ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಮೇಲಿದೆ ಅಪಾರ ನಿರೀಕ್ಷೆ: ಸಚಿವ ನಾರಾಯಣಸ್ವಾಮಿ

ಶಿಕ್ಷಕರ ದಿನಾಚರಣೆ ಸಮಾರಂಭ
Last Updated 6 ಸೆಪ್ಟೆಂಬರ್ 2022, 4:07 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಮಾಜದಲ್ಲಿ ಗುರುವಿನ ಬಗ್ಗೆ ಹೆಚ್ಚಿನ ಗೌರವವಿದೆ. ಗುರಿವಿನ ಬೋಧನೆ, ಮೌಲ್ಯಗಳು, ಸಂಸ್ಕಾರ ಹಾಗೂ ಜೀವನ ಪದ್ಧತಿ ಅನೇಕ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರಲಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಸೋಮವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿರು. ‘ವಿದ್ಯಾರ್ಥಿಗಳು ಮತ್ತು ಸಮಾಜ ಶಿಕ್ಷಕರಿಗೆ ಗುರುವಿನ ಸ್ಥಾನ ನೀಡಿ, ಬಹಳಷ್ಟು ಗೌರವ ಹಾಗೂ ನಿರೀಕ್ಷೆ ಇಟ್ಟುಕೊಂಡಿದೆ. ಇದು ಹುಸಿಯಾಗದಂತೆ ನಡೆದುಕೊಳ್ಳುವ ಹೊಣೆ ನಿಮ್ಮ ಮೇಲಿದೆ’ ಎಂದರು.

‘ಶಿಕ್ಷಣ ಕೇವಲ ವ್ಯಕ್ತಿಯನ್ನು ಪರಿವರ್ತನೆ ಮಾಡುವುದು ಮಾತ್ರವಲ್ಲದೇ, ರಾಷ್ಟ್ರ ನಿರ್ಮಾಣದಲ್ಲಿಯೂ ಮಹತ್ತರ ಪಾತ್ರವಹಿಸಿದೆ. ಒಬ್ಬ ಶಿಕ್ಷಕ ದೇಶದ ರಾಷ್ಟ್ರಪತಿ ಆಗಬಹುದು ಎಂಬುದನ್ನು ಡಾ.ಸರ್ವಪಲ್ಲಿ ರಾಧಕೃಷ್ಣನ್‌ ತೋರಿಸಿ ಕೊಟ್ಟಿದ್ದಾರೆ’ ಎಂದು ಹೇಳಿದರು.

‘ದೇಶದಲ್ಲಿ ಶಿಕ್ಷಕರ ಕಾರ್ಯ ಸಾಕಷ್ಟು ಮಹತ್ವ ಪಡೆದಿದೆ. ಶಿಕ್ಷಕರು ಸಾಮಾಜಿಕ ಚಿಂತನೆ, ಏಕಾಗ್ರತೆಯಿಂದ ಶಿಕ್ಷಣ ನೀಡುತ್ತಿದ್ದಾರೆ. ನಮ್ಮ ಜಿಲ್ಲೆಯಿಂದ ರಾಷ್ಟ್ರೀಯ ಪ್ರಶಸ್ತಿಗೆ ಒಬ್ಬರು ಮತ್ತು ರಾಜ್ಯಮಟ್ಟಕ್ಕೆ ಇಬ್ಬರು ಶಿಕ್ಷಕರು ಆಯ್ಕೆಯಾಗಿರುವುದು ಬಹಳ ಹೆಮ್ಮೆಯ ವಿಷಯವಾಗಿದೆ’ ಎಂದು ತಿಳಿಸಿದರು.

‘20ನೇ ಶತಮಾನದ ಬಳಿಕ ಶಿಕ್ಷಣ ಕೇವಲ ಕಲಿಕೆಗೆ ಮಾತ್ರ ಸೀಮಿತವಾಗಲಿಲ್ಲ. ಶಿಕ್ಷಣದಿಂದ ಅನೇಕ ಬದಲಾವಣೆಗಳು ಆಗಿವೆ. ಶಿಕ್ಷಕರ ಸಮಸ್ಯೆಗಳು ಸಾಕಷ್ಟಿವೆ. ಆದರೆ ಸರ್ಕಾರದ ಸವಲತ್ತುಗಳನ್ನು ನಿರೀಕ್ಷಿಸದೆ ಇಂದು ತಮ್ಮ ಶಾಲೆಗಳನ್ನು ಅಭಿವೃದ್ಧಿಗೊಳಿಸುತ್ತಿದ್ದಾರೆ’ ಎಂದರು.

ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಮಾತನಾಡಿ, ‘ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಹಳ್ಳಿಗಾಡಿನ ಶಾಲೆಗಳಲ್ಲಿ ಮೂಲ ಸೌಕರ್ಯಗಳಿಲ್ಲದಿದ್ದರೂ ಶಿಕ್ಷಕರು ಮಕ್ಕಳಿಗೆ ಕಲಿಸುವ ಆಸಕ್ತಿಯನ್ನು ಕುಗ್ಗಿಸಿಕೊಂಡಿಲ್ಲ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವುದರ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತಿರುವುದು ಸಂತಸದ ವಿಷಯವಾಗಿದೆ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ, ಮತ್ತು ವಿಶೇಷ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. 2021-22ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ನಿವೃತ್ತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಸಮಾರಂಭಕ್ಕೂ ಮುನ್ನ ನಗರದ ಶ್ರೀ ನೀಲಕಂಠೇಶ್ವರ ದೇವಸ್ಥಾನದಿಂದ ಕಲಾ ತಂಡಗಳೊಂದಿಗೆ ತರಾಸು ರಂಗಮಂದಿರದವರೆಗೂ ಮೆರವಣಿಗೆ ನಡೆಸಲಾಯಿತು. ವಿಧಾನ ಪರಿಷತ್‌ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಕೆ.ಎಸ್‌.ನವೀನ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್‌, ನಗರಸಭೆಅಧ್ಯಕ್ಷೆ ಬಿ.ತಿಪ್ಪಮ್ಮ, ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಡಯಟ್‌ ಪ್ರಾಂಶುಪಾಲ ಎಚ್‌.ಮಂಜುನಾಥ್‌, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಂಜುನಾಥ್‌, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‌ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT