ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಆಡಳಿತದಲ್ಲಿ ಜನ ಭ್ರಮನಿರಸನ: ರಾಮಲಿಂಗಾರೆಡ್ಡಿ ಆರೋಪ

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪ
Last Updated 1 ಡಿಸೆಂಬರ್ 2021, 11:39 IST
ಅಕ್ಷರ ಗಾತ್ರ

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಆಡಳಿತ ಕಂಡು ಭ್ರಮನಿರಸನಗೊಂಡ ಜನರು ಬದಲಾವಣೆ ಬಯಸುತ್ತಿದ್ದಾರೆ. ಉಪಚುನಾವಣೆ ಫಲಿತಾಂಶದಲ್ಲಿ ಇದು ಬಿಂಬಿತವಾಗಿದೆ. ವಿಧಾನಪರಿಷತ್‌ ಚುನಾವಣೆಯಲ್ಲಿ ನಿಚ್ಚಳವಾಗಿ ಕಾಂಗ್ರೆಸ್‌ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಬಿ.ಸೋಮಶೇಖರ್‌ ಪರವಾಗಿ ಮತಯಾಚನೆ ಮಾಡಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಆರು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ 14 ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದಿತ್ತು. ಅಧಿಕಾರದಲ್ಲಿ ಇರದೇ ಇದ್ದರೂ ಇಷ್ಟೇ ಸ್ಥಾನಗಳನ್ನು ಗೆಲ್ಲುವ ಶಕ್ತಿ ಕಾಂಗ್ರೆಸ್‌ಗೆ ಇದೆ. ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಆಗಿರುವ ಅಭಿವೃದ್ಧಿಯನ್ನು ಜನರು ಪರಿಗಣಿಸಲಿದ್ದಾರೆ. ವಸತಿ ಯೋಜನೆಗೆ ಬಿಜೆಪಿ ನೇತೃತ್ವದ ಸರ್ಕಾರ ಅನುದಾನ ನೀಡುತ್ತಿಲ್ಲ. ನೆರೆ ಹಾವಳಿ ಆಗಿದ್ದರೂ ಜನರ ಅಳಲು ಕೇಳುವ ಪುರುಸೊತ್ತು ಸಚಿವರಲ್ಲಿ ಇಲ್ಲ’ ಎಂದು ಆರೋಪಿಸಿದರು.

‘ಯಾವ ಸಮಯದಲ್ಲಿ ಏನು ಮಾಡಬೇಕು ಎಂಬ ಪರಿಜ್ಞಾನ ಬಿಜೆಪಿಯವರಿಗೆ ಇಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸುವ ಬದಲು ಮತಕೇಳುವಲ್ಲಿ ತಲ್ಲೀನರಾಗಿದ್ದಾರೆ. ಜನಸ್ವರಾಜ್‌ ಯಾತ್ರೆ ಮೂಲಕ ಶಕ್ತಿಪ್ರದರ್ಶನ ಮಾಡುತ್ತಿರುವುದು ಹಾಸ್ಯಾಸ್ಪದ. ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಹೇಳಿದ ಸುಳ್ಳುಗಳು ಮತದಾರರಿಗೆಇಂಪಾಗಿ ಕೇಳಿಸಿದ್ದವು. ಈಗ ಇವರ ಸುಳ್ಳುಗಳು ಜನರಿಗೂ ಅರ್ಥವಾಗಿವೆ’ ಎಂದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಏಳು ವರ್ಷಗಳ ಹಿಂದೆ ನೀಡಿದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಜಿಎಸ್‌ಟಿ ಹಂಚಿಕೆ ಸರಿಯಾಗಿ ಮಾಡುತ್ತಿಲ್ಲ. ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಿಂದ ಆಯ್ಕೆಯಾದ 25 ಲೋಕಸಭಾ ಸದಸ್ಯರು ನೆಲ, ಜಲ ಹಾಗೂ ಭಾಷೆಯ ಬಗ್ಗೆ ಮಾತನಾಡುತ್ತಿಲ್ಲ’ ಎಂದು ದೂರಿದರು.

‘ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಹಾಗೂ ಕೋವಿಡ್‌ ನಿರ್ವಹಣೆಯಲ್ಲಿ ಕೇಂದ್ರ ಸರರ್ಕಾರ ಸಂಪೂರ್ಣ ವಿಫಲವಾಗಿದೆ. ಅಡುಗೆ ಎಣ್ಣೆ, ಇಂಧನ, ಅಡುಗೆ ಅನಿಲದ ಬೆಲೆ ಗನನಮುಖಿಯಾಗಿದೆ. ನರೇಂದ್ರ ಮೋದಿ ಅವರ ಏಳು ವರ್ಷಗಳ ಆಡಳಿತದ ಅವಧಿಯಲ್ಲಿ ದೇಶದ 24 ಕೋಟಿ ಜನರು ಬಡತನ ರೇಖೆಗಿಂತ ಕೆಳಗೆ ಇಳಿದಿದ್ದಾರೆ. ಮನಮೋಹನ್‌ ಸಿಂಗ್‌ ಅವರ ಆಡಳಿತದ ಅವಧಿಯಲ್ಲಿ 14 ಕೋಟಿ ಜನರು ಬಡತನ ರೇಖೆಗಿಂತ ಮೇಲೆ ಬಂದಿದ್ದರು’ ಎಂದರು.

ಭ್ರಷ್ಟ ರಾಜ್ಯ ಸರ್ಕಾರ: ಜಯಚಂದ್ರ

ಕರ್ನಾಟಕವನ್ನು ದೇಶದ ಮಾಹಿತಿ ತಂತ್ರಜ್ಞಾನದ ರಾಜ್ಯ ಎಂಬುದಾಗಿ ಗುರುತಿಸುತ್ತಿದ್ದರು. ಬಿಜೆಪಿ ಆಡಳಿತದ ಅವಧಿಯಲ್ಲಿ ಇದು ದೇಶದ ಅತ್ಯಂತ ಭ್ರಷ್ಟ ರಾಜ್ಯವಾಗಿದೆ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಆರೋಪಿಸಿದರು.

‘ಭ್ರಷ್ಟಾಚಾರ ಕರ್ನಾಟಕದಲ್ಲಿ ಮಿತಿ ಮೀರಿದೆ. ಕಾಮಗಾರಿಗೆ ಬಿಡುಗಡೆ ಆಗುವ ಅನುದಾನದಲ್ಲಿ ಶೇ 40ರಷ್ಟನ್ನು ಲಂಚದ ರೂಪದಲ್ಲಿ ನೀಡುತ್ತಿರುವ ಬಗ್ಗೆ ಗುತ್ತಿಗೆದಾರರು ಪ್ರಧಾನಿಗೆ ದೂರು ನೀಡಿದ್ದಾರೆ. ಇಂಥಹ ಆಡಳಿತಗಾರರಿಂದ ಅಭಿವೃದ್ಧಿ ನಿರೀಕ್ಷಿಸುವುದಾದರೂ ಹೇಗೆ’ ಎಂದು ಪ್ರಶ್ನಿಸಿದರು.

ಅಭ್ಯರ್ಥಿ ಬಿ.ಸೋಮಶೇಖರ, ಮಾಜಿ ಸಚಿವ ಎಚ್‌.ಆಂಜನೇಯ, ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಎಸ್‌.ಮಂಜುನಾಥ್‌, ಕೆಪಿಸಿಸಿ ವಕ್ತಾರ ಬಿ.ಎನ್‌.ಚಂದ್ರಪ್ಪ, ಮಾಜಿ ಶಾಸಕ ಎಸ್‌.ತಿಪ್ಪೇಸ್ವಾಮಿ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್‌ಕುಮಾರ್‌. ಡಿ.ಎನ್‌.ಮೈಲಾರಪ್ಪ, ಮೋಹನ ರೆಡ್ಡಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್‌, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ.ಯೋಗೇಶಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT