ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರ ಕೊರತೆ ಸಮಸ್ಯೆಗೆ ಶೀಘ್ರ ಪರಿಹಾರ: ಬಿ.ವಿ. ಗಿರೀಶ್‌

Published 23 ಜನವರಿ 2024, 14:29 IST
Last Updated 23 ಜನವರಿ 2024, 14:29 IST
ಅಕ್ಷರ ಗಾತ್ರ

ಸಿರಿಗೆರೆ: ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ವೈದ್ಯರ ಕೊರತೆಯನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಬಿ.ವಿ. ಗಿರೀಶ್‌ ತಿಳಿಸಿದರು.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. 

‘ರಾಜ್ಯಮಟ್ಟದ ತರಬೇತಿಗೆ ನಿಯೋಜನೆಗೊಂಡಿರುವ ವೈದ್ಯರು ಒಂದೆರಡು ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಾರೆ. ಹಿರಿಯ ತಜ್ಞ ವೈದ್ಯರಿಗೆ ಆರೋಗ್ಯದ ಸಮಸ್ಯೆ ಇದ್ದರೂ ರೋಗಿಗಳ ಹಿತದೃಷ್ಟಿಯಿಂದ ಕರ್ತವ್ಯಕ್ಕೆ ಬರಲು ಮನವಿ ಮಾಡಿದ್ದೇವೆ. ಮಹಿಳಾ ವೈದ್ಯರ ಗುತ್ತಿಗೆ ಅವಧಿ ಮುಗಿದಿದ್ದು, ಅವರನ್ನು ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮುಂದುವರಿಸಲು ಈಗಾಗಲೇ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ’ ಎಂದು ತಿಳಿಸಿದರು.

‘ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಮತ್ತು ಸಿರಿಗೆರೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳು, 20 ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಕೆಲವೆಡೆ ವೈದ್ಯರ ಕೊರತೆ ಇದೆ. ತಾತ್ಕಾಲಿಕ ನಿಯೋಜನೆ ಮೇರೆಗೆ ಆ ಎಲ್ಲ ಸಮಸ್ಯೆಗಳನ್ನು ಪರಿಹರಿಸುತ್ತಿದ್ದೇವೆ. ಹಿರಿಯ ವೈದ್ಯರನ್ನು ಇಲಾಖೆಯು ತರಬೇತಿಗೆ ನಿಯೋಜನೆ ಮಾಡಿದ ಸಂದರ್ಭದಲ್ಲಿ ಇಂತಹ ಸಮಸ್ಯೆ ಎದುರಾಗುತ್ತಿದೆ’ ಎಂದರು.

ಜನೌಷಧಿ ಕೇಂದ್ರ:

ಇಲ್ಲಿನ ನಾಗರಿಕರ ಬೇಡಿಕೆಗೆ ಸ್ಪಂದಿಸಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರ ತೆರೆಯಲು ಇಲಾಖೆ ಮುಂದಾಗಿದೆ. ಉತ್ತಮ ಸೇವೆ ನೀಡಬೇಕೆಂಬುದಕ್ಕೆ ಇದು ನಿದರ್ಶನವಾಗಿದೆ ಎಂದು ಬಿ.ವಿ. ಗಿರೀಶ್‌ ತಿಳಿಸಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಡಾ. ತುಳಸಿ ರಂಗನಾಥ್‌, ಡಾ. ಪವಿತ್ರಾ, ಹಿರಿಯ ಫಾರ್ಮಸಿಸ್ಟ್‌ ವೈ.ಸಿ. ಮೋಹನ್‌ ಕುಮಾರ್‌, ಗ್ರಾಮ ಪಂಚಾಯಿತಿ ಸದಸ್ಯ ಎಂ.ಜಿ. ದೇವರಾಜ್‌, ಆಸ್ಪತ್ರೆಯ ಆಡಳಿತ ವಿಭಾಗದ ಮಂಜುಳಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT