ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪ್ರಯೋಗಾಲಯ ಇಂದಿನಿಂದ ಆರಂಭ

Last Updated 7 ಸೆಪ್ಟೆಂಬರ್ 2020, 12:03 IST
ಅಕ್ಷರ ಗಾತ್ರ

ಚಿತ್ರದುರ್ಗ: ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಿದ ಕೊರೊನಾ ಸೋಂಕು ಪರೀಕ್ಷೆಯ ಆರ್‌ಟಿಪಿಸಿಆರ್‌ ಪ್ರಯೋಗಾಲಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಚಾಲನೆ ನೀಡಲಿದ್ದಾರೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಯೋಗಾಲಯ ಲೋಕಾರ್ಪಣೆ ಕಾರ್ಯಕ್ರಮ ಸೆ.8ಕ್ಕೆ ನಿಗದಿಯಾಗಿದೆ. ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆಯುವ ಸಮಾರಂಭದಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾರ್‌, ಸಂಸದ ಎ.ನಾರಾಯಣಸ್ವಾಮಿ ಸೇರಿ ಹಲವರು ಪಾಲ್ಗೊಳ್ಳುವರು’ ಎಂದು ಮಾಹಿತಿ ನೀಡಿದರು.

‘ಕೊರೊನಾ ಸೋಂಕು ದಿನ ಕಳೆದಂತೆ ಹೆಚ್ಚಾಗುತ್ತಿದೆ. ಜನರು ಆತಂಕಪಡುವ ಬದಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ಉದ್ದೇಶದಿಂದ ಪ್ರಯೋಗಾಲಯ ಶುರು ಮಾಡಲಾಗುತ್ತಿದೆ’ ಎಂದು ಹೇಳಿದರು.

ಬಸವೇಶ್ವರ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಪ್ರಶಾಂತ್ ಮಾತನಾಡಿ, ‘ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿರುವವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು. ಸರ್ಕಾರದ ನಿರ್ದೇಶನದಂತೆ ಪ್ರತಿ ಮಾದರಿಯ ಪರೀಕ್ಷೆಗೆ ₹ 3,000 ನಿಗದಿಪಡಿಸಲಾಗಿದೆ. ಆಯುಷ್ಮಾನ್‌ ಭಾರತ ಸೌಲಭ್ಯವೂ ಕೋವಿಡ್‌ಗೆ ಅನ್ವಯಿಸುತ್ತದೆ. ಸರ್ಕಾರಿ ಆಸ್ಪತ್ರೆಯ ಶಿಫಾರಸು ಪತ್ರ ಹೊಂದಿದವರ ವೆಚ್ಚವನ್ನು ಸರ್ಕಾರ ಭರಿಸಲಿದೆ’ ಎಂದರು.

‘ಜಿಲ್ಲಾ ಆಸ್ಪತ್ರೆಯಲ್ಲಿ ಈಗಾಗಲೇ ಆರ್‌ಟಿಪಿಸಿಆರ್ ಪ್ರಯೋಗಾಲಯ ಕಾರ್ಯಾರಂಭವಾಗಿದೆ. ವೈದ್ಯಕೀಯ ಕಾಲೇಜು ಪ್ರಯೋಗಾಲಯ ಹೆಚ್ಚುವರಿಯಾಗಿ ಲಭ್ಯವಿದೆ. ಕೊರೊನಾ ಸೋಂಕಿತರನ್ನು ಶೀಘ್ರ ಪತ್ತೆ ಮಾಡಲು ಅನುಕೂಲವಾಗಲಿದೆ. ಆಸ್ಪತ್ರೆಯಲ್ಲಿ 25 ವೆಂಟಿಲೇಟರ್‌ಗಳಿದ್ದು, 6 ವೆಂಟಿಲೇಟರ್‌ಗಳನ್ನು ಕೋವಿಡ್ ಚಿಕಿತ್ಸೆಗೆ ನೀಡಲು ಸಿದ್ಧರಿದ್ದೇವೆ’ ಎಂದು ಹೇಳಿದರು.

ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಾಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಬಸವೇಶ್ವರ ವೈದ್ಯಕೀಯ ಕಾಲೇಜು ಅಧೀಕ್ಷಕ ಡಾ.ಫಾಲಾಕ್ಷಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT