್ತಿದೆ. ಹಂತ–ಹಂತವಾಗಿ ಎಲ್ಲ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಹೇಳುತ್ತಲೇ ಇದ್ದಾರೆ. ಖಾಸಗಿ ಸಾಲದಿಂದಲೂ ರೈತರನ್ನು ಋಣಮುಕ್ತ ಮಾಡುವ ಆಶ್ವಾಸನೆ ನೀಡುತ್ತಿದ್ದಾರೆ. ಆದರೆ, ಈವರೆಗೆ ಇದು ಅನುಷ್ಠಾನಕ್ಕೆ ಬಂದಿಲ್ಲ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸರ್ಕಾರ ಸಕ್ರಿಯವಾಗಿದ್ದರಿಂದ ಬರ ಪರಿಸ್ಥಿತಿಯ ಬಗ್ಗೆ ಹೆಚ್ಚು ಗಮನ ಹರಿಸಿಲ್ಲ. ನೀರು, ಮೇವು, ಕೆಲಸ ಇಲ್ಲದೇ ಪರದಾಡುತ್ತಿರುವ ರೈತರ ಸಂಕಷ್ಟಗಳನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ಅರಿಯುತ್ತಿಲ್ಲ. ಗುಳೆ ಹೋಗುವುದನ್ನು ತಪ್ಪಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕುಡಿಯುವ ನೀರಿಗೆ ತತ್ವಾರ ಉಂಟಾಗಿದ್ದು, ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಬರ ನಿರ್ವಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ದೂರಿದ್ದಾರೆ.

ಕರ್ನಾಟಕವೂ ಸೇರಿ ಇತರೆ ರಾಜ್ಯಗಳ ಕೃಷಿ ಭೂಮಿ ಮರುಭೂಮಿಯಾಗಿ ಪರಿವರ್ತನೆಯಾಗುತ್ತಿದೆ. ನದಿ ಮೂಲಗಳು ಬತ್ತಿ ಹೋಗುವ ವರದಿಗಳು ಕಳವಳವುಂಟು ಮಾಡಿವೆ. ಜಾಗತಿಕ ತಾಪಮಾನ ಏರುತ್ತಲೇ ಇದೆ. ಬರ ಪರಿಸ್ಥಿತಿಯನ್ನು ಎದುರಿಸಲು ಶಾಶ್ವತ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.

ಬೀಜ ಉತ್ಪಾದನಾ ಸ್ವಾತಂತ್ರವನ್ನು ರೈತರಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಬೀಜ ಉತ್ಪಾದನಾ ಸ್ವಾತಂತ್ರ್ಯ ಪುರಾತನ ಕಾಲದಿಂದ ಇದೆ. ಬಹುರಾಷ್ಟ್ರೀಯ ಕಂಪನಿಗಳ ಹುನ್ನಾರಕ್ಕೆ ಮಣಿದು ಸರ್ಕಾರ ರೈತರಿಗೆ ನಿರ್ಬಂಧ ವಿಧಿಸುವುದು ತಪ್ಪು. ಗುಜರಾತಿನ ರೈತರ ಮೇಲೆ ಬಹುರಾಷ್ಟ್ರೀಯ ಕಂಪನಿಗಳು ಮೊಕದ್ದಮೆ ಹೂಡಿ ಕಿರುಕುಳ ಕೊಡುತ್ತಿರುವುದನ್ನು ರೈತ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು