ಬುಧವಾರ, ನವೆಂಬರ್ 25, 2020
21 °C
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಸಲಹೆ

ವೇಗ ನಿಯಂತ್ರಕ ಮೀಟರ್‌ ಅಳವಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಪ್ಪಿಸಲು ವೇಗ ನಿಯಂತ್ರಕ ಮೀಟರ್‌ ಅಳವಡಿಸುವುದು ಸೂಕ್ತ. ಇದರಿಂದ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಅಪಘಾತಗಳಿಂದ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಅಪಘಾತ ವಲಯಗಳಲ್ಲಿ ಜಾಗೃತಿ ಮೂಡಿಸುವ ಫಲಕ ಅಳವಡಿಸಬೇಕು. ರಸ್ತೆಗಳ ಮೇಲೆ ಮುನ್ನೆಚ್ಚರಿಕೆಯ ಸಂದೇಶಗಳನ್ನು ಚಾಲಕರಿಗೆ ಕಾಣುವಂತೆ ಹಾಕಬೇಕು. ಹಾಳಾದ ರಸ್ತೆಗಳನ್ನು ಸರಿಪಡಿಸಬೇಕು’ ಎಂದರು.

‘ಸಂಚಾರಕ್ಕೆ ಅಡಚಣೆಯುಂಟು ಮಾಡುವ ರಸ್ತೆಬದಿಯ ಮರಗಳನ್ನು ತೆರವುಗೊಳಿಸಬೇಕು. ಅಪಘಾತಕ್ಕೆ ಕಾರಣವಾಗುವ ರಸ್ತೆ ಗುಂಡಿಗಳನ್ನು ಮುಚ್ಚಬೇಕು’ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಾಕೀತು ಮಾಡಿದರು.

‘ಅಪಘಾತಗಳ ಬಗ್ಗೆ ಜಾಗೃತಿ ಮೂಡಿಸಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು. ಸೀಟ್‍ಬೆಲ್ಟ್ ಧರಿಸದೆ ವಾಹನ ಚಾಲನೆ ಮಾಡುವವರ ಚಾಲನಾ ಪರವಾನಗಿ ಅಮಾನತುಗೊಳಿಸಲು ಅವಕಾಶವಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ವಲಯಗಳಿವೆ. ರಸ್ತೆ ಗುಣಮಟ್ಟಕ್ಕೆ ಒತ್ತು ನೀಡುವ ಅಗತ್ಯವಿದೆ. ಇದರಿಂದ ಅಪಘಾತ ತಡೆಯಲು ಹಾಗೂ ಸಾವಿನ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರ ಗಂಭೀರವಾಗಿ ಆಲೋಚಿಸಬೇಕು’ ಎಂದು ಸೂಚನೆ ನೀಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಜಿ.ಎಸ್.ಹೆಗಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾವಿ, ನಗರಸಭೆ ಆಯುಕ್ತ ಜಿ.ಟಿ.ಹನುಮಂತರಾಜು ಇದ್ದರು.

1,051 ಅಪಘಾತ ಪ್ರಕರಣ

ಲಾಕ್‌ಡೌನ್‌ ನಿಯಮ ಸಡಿಲಗೊಂಡು ವಾಹನ ಸಂಚಾರ ಸಹಜ ಸ್ಥಿತಿಗೆ ಮರಳಿದಂತೆ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂಬುದನ್ನು ಸಾರಿಗೆ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಜನವರಿಯಿಂದ ಸೆಪ್ಟೆಂಬರ್‌ವರೆಗೆ 1,051 ಅಪಘಾತ ಪ್ರಕರಣ ಸಂಭವಿಸಿವೆ. ಏಪ್ರಿಲ್‌ನಲ್ಲಿ 38, ಮೇ 100, ಜೂನ್‌ 134, ಜುಲೈ 115, ಆಗಸ್ಟ್‌ 140 ಹಾಗೂ ಸೆಪ್ಟೆಂಬರ್‌ನಲ್ಲಿ 131 ಅಪಘಾತ ಪ್ರಕರಣ ದಾಖಲಾಗಿವೆ. ಜನವರಿಯಿಂದ ಮಾರ್ಚ್‌ವರೆಗೆ 393 ಅಪಘಾತ ನಡೆದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.