ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಭ್ರಷ್ಟರನ್ನು ಸೇವೆಯಿಂದ ಅಮಾನತು ಮಾಡಿ- ರೈತರ ಪ್ರತಿಭಟನೆ

ನೂರಾರು ರೈತರಿಂದ ಜಿಲ್ಲಾ ಪಂಚಾಯಿತಿ ಕಚೇರಿ ಮುತ್ತಿಗೆಗೆ ಯತ್ನ
Last Updated 24 ಸೆಪ್ಟೆಂಬರ್ 2021, 4:59 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುವ ಕೆಲ ಮೇಲಧಿಕಾರಿಗಳು ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಇಂಥವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಗುರುವಾರ ರೈತರು ಪ್ರತಿಭಟನೆ ನಡೆಸಿದರು.

ಮುಖ್ಯ ರಸ್ತೆ ಮಾರ್ಗದಲ್ಲಿ ಮೆರವಣಿಗೆ ನಡೆಸಿದರು. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಜಿಲ್ಲಾ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಎರಡು ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿವೆ. ಇಲ್ಲಿನ ರೈತರ ಬಳಿಯೇ ಲಂಚಕ್ಕೆ ಕೈ ಚಾಚುವ ದುರ್ಮಾರ್ಗಿಗಳನ್ನು ಅಮಾನತು ಮಾಡುವಂತೆ ಹಲವು ಬಾರಿ ಪ್ರತಿಭಟಿಸಿ ಮನವಿ ಸಲ್ಲಿಸಿದರು ಪ್ರಯೋಜನ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳು ಹಣಕ್ಕಾಗಿ ಪಿಡಿಒಗಳ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ಹೊಂಡ, ಬದು ನಿರ್ಮಾಣ ಇತರ ಕಾಮಗಾರಿಗಳ ನಾಮಫಲಕದಲ್ಲಿ ಲಕ್ಷಾಂತರ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಕ್ರಿಯಾ ಯೋಜನೆಯಲ್ಲಿ ಹಣ ಇಲ್ಲದಿದ್ದರೂ, ಹಣ ಪಡೆದು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದ್ದಾರೆ ಎಂದು ದೂರಿದರು.

ಪಿಡಿಒಗಳಿಂದಲೇ ನೇರವಾಗಿ ಭ್ರಷ್ಟಾಚಾರ ಮಾಡಿಸುತ್ತಿದ್ದು, ಎಲ್ಲ ಯೋಜನೆಗಳಿಂದಲೂ ನಿರಂತರವಾಗಿ ಲೂಟಿ ಮಾಡುತ್ತಿದ್ದಾರೆ. ಕೂಡಲೇ ಮಧ್ಯ ಪ್ರವೇಶಿಸಿ ಭ್ರಷ್ಟರನ್ನು ಅಮಾನತು ಮಾಡಬೇಕು ಎಂದು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡರಾದ ನುಲೇನೂರು ಶಂಕರಪ್ಪ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಬಸ್ತಿಹಳ್ಳಿ ಸುರೇಶ್ ಬಾಬು, ಹೊರಕೇರಪ್ಪ, ವಿವಿಧ ಸಂಘಟನೆಗಳ ಮುಖಂಡರಾದ ದೊಡ್ಡ ಉಳ್ಳಾರ್ತಿ ಕರಿಯಣ್ಣ, ರಾಂಪುರ ಬಸವರಾಜು, ಸಿ.ವೈ.ಶಿವರುದ್ರಪ್ಪ, ಸುರೇಶ್ ಬಾಬು, ಬೊಮ್ಮಕ್ಕನಹಳ್ಳಿ ಮಲ್ಲಿಕಾರ್ಜುನ್, ದುರುಗೇಶ್, ಮರ‍್ಲಹಳ್ಳಿ ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT