ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಧಿಕಾರದ ವಿರುದ್ಧವೂ ಪ್ರಕರಣ ದಾಖಲಿಸಿ

ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ
Last Updated 13 ಫೆಬ್ರುವರಿ 2020, 13:48 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದೇ ಅಪಘಾತ ಪ್ರಕರಣ ಹೆಚ್ಚಾದಲ್ಲಿ ಪ್ರಾಧಿಕಾರದ ಅಧಿಕಾರಿಗಳನ್ನೂ ತಪ್ಪಿತಸ್ಥರನ್ನಾಗಿಸಿ ಪ್ರಕರಣ ದಾಖಲಿಸಿ’ ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲಹೆ ನೀಡಿದರು.

ಗುರುವಾರ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯಲ್ಲಿ ಮಾತನಾಡಿದ ಅವರು, ‘ಸುರಕ್ಷತಾ ಕ್ರಮ ಕೈಗೊಳ್ಳಲು ಅನೇಕ ಬಾರಿ ಸಭೆಗಳಲ್ಲಿ ಸೂಚನೆ ನೀಡಲಾಗಿದೆ. ಪಾಲಿಸಲು ಅಧಿಕಾರಿಗಳು ಮುಂದಾಗುತ್ತಿಲ್ಲ’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

‘ಜಿಲ್ಲೆಯಲ್ಲಿ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿವೆ. ಈ ಮಾರ್ಗಗಳಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶಿರಾದಿಂದ ಹಿರಿಯೂರು, ಚಿತ್ರದುರ್ಗ ಮಾರ್ಗದಲ್ಲೇ ಹೆಚ್ಚಿನ ಅಪಘಾತ ಆಗುತ್ತಿವೆ. ಈ ಕಾರಣಕ್ಕಾಗಿ ಅಪಘಾತ ಪ್ರದೇಶಗಳಲ್ಲಿ ಸುರಕ್ಷತಾ ಸೂಚನಾ ಫಲಕ, ಬ್ಲಿಂಕರ್ಸ್, ರಿಫ್ಲೆಕ್ಟರ್ಸ್, ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಝೀಬ್ರಾ ಕ್ರಾಸ್ ಗುರುತು ಮಾಡುವುದು ಸೇರಿ ಹಲವು ಸುರಕ್ಷತಾ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರೂ ಪಾಲಿಸುತ್ತಿಲ್ಲ’ ಎಂದು ಅಧಿಕಾರಿಗಳ ವಿರುದ್ಧ ಚಾಟಿ ಬೀಸಿದರು.

‘ಆಂಬುಲೆನ್ಸ್‌ಗಳ ಸಂಖ್ಯೆ ಹೆಚ್ಚಿಸಿಲ್ಲ. ಅಪಘಾತಗಳು ಸಂಭವಿಸಿ ಜನರ ಪ್ರಾಣ ಹಾನಿಯಾಗುತ್ತಲೇ ಇದ್ದರೂ ಅಧಿಕಾರಿಗಳು ಕಾಳಜಿ ವಹಿಸುತ್ತಿಲ್ಲ. ಅಪಘಾತಗಳ ಸಂಖ್ಯೆ ತಡೆಗಟ್ಟಿ, ಜನರ ಪ್ರಾಣ ರಕ್ಷಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಸರ್ಕಾರ ಹಾಗೂ ನ್ಯಾಯಾಲಯ ಆದೇಶಿಸಿದೆ. ಹೀಗಿದ್ದರೂ ಸ್ಪಂದಿಸದಿದ್ದರೆ ಹೇಗೆ’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ಹಿರಿಯೂರು ಸಮೀಪದ ಡಾಬಾಗಳಿಗೆ ಬರುವವರು ವಾಹನವನ್ನು ಹೆದ್ದಾರಿಯಲ್ಲಿ ನಿಲುಗಡೆ ಮಾಡುತ್ತಾರೆ. ಇದರಿಂದ ಅಪಘಾತ ಆಗುವ ಸಂಭವ ಹೆಚ್ಚು. ಇಂತಹ ಕಡೆಗಳಲ್ಲಿ ವಾಹನಗಳನ್ನು ಹೆದ್ದಾರಿಯಲ್ಲಿ ನಿಲ್ಲಿಸದಂತೆ ಕ್ರಮ ಕೈಗೊಳ್ಳಬೇಕು. ಇಲ್ಲ ಡಾಬಾಗಳನ್ನೇ ತೆರವುಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಜಿಲ್ಲೆಯ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಹಿಂದಿನ 3 ವರ್ಷಗಳಲ್ಲಿ ಸಂಭವಿಸಿದ ಅಪಘಾತಗಳ ಸಂಖ್ಯೆ ಆಧರಿಸಿ, 36 ಕಡೆ ಬ್ಲಾಕ್‌ ಸ್ಪಾಟ್‌ ಗುರುತಿಸಲಾಗಿದೆ. ಆರ್‌ಟಿಒ, ಲೋಕೋಪಯೋಗಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತೊಮ್ಮೆ ಜಂಟಿ ಸಮೀಕ್ಷೆ ನಡೆಸುವ ಅಗತ್ಯವಿದೆ. ಆ ನಂತರ ಪರಿಷ್ಕೃತ ವರದಿ ಸಲ್ಲಿಸಲು ಅನುಕೂಲವಾಗಲಿದೆ’ ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಎನ್. ಸತೀಶ್ ತಿಳಿಸಿದರು.

ಬಸ್ ಸಂಚಾರಕ್ಕೆ ಅವಕಾಶವಿಲ್ಲ:‘ನಗರದ ಎಪಿಎಂಸಿ ಯಾರ್ಡ್ ಆವರಣದೊಳಗೆ ಕೆಎಸ್‍ಆರ್‌ಟಿಸಿ ಹಾಗೂ ಖಾಸಗಿ ಬಸ್‍ಗಳು ಸಂಚರಿಸುತ್ತಿದ್ದು, ಮಾರುಕಟ್ಟೆ ಚಟುವಟಿಕೆಗೆ ತೊಂದರೆಯಾಗುತ್ತಿದೆ’ ಎಂದು ಎಪಿಎಂಸಿ ಜಂಟಿ ನಿರ್ದೇಶಕ ಮಹೇಶ್ ಸಭೆಯ ಗಮನ ಸೆಳೆದರು. ‘ಇನ್ನು ಮುಂದೆ ಯಾವುದೇ ಬಸ್‍ ಸಂಚರಿಸದಂತೆ ಅಗತ್ಯ ಕ್ರಮ ಕೈಗೊಳ್ಳಿ’ ಎಂದು ವಿನೋತ್‌ ಪ್ರಿಯಾ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ‘ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಸಲಹೆ ಪಾಲಿಸದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಿರಿಯೂರು ಹೆದ್ದಾರಿಯಲ್ಲಿ ವಾಹನ ನಿಲುಗಡೆ ಇರುವ ಪ್ರದೇಶಗಳಿಗೆ ನಿಲುಗಡೆ ನಾಮಫಲಕ ಹಾಕಬೇಕು. ಜಿಲ್ಲೆಯ ಪ್ರಮುಖ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ ಸ್ಥಳ ಗುರುತಿಸಿ ವರದಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ವಹಣಾ ಎಂಜಿನಿಯರ್ ಮಹೇಂದ್ರ, ಕೆಎಸ್‍ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT