ಶುಕ್ರವಾರ, ಆಗಸ್ಟ್ 19, 2022
27 °C

ಮಹಾಗಣಪತಿ ವಿಸರ್ಜನೆಗೆ ಭಾರಿ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ನಗರದಲ್ಲಿ ಸೆ.12ಕ್ಕೆ ನಿಗದಿಯಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆಗೆ ಪೊಲೀಸ್‌ ಇಲಾಖೆ ಭಾರಿ ಭದ್ರತೆ ಕಲ್ಪಿಸಿದೆ. ಒಂದು ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲು ಸಿದ್ಧತೆ ಮಾಡಿಕೊಂಡಿದೆ.

‘ಇದು ತುಂಬಾ ಸೂಕ್ಷ್ಮ ವಿಚಾರ. ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸರಳವಾಗಿ ನಡೆದರೂ ಭದ್ರತೆಯ ವಿಚಾರದಲ್ಲಿ ಸರಳತೆ ತೋರಲು ಸಾಧ್ಯವಿಲ್ಲ. ಪ್ರತಿ ವರ್ಷದಂತೆ ಭದ್ರತೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮದ್ಯ ಮಾರಾಟ ನಿಷೇಧಕ್ಕೂ ಶಿಫಾರಸು ಮಾಡಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಶೋಭಾಯಾತ್ರೆ ಅಥವಾ ಮೆರವಣಿಗೆಗೆ ಅವಕಾಶವಿಲ್ಲ. ಗಣೇಶಮೂರ್ತಿಯನ್ನು ಸರಳವಾಗಿ ವಿಸರ್ಜನೆ ಮಾಡುವುದಾಗಿ ಸಮಿತಿ ಮಾಹಿತಿ ನೀಡಿದೆ. ನಾಲ್ಕು ಟ್ರ್ಯಾಕ್ಟರ್‌ಗಳಲ್ಲಿ ಮೂರ್ತಿಯನ್ನು ಚಂದ್ರವಳ್ಳಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಗಣೇಶ ಮೂರ್ತಿ, ರಾಮ ದೇವರ ವಿಗ್ರಹ, ನಾದಸ್ವರ ತಂಡ ಹಾಗೂ ಸ್ವಯಂ ಸೇವಕರು ಟ್ರ್ಯಾಕ್ಟರ್‌ನಲ್ಲಿ ಇರುತ್ತಾರೆ. ವಿಸರ್ಜನೆಯಲ್ಲಿ ಪಾಲ್ಗೊಳ್ಳಲು ಬರುವ ಜನರನ್ನು ಪೊಲೀಸರು ಮನೆಗೆ ಕಳುಹಿಸಲಿದ್ದಾರೆ’ ಎಂದು ಹೇಳಿದರು.

‘ಬಿ.ಡಿ.ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗುತ್ತದೆ. ಗಣೇಶಮೂರ್ತಿ ಸಾಗುವ ಮಾರ್ಗವನ್ನು ಸಂಪರ್ಕಿಸುವ ಎಲ್ಲ ರಸ್ತೆಗೆ ಬ್ಯಾರಿಕೇಡ್ ಹಾಕಲಾಗುತ್ತದೆ. ವೀಕ್ಷಣಾ ಗೋಪುರದಲ್ಲಿ ಪೊಲೀಸರು ದೂರದರ್ಶಕ ಹಿಡಿದು ಗಮನಿಸುತ್ತಾರೆ. 50ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಹತ್ತು ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ’ ಎಂದು ವಿವರಿಸಿದರು.

‘ನಗರ ಪ್ರವೇಶಿಸುವ ಎಲ್ಲ ರಸ್ತೆಯಲ್ಲಿ ಚೆಕ್‌ಪೋಸ್ಟ್‌ ತೆರೆಯಲಾಗುತ್ತದೆ. ಸೆ.11ರ ಮಧ್ಯಾಹ್ನ 2ರಿಂದ ಸೆ.12ರ ಮಧ್ಯರಾತ್ರಿಯವರೆಗೆ ಚಿತ್ರದುರ್ಗ ತಾಲ್ಲೂಕಿನಲ್ಲಿ ಮದ್ಯ ಮಾರಾಟ ನಿಷೇಧಕ್ಕೆ ಶಿಫಾರಸು ಮಾಡಲಾಗಿದೆ. ನಗರ ವ್ಯಾಪ್ತಿಯಲ್ಲಿ 77 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.