ಶನಿವಾರ, ಫೆಬ್ರವರಿ 4, 2023
28 °C

ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧರ್ಮಪುರ: ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಸಮೀಪದ ಬೆನಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಮತ್ತು ಪೋಷಕರು ಶುಕ್ರವಾರ ಧರ್ಮಪುರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು.

ಬೆನಕನಹಳ್ಳಿ ಅತ್ಯಂತ ಹಿಂದುಳಿದ ಗ್ರಾಮವಾಗಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದಾರೆ. ಧರ್ಮಪುರದಿಂದ ಸುಮಾರು 8 ಕಿ.ಮೀ.ದೂರವಿದೆ. ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣದ ಸೌಲಭ್ಯ ಮಾತ್ರ ಇದೆ. ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ, ಐಟಿಐ ಶಿಕ್ಷಣ ಪಡೆಯಲು ನಿತ್ಯ 8 ಕಿ.ಮೀ. ಕಾಲ್ನಡಿಗೆಯಲ್ಲಿ ಧರ್ಮಪುರಕ್ಕೆ ಬರಬೇಕು. ಯಾವುದೇ ಆಟೊ ಅಥವಾ ವಾಹನಗಳ ಸೌಲಭ್ಯ ಇಲ್ಲ ಎಂದು ಪೋಷಕರು ತಿಳಿಸಿದರು.

ಬೆನಕನಹಳ್ಳಿಗೆ ಬಸ್ ಸೌಲಭ್ಯ ಕಲ್ಪಿಸುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವಿಸ್ತೃತ ವರದಿ ಪ್ರಕಟಗೊಂಡ ಮೇಲೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ ತುರ್ತಾಗಿ ಸಾರಿಗೆ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಆದಕಾರಣ ಪ್ರತಿಭಟನೆ ನಡೆಸಬೇಕಾಯಿತು ಎಂದು ವಿದ್ಯಾರ್ಥಿಗಳು ತಿಳಿಸಿದರು.

ಪ್ರತಿಭಟನೆಯಲ್ಲಿ ಶಿವಮೂರ್ತಿ, ನಾಗರಾಜರಾವ್, ಶ್ರೀನಿವಾಸ್, ಲಕ್ಷ್ಮಣ್, ಬಾಬು ರಾಜೇಂದ್ರ ಪ್ರಸಾದ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು