ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನ ವ್ಯಾಸಂಗಕ್ಕೆ ಕನ್ನಡ ಮಾಧ್ಯಮ: ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ

ಪಿಯು ಫಲಿತಾಂಶ ವೃದ್ಧಿಸಲು ವಿನೂತನ ಪ್ರಯೋಗ
Last Updated 22 ಜನವರಿ 2020, 14:26 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುಂಬರುವ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ 21 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದ ವಿಜ್ಞಾನ ವಿಭಾಗ ಆರಂಭಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಿಯು ಫಲಿತಾಂಶವನ್ನು ಉತ್ತಮಪಡಿಸುವ ಉದ್ದೇಶದಿಂದ ಕನ್ನಡ ಮಾಧ್ಯಮಕ್ಕೆ ಒತ್ತು ನೀಡಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಕನ್ನಡ ಮಾಧ್ಯಮಕ್ಕೆ ಅವಕಾಶ ಕಲ್ಪಿಸಲಾಗಿದೆ. ಕನ್ನಡ ಮತ್ತು ಆಂಗ್ಲ ವಿಭಾಗಕ್ಕೆ ಪ್ರತ್ಯೇಕ ವಿಭಾಗ ಇರಲಿವೆ. ಮಾಧ್ಯಮದ ಆಯ್ಕೆ ಸ್ವಾತಂತ್ರ್ಯವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಎಸ್ಸೆಸ್ಸೆಲ್ಸಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಇದು ಅನುಕೂಲವಾಗಿದೆ. ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡುವ ಉಪನ್ಯಾಸಕರೇ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೂ ಬೋಧಿಸಲಿದ್ದಾರೆ.

ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದ ಅಧ್ಯಯನಕ್ಕೆ ಆಂಗ್ಲ ಮಾಧ್ಯಮವಷ್ಟೇ ಇದೆ. ಕನ್ನಡ ಮಾಧ್ಯಮದಲ್ಲಿ ವಿಜ್ಞಾನ ಬೋಧನೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂಬ ಸಲಹೆ ಮೇರೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಈ ನಿರ್ಧಾರ ಪ್ರಕಟಿಸಿದರು.

‘ಭೌತವಿಜ್ಞಾನ, ರಸಾಯನವಿಜ್ಞಾನ, ಗಣಿತ, ಜೀವ ವಿಜ್ಞಾನದ ವಿಷಯಗಳನ್ನು ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿಯಲು ಅವಕಾಶವಿದೆ. ಎಸ್ಸೆಸ್ಸೆಲ್ಸಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮ ಕಷ್ಟವಾಗಲಿದೆ. ಇದರಿಂದ ವಿಜ್ಞಾನ ವಿಭಾಗದಲ್ಲಿ ಅನುರ್ತೀರ್ಣಗೊಳ್ಳುತ್ತಿರುವವರ ಪ್ರಮಾಣವೂ ಹೆಚ್ಚಾಗಿದೆ. ಕನ್ನಡ ಮಾಧ್ಯಮದಲ್ಲಿ ವಿಜ್ಞಾನ ವ್ಯಾಸಂಗ ಮಾಡುವ ಬಯಕೆ ಇರುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಿದೆ’ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

‘ಇಂಗ್ಲಿಷ್ ಭಾಷೆ ಕಷ್ಟ ಎಂಬ ಭಯದಿಂದ ಅನೇಕರು ಕಲೆ ಹಾಗೂ ವಾಣಿಜ್ಯ ವಿಭಾಗ ಸೇರುತ್ತಿದ್ದಾರೆ. ಕೆಲವರು ಶಿಕ್ಷಣ ಮೊಟಕುಗೊಳಿಸಿ ಗ್ಯಾರೇಜ್ ಅಥವಾ ಹೋಟೆಲ್‍ ಸೇರಿಕೊಳ್ಳುತ್ತಿದ್ದಾರೆ. ಕನ್ನಡ ಮಾಧ್ಯಮದಲ್ಲಿ ವಿಜ್ಞಾನ ವಿಭಾಗ ಆರಂಭವಾದರೆ ಈ ಸಮಸ್ಯೆ ತಪ್ಪಲಿದೆ. ಪಿಯುಸಿ ವಿಜ್ಞಾನ ವಿಷಯಗಳ ಕನ್ನಡ ಮಾಧ್ಯಮದ ಪುಸ್ತಕಗಳು ಲಭ್ಯ ಇವೆ. ಪ್ರಶ್ನೆ ಪತ್ರಿಕೆಗಳನ್ನು ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮಗಳೆರಡರಲ್ಲೂ ನೀಡಲಾಗುತ್ತಿದೆ’ ಎಂದು ಹೇಳಿದರು.

‘ನೀಟ್ ಹಾಗೂ ಯುಪಿಎಸ್‌ಸಿ ಸೇರಿ ಹಲವು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿಯೂ ಪ್ರಶ್ನೆ ಪತ್ರಿಕೆ ನೀಡಲಾಗುತ್ತಿದೆ. ಕನ್ನಡ ಮಾಧ್ಯಮದಲ್ಲಿಯೇ ವಿಜ್ಞಾನ ವಿಷಯ ವ್ಯಾಸಂಗ ಮಾಡಲು ಅವಕಾಶ ಇರುವ ಬಗ್ಗೆ ಜಿಲ್ಲೆಯ ಎಲ್ಲ ಪ್ರೌಢಶಾಲೆಗಳಿಗೆ ಮಾಹಿತಿ ನೀಡಿ’ ಎಂದರು.

ಡಿಡಿಪಿಐ ಕೆ. ರವಿಶಂಕರ ರೆಡ್ಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗರಾಜಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT