ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪೀಡಿತ ಮಕ್ಕಳಿಗೆ ಪೂರಕ ಪರೀಕ್ಷೆ: ಸುರೇಶ್‌ ಕುಮಾರ್‌

ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಹೇಳಿಕೆ, ದಾವಣಗೆರೆ–ಚಿತ್ರದುರ್ಗ ಜಿಲ್ಲೆ ಅಧಿಕಾರಿಗಳ ಸಭೆ
Last Updated 31 ಮೇ 2020, 15:09 IST
ಅಕ್ಷರ ಗಾತ್ರ

ಚಿತ್ರದುರ್ಗ: ಕೋವಿಡ್‌–19 ಪೀಡಿತ, ಕ್ವಾರಂಟೈನ್‌ಗೆ ಒಳಪಟ್ಟಿರುವ ಹಾಗೂ ಕಂಟೈನ್‌ಮೆಂಟ್‌ ವಲಯದಲ್ಲಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಜುಲೈನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಅವಕಾಶ ಕಲ್ಪಿಸಲಾಗುವುದು. ಹೊಸ ಅಭ್ಯರ್ಥಿಗಳೆಂದು ಪರಿಗಣಿಸಿ ಪರೀಕ್ಷೆ ಬರೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಸಿದ್ಧತೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಹಾಗೂ ದಾವಣಗೆರೆ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಭಾನುವಾರ ಚರ್ಚಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಪರೀಕ್ಷೆ ಶುರುವಾಗುವ ಮೊದಲೇ ಸೋಂಕು ಕಾಣಿಸಿಕೊಂಡು ಇಡೀ ಪ್ರದೇಶ ಕಂಟೈನ್‌ಮೆಂಟ್‌ ವಲಯವಾದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಒಂದು ವೇಳೆ ಪರೀಕ್ಷಾ ಕೇಂದ್ರದಲ್ಲೇ ಸೋಂಕು ಕಾಣಿಸಿಕೊಂಡರೆ ಎಲ್ಲ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುತ್ತದೆ. ಈ ಬಗ್ಗೆ ಭಯಪಡುವ ಅಗತ್ಯವಿಲ್ಲ’ ಎಂದು ಹೇಳಿದರು.

‘ಪರೀಕ್ಷೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆ ನಡೆದಿದೆ. ಪರೀಕ್ಷೆ ನಡೆಸಬಾರದೆಂಬ ಕಾರಣಕ್ಕೆ ಕೆಲವರು ಹೈಕೋರ್ಟ್‌ ಮೊರೆ ಹೋಗಿದ್ದರು. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ಕಾರಣಕ್ಕೆ ನ್ಯಾಯಾಲಯ ಪರೀಕ್ಷೆಗೆ ಅವಕಾಶ ಕಲ್ಪಿಸಿದೆ. ಕೇರಳದಲ್ಲಿ ಈಗಾಗಲೇ ಪರೀಕ್ಷೆ ನಡೆದಿದ್ದು, ಜೂನ್‌ 15ರಿಂದ ತಮಿಳುನಾಡಿನಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಕೇಂದ್ರ ಗೃಹ ಸಚಿವಾಲಯ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಿದೆ’ ಎಂದು ಮಾಹಿತಿ ನೀಡಿದರು.

‘ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ಆರಂಭವಾಗುವುದಕ್ಕೂ ಎರಡು ದಿನಗಳ ಮೊದಲು ಕೇಂದ್ರವನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗುತ್ತದೆ. ಥರ್ಮಲ್‌ ಸ್ಕ್ಯಾನಿಂಗ್‌ ಮೂಲಕ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಸ್ಯಾನಿಟೈಸರ್‌ ಹಾಗೂ ಮಾಸ್ಕ್‌ ಉಚಿತವಾಗಿ ನೀಡಲಾಗುತ್ತದೆ’ ಎಂದು ವಿವರಿಸಿದರು.

‘ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರು ಸೇರಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ. ಆರೋಗ್ಯದ ಹಿತದೃಷ್ಟಿಯಿಂದ ಮನೆಯಿಂದ ನೀರು ತರಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಆಂಧ್ರಪ್ರದೇಶದಿಂದ 31 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಚಿತ್ರದುರ್ಗ ಜಿಲ್ಲೆಗೆ ಬರುತ್ತಾರೆ. ಇವರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಲಾಗುವುದು’ ಎಂದರು.

ಸಂಸದ ಎ. ನಾರಾಯಣಸ್ವಾಮಿ ಇದ್ದರು.

ಕಾಸರಗೋಡಿನಲ್ಲಿ ಪರೀಕ್ಷಾ ಕೇಂದ್ರ: ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆ ಜೂನ್‌ 18ರಂದು ನಿಗದಿಯಾಗಿದೆ. ಒಂದು ವಿಷಯದ ಪರೀಕ್ಷೆಗೆ ದೂರದ ಪರೀಕ್ಷಾ ಕೇಂದ್ರಕ್ಕೆ ಬರಲು ಅನೇಕರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅವರು ಇರುವ ಊರಿನ ಸಮೀಪವೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಕೇರಳದ ಕಾಸರಗೋಡಿನಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗುತ್ತಿದೆ ಎಂದು ಸುರೇಶ್‌ಕುಮಾರ್‌ ತಿಳಿಸಿದರು.

‘ಕೇರಳದ ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರುತ್ತಿದ್ದರು. ಕೋವಿಡ್‌–19 ಕಾಣಿಸಿಕೊಂಡ ಬಳಿಕ ರಾಜ್ಯದ ಗಡಿದಾಟಿ ಬರಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಸರಗೋಡು ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗುತ್ತಿದೆ. ಮಹಾರಾಷ್ಟ್ರ ಸೇರಿ ಹೊರರಾಜ್ಯದಿಂದ ಬರುವವರಿಗೆ ಪಾಸ್‌ ವ್ಯವಸ್ಥೆ ಮಾಡಲಾಗುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಎಳೆಯರಿಗೆ ಆನ್‌ಲೈನ್‌ ಶಿಕ್ಷಣ ಬೇಡ:‘ಆರು ವರ್ಷದ ಒಳಗಿನ ಮಕ್ಕಳಿಗೆ ಆನ್‌ಲೈನ್‌ ಮೂಲಕ ಶಿಕ್ಷಣ ನೀಡುವುದು ಯೋಗ್ಯವಲ್ಲವೆಂದು ನಿಮ್ಹಾನ್ಸ್‌ ಸಲಹೆ ನೀಡಿದೆ’ ಎಂದು ಶಿಕ್ಷಣ ಸಚಿವರು ಹೇಳಿದರು.

‘ಆನ್‌ಲೈನ್‌ ಶಿಕ್ಷಣ ಇತ್ತೀಚೆಗೆ ಹೆಚ್ಚು ಪ್ರವರ್ಧಮಾನಕ್ಕೆ ಬಂದಿದೆ. ಈ ಬಗ್ಗೆ ಸರ್ಕಾರವು ನಿಮ್ಹಾನ್ಸ್‌ ವೈದ್ಯರ ಸಲಹೆ ಕೇಳಿತ್ತು. ಇದಕ್ಕೆ ನಿಮ್ಹಾನ್ಸ್‌ ತಜ್ಞರ ತಂಡ ಸುದೀರ್ಘ ಉತ್ತರ ನೀಡಿದೆ. ಆರು ವರ್ಷದ ಒಳಗಿನ ಮಕ್ಕಳಿಗೆ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಬಾರದು ಎಂಬ ಸ್ಪಷ್ಟ ಸಂದೇಶ ನೀಡಿದೆ’ ಎಂದರು.

‘ಶೈಕ್ಷಣಿಕ ವರ್ಷದ ಪುನರಾರಂಭಕ್ಕೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಮಾರ್ಗಸೂಚಿಗೆ ಕಾಯುತ್ತಿದ್ದೇವೆ. 100 ದಿನ ಶಾಲೆ, ಮತ್ತೆ 100 ದಿನ ‘ಸ್ಟಡಿ ಅಟ್‌ ಹೋಂ’ ಸಲಹೆ ಸರ್ಕಾರದ ಮುಂದಿದೆ. ದಿನ ಬಿಟ್ಟು ದಿನ ಅಥವಾ ಪಾಳಿವಾರು ತರಗತಿ ನಡೆಸಬೇಕೆ ಎಂಬುದು ಚರ್ಚೆಯ ಹಂತದಲ್ಲಿದೆ. ಪಠ್ಯದ ಹೊರೆ ಕಡಿಮೆ ಮಾಡುವ ಸಂಬಂಧ ಚಿಂತನೆ ನಡೆಯುತ್ತಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT