ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ಮಹಿಳೆಯರ ಅನೈತಿಕ ಸಾಗಾಣೆ ತಡೆಗಟ್ಟಿ

ವಿಭಾಗೀಯ ಮಟ್ಟದ ಕಾರ್ಯಾಗಾರದಲ್ಲಿ ಜಿಲ್ಲಾ ನ್ಯಾಯಾಧೀಶ ಎಸ್.ವೈ. ವಟವಟಿ
Last Updated 27 ಡಿಸೆಂಬರ್ 2019, 14:45 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಲ್ಲಿ ಸಾರ್ವಜನಿಕರು ಮುಂದಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು. ಆಗ ಮಾತ್ರ ಅಮಾನವೀಯ ಕೃತ್ಯ ನಿಯಂತ್ರಿಸಲು ಸಾಧ್ಯ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಎಸ್.ವೈ. ವಟವಟಿ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯೂನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಆಯೋಜಿಸಿದ್ದ ಬಾಲ್ಯವಿವಾಹ ನಿಷೇಧ ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತ ವಿಭಾಗೀಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಮಾನವ ಕಳ್ಳ ಸಾಗಾಣೆಯಿಂದ ಅಂಗಾಂಗಗಳ ಮಾರಾಟ ಹೆಚ್ಚಾಗುತ್ತಿದೆ. ಈ ರೀತಿಯ ದುಷ್ಕೃತ್ಯ ಸಮಾಜಕ್ಕೆ ಮಾರಕವಾಗಿದೆ. ಜತೆಗೆ ಮೂಲ ಹಕ್ಕುಗಳ ಉಲ್ಲಂಘನೆ ಕುರಿತು ಅನೇಕ ದೂರುಗಳು ದಾಖಲಾಗುತ್ತಿವೆ. ಆದ್ದರಿಂದ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಜವಾಬ್ದಾರಿ ಅರಿತು ಸಾರ್ವಜನಿಕರು ಕರ್ತವ್ಯ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಕೆ. ದಯಾನಂದ, ‘ಬಾಲ್ಯವಿವಾಹ ನಿಷೇಧ ಸಂಬಂಧ ಅಧಿಕಾರಿಗಳು ಸಂವೇದನಾ ಶೀಲತೆಯಿಂದ ಕೆಲಸ ಮಾಡದಿರುವುದು ಬೇಸರದ ಸಂಗತಿ. ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ಸಮಾಜದಲ್ಲಿನ ಪಿಡುಗುಗಳನ್ನು ಹೋಗಲಾಡಿಸಲು ಮುಂದಾಗಬೇಕು’ ಎಂದು ತಿಳಿಸಿದರು.

‘ಸಮಾಜದಲ್ಲಿ ನಡೆಯುವಂಥ ಕಾನೂನು ಬಾಹಿರ ಘಟನೆಗಳಿಗೆ ಮೌನವಹಿಸಿದರೆ, ಪರೋಕ್ಷವಾಗಿ ಅಪರಾಧಿಗಳಾದಂತೆ. ಆದ್ದರಿಂದ ಕಣ್ಣ ಮುಂದೆ ದುಷ್ಕೃತ್ಯಗಳು ನಡೆದಾಗ ಅದನ್ನು ತಪ್ಪಿಸಬೇಕಾದ್ದು, ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದ ಅವರು, ‘ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸದುಪಯೋಗವಾಗುವಂತೆ ಮಾಡಿ, ಸಮಾಜದ ಬದಲಾವಣೆಗೆ ಶ್ರಮಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ, ‘ಬಾಲ್ಯವಿವಾಹ ಹಾಗೂ ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಬೇಕು. ಇವನ್ನು ತಡೆಗಟ್ಟುವಲ್ಲಿ ಶಿಕ್ಷಣ ಇಲಾಖೆಯ ಪಾತ್ರ ಬಹುಮುಖ್ಯವಾಗಿದೆ. ಶಾಲೆ ಬಿಟ್ಟ ಮಕ್ಕಳು, ಅದರಲ್ಲೂ ಬಾಲಕಿಯರ ಬಗ್ಗೆ ಹೆಚ್ಚು ಗಮನಹರಿಸಬೇಕು. ಮಕ್ಕಳ ಕುಟುಂಬದೊಂದಿಗೆ ನಿರಂತರ ಸಂಪರ್ಕ ಹೊಂದಿ, ಅವರ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಬೇಕು’ ಎಂದು ಸಲಹೆ ನೀಡಿದರು.

‘ಚಿತ್ರದುರ್ಗ ಹಿಂದುಳಿದ ಜಿಲ್ಲೆಯಾಗಿದ್ದು, ಬಾಲ್ಯವಿವಾಹ ಪ್ರಕರಣ ಕೆಲವೆಡೆ ಕಂಡು ಬರುತ್ತಿದೆ. ಅನಕ್ಷರತೆ, ಸಾಂಪ್ರದಾಯಿಕ ಹಾಗೂ ಆರ್ಥಿಕ ಪಿಡುಗುಗಳಂತಹ ಜ್ವಲಂತ ಸಮಸ್ಯೆಗಳು, ಊರಿನ ಪ್ರಮುಖ ಹಬ್ಬ ಆಚರಣೆ ಅಥವಾ ಸಾಮೂಹಿಕ ವಿವಾಹಗಳ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಇದನ್ನು ತಡೆಗಟ್ಟುವಲ್ಲಿ ಎಲ್ಲರ ಸಹಕಾರ ಅತ್ಯಗತ್ಯ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕಿ ಕೆ.ಎಂ. ರೇವತಿ, ಇಲಾಖೆ ಉಪನಿರ್ದೇಶಕರಾದ ಕೆ. ಹಲೀಮಾ, ರಾಜಾನಾಯ್ಕ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಆರ್. ಪ್ರಭಾಕರ್, ಯೂನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ವಿಭಾಗೀಯ ಸಂಯೋಜಕ ರಾಘವೇಂದ್ರ ಭಟ್, ಮಹಿಳಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಲಕ್ಷ್ಮಿಕಾಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT