ಬುಧವಾರ, ಸೆಪ್ಟೆಂಬರ್ 22, 2021
28 °C
ವಿಳಂಬ ಮಾಡಿದ ಅಧಿಕಾರಿ ವಿರುದ್ಧ ಕಠಿಣ ಕ್ರಮ

372 ಕೆರೆಗಳ ಒತ್ತುವರಿ ತೆರವುಗೊಳಿಸಿ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ‘ಜಿಲ್ಲಾ ವ್ಯಾಪ್ತಿಯ 462 ಕೆರೆಗಳ ಪೈಕಿ ಈಗಾಗಲೇ 90 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ. ಉಳಿದ 372 ಕೆರೆಗಳ ಒತ್ತುವರಿ ತ್ವರಿತವಾಗಿ ತೆರವುಗೊಳಿಸಬೇಕು. ವಿಳಂಬ ಮಾಡುವ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಎಚ್ಚರಿಸಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇನ್ನೂ 296 ಕೆರೆಗಳ ಒತ್ತುವರಿ ತೆರವು ಮಾಡಬೇಕಾಗಿದೆ. ಅದರಲ್ಲಿ ಈವರೆಗೂ 32 ಕೆರೆಗಳ ಒತ್ತುವರಿ ಮಾತ್ರ ತೆರವುಗೊಳಿಸಲಾಗಿದೆ. ಈ ರೀತಿಯ ವಿಳಂಬ ಧೋರಣೆ ಏಕೆ’ ಎಂದು ಪ್ರಶ್ನಿಸಿದರು.

‘ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 144 ಕೆರೆಗಳು ಇವೆ. ಒತ್ತುವರಿ ಆಗಿರುವುದನ್ನು ಶೀಘ್ರದಲ್ಲೇ ತೆರವು ಮಾಡಬೇಕು. ಕೆರೆಗಳ ಒತ್ತುವರಿ ಸಂಬಂಧ ರಾಜ್ಯ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇವೆ. ಜಿಲ್ಲಾ ವ್ಯಾಪ್ತಿಯಲ್ಲಿ ಕೆರೆಗಳ ತೆರವು ಮಾಡಿರುವ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕಿದೆ. ತೆರವು ಕಾರ್ಯಾಚರಣೆ ತ್ವರಿತವಾಗಿ ನಡೆಯಬೇಕು’ ಎಂದು ಸೂಚನೆ ನೀಡಿದರು.

‘ಜಿಲ್ಲೆಯಲ್ಲಿ 2009ರ ನಂತರ ಅನಧಿಕೃತವಾಗಿ ನಿರ್ಮಿಸಿರುವ ಒಟ್ಟು 34 ದೇಗುಲ ಗುರುತಿಸಲಾಗಿದೆ. ಅವುಗಳನ್ನು ಯಾವುದೇ ತಕಾರರು ಇಲ್ಲದೇ ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸಬೇಕು’ ಎಂದ ಅವರು, ‘ಆಶ್ರಯ ಯೋಜನೆ ಅಡಿ ಜಿಲ್ಲೆಯಲ್ಲಿ ನಿವೇಶನ ಮತ್ತು ವಸತಿ ರಹಿತರಿಗೆ ಸರ್ಕಾರಿ ಜಮೀನಿನಲ್ಲಿ ನಿವೇಶನ ಮಂಜೂರು ಮಾಡಲಾಗಿದೆ. ಆದರೆ, ಭೂಸ್ವಾಧೀನವಾಗಿ ಹಲವು ವರ್ಷಗಳಾದರೂ ಜಮೀನಿನಲ್ಲಿ ಯಾವ ಅಭಿವೃದ್ಧಿ ಸಾಧ್ಯವಾಗಿಲ್ಲ. ಈ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ತಾಕೀತು ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ
ಇದ್ದರು.

ಬಿತ್ತನೆ: ಶೇ 50ರಷ್ಟು ಸಾಧನೆ

ಜಿಲ್ಲೆಯ 3,38,385 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಲಾಗಿದೆ. ಅದರಲ್ಲಿ 1,67,058 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕೈಗೊಳ್ಳಲಾಗಿದ್ದು, ಒಟ್ಟು ಶೇ 50ರಷ್ಟು ಸಾಧನೆಯಾಗಿದೆ. 186 ಮಿ.ಮೀ ವಾಡಿಕೆ ಮಳೆಗೆ ಈ ಬಾರಿ ಸರಾಸರಿ 375 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. 2020-21ನೇ ಸಾಲಿನಲ್ಲಿ ಬೆಳೆ ಪರಿಹಾರ ಸಂಬಂಧ ಒಟ್ಟು 34,931 ರೈತರಿಗೆ ಪರಿಹಾರ ಬರುವುದು ಬಾಕಿ ಇದೆ.

ಜಿಲ್ಲೆಗೆ ಮುಂಗಾರು ಹಂಗಾಮಿನಲ್ಲಿ 68,360 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದೆ. ಅದಕ್ಕಾಗಿ 56,532 ಮೆಟ್ರಿಕ್ ಟನ್ ದಾಸ್ತಾನು ಮಾಡಲಾಗಿತ್ತು. ಅದರಲ್ಲಿ 42,312 ಮೆಟ್ರಿಕ್ ಟನ್ ವಿತರಣೆ ಮಾಡಲಾಗಿದೆ. ಇನ್ನುಳಿದ 14,220 ಟನ್ ರಸಗೊಬ್ಬರ ಉಳಿಕೆಯಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

* ಜಿಲ್ಲೆಯ ಒಟ್ಟು 45 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಬೇಕಿದೆ. ಅದಕ್ಕಾಗಿ ಜಮೀನು ಮಂಜೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.

-ಕವಿತಾ ಎಸ್. ಮನ್ನಿಕೇರಿ, ಜಿಲ್ಲಾಧಿಕಾರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು