ಗುರುವಾರ , ಮಾರ್ಚ್ 30, 2023
24 °C
ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ

ಕೋವಿಡ್‌ ಸಾವಿಗೆ ಸರ್ಕಾರವೇ ಹೊಣೆ: ಎಸ್‌.ಆರ್‌.ಪಾಟೀಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಕೋವಿಡ್‌ನಿಂದ ಉಂಟಾಗಿರುವ ಸಾವು–ನೋವಿಗೆ ಸರ್ಕಾರವೇ ಹೊಣೆ. ಕೋವಿಡ್‌ ನಿಯಂತ್ರಣ ಹಾಗೂ ಚಿಕಿತ್ಸೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌.ಪಾಟೀಲ ಆರೋಪಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಸೋಂಕು ಹೆಚ್ಚಾಗಿದ್ದ ಸಂದರ್ಭದಲ್ಲಿ ಆಮ್ಲಜನಕ, ಔಷಧಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹಾಸಿಗೆ ಸಿಗದೇ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸಿದೆ’ ಎಂದು ಕಿಡಿಕಾರಿದರು.

‘ಕೋವಿಡ್ ನಿಯಂತ್ರಣಕ್ಕೆ ಅತಿ ಮುಖ್ಯವಾಗಿ ಬೇಕಾಗುವ ಲಸಿಕೆ ಎಲ್ಲರಿಗೂ ಸಿಗುತ್ತಿಲ್ಲ. 140 ಕೋಟಿ ಜನಸಂಖ್ಯೆಯಲ್ಲಿ ಶೇ 6ರಷ್ಟು ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ 9 ಮಾತ್ರ. ಮೂರನೇ ಅಲೆ ಕಾಣಿಸಿಕೊಂಡರೆ ಇನ್ನಷ್ಟು ಸಮಸ್ಯೆ ಆಗಲಿದೆ. ದೇಶದಲ್ಲಿ ಲಸಿಕೆಗೆ ಬೇಡಿಕೆ ಇದ್ದರೂ, ವಿದೇಶಕ್ಕೆ ರವಾನಿಸಲಾಗಿದೆ’ ಎಂದು ದೂರಿದರು.

‘ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಬೆಲೆ ನಿಯಂತ್ರಣ ಮಾಡುವಲ್ಲಿಯೂ ಸರ್ಕಾರದ ವೈಫಲ್ಯ ಕಾಣುತ್ತಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ₹ 350 ಇದ್ದ ಅಡುಗೆ ಅನಿಲದ ಬೆಲೆ ₹ 800ಕ್ಕೆ ಏರಿಕೆಯಾಗಿದೆ. ನೋಟು ಅಮಾನ್ಯೀಕರಣ, ಜಿಎಸ್‌ಟಿ ಹಾಗೂ ಅವೈಜ್ಞಾನಿಕ ಆರ್ಥಿಕ ನೀತಿಯಿಂದಾಗಿ ದೇಶಕ್ಕೆ ಸಂಕಷ್ಟ ಎದುರಾಗಿದೆ. ಮುಂಬರುವ ಚುನಾವಣೆ ನಿರ್ಣಾಯಕವಾಗಿದ್ದು, ಜನರು ಪಾಠ ಕಲಿಸಲಿದ್ದಾರೆ. ಬಿಜೆಪಿ ಧೂಳಿಪಟಟವಾಗಲಿದೆ’ ಎಂದರು.

‘ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ರಫೆಲ್‌ ಯುದ್ದ ವಿಮಾನ ಖರೀದಿಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಭ್ರಷ್ಟಾಚಾರಕ್ಕೆ ಇದೊಂದು ನಿದರ್ಶನ ಸಾಕು. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ₹ 2 ಸಾವಿರ ಕೋಟಿ ಕಿಕ್‌ಬ್ಯಾಕ್‌ ಪಡೆಯಲಾಗಿದೆ ಎಂದು ಬಿಜೆಪಿ ನಾಯಕರೇ ಆರೋಪಿಸುತ್ತಿದ್ದಾರೆ’ ಎಂದು ಹೇಳಿದರು.

‘ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳು ಅವೈಜ್ಞಾನಿಕವಾಗಿವೆ. ಇದನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ರೈತರ ಸಮಸ್ಯೆ ಆಲಿಸುವ ಕಾಳಜಿಯನ್ನು ಪ್ರಧಾನಿ ನರೇಂದ್ರ ಮೋದಿ ತೋರುತ್ತಿಲ್ಲ’ ಎಂದು ಕಿಡಿಕಾರಿದರು.

ಶಾಸಕ ಟಿ.ರಘುಮೂರ್ತಿ, ಕೆಪಿಸಿಸಿ ವಕ್ತಾರ ಬಿ.ಎನ್‌.ಚಂದ್ರಪ್ಪ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ, ಮಾಜಿ ಸಚಿವ ಎ.ವಿ.ಉಮಾಪತಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು