ಶಿಕ್ಷಕರಿಂದಲೇ ದೇಶದ ಏಳ್ಗೆ ಸಾಧ್ಯ

ಚಿತ್ರದುರ್ಗ: ‘ದೇಶದ ಪ್ರಜೆ ಸುಸಂಸ್ಕೃತನಾಗಲು, ರಾಷ್ಟ್ರ ಸರ್ವಾಂಗೀಣವಾಗಿ ಅಭಿವೃದ್ಧಿ ಹೊಂದಲು ಶಿಕ್ಷಕರಿಂದ ಮಾತ್ರ ಸಾಧ್ಯ’ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ‘ಶಿಕ್ಷಕರ ದಿನಾಚರಣೆ’ ಅಂಗವಾಗಿ ಶನಿವಾರ ಆಯೋಜಿಸಿದ್ದ ಡಾ.ಸರ್ಪಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
‘ಶಿಕ್ಷಕರಿಲ್ಲದೇ ಯಾವುದೇ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಗುರುವಿನ ಮಾರ್ಗದರ್ಶನ ಎಲ್ಲಾ ಸತ್ಕಾರ್ಯಗಳಿಗೂ ಅಗತ್ಯವಿದೆ. ಆದ್ದರಿಂದ ಪ್ರತಿ ವಿದ್ಯಾರ್ಥಿಯ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ’ ಎಂದು ಸಲಹೆ ನೀಡಿದರು.
‘ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಬಾರದು ಎಂಬ ಸದುದ್ದೇಶದಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆಯೂ ಸರ್ಕಾರ ಅನೇಕ ಕಾರ್ಯಕ್ರಮ, ಯೋಜನೆ ಜಾರಿಗೊಳಿಸುವ ಮೂಲಕ ವಿನೂತನವಾಗಿ ಶಿಕ್ಷಣ ನೀಡಲು ಮುಂದಾಗಿರುವುದು ಉತ್ತಮ ಬೆಳವಣಿಗೆ’ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ‘ವಿಶ್ವದಲ್ಲೇ ಗುರುವಿಗೆ ಮಹತ್ತರವಾದ ಸ್ಥಾನ ನೀಡಲಾಗಿದೆ. ಕೊರೊನಾ ಸಂದರ್ಭದಲ್ಲೂ ಶಿಕ್ಷಕರು ಮನೆಮನೆ ಸಮೀಕ್ಷೆ, ಜನಗಣತಿ, ಮತಪಟ್ಟಿ ಪರಿಷ್ಕರಣೆ ಸೇರಿ ಅನೇಕ ಕೆಲಸಗಳಲ್ಲಿ ತೊಡಗಿ, ಕೊರೊನಾ ವಾರಿಯರ್‌ಗಳಾಗಿ ಸೇವೆ ಸಲ್ಲಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
‘ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು ರಾಜ್ಯದಲ್ಲಿ ಐದನೇ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದೆ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನ ಅಲಂಕರಿಸುವ ನಿಟ್ಟಿನಲ್ಲಿ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಿ’ ಎಂದು ಸಲಹೆ ನೀಡಿದರು.
ಇದೇ ವೇಳೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ತ್ರಿವೇಣಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಸಿ.ಶಾಂತಮ್ಮ, ಸಿಟಿಇ ಸಹನಿರ್ದೇಶಕ ಎಚ್. ಮಂಜುನಾಥ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಮಂಜುನಾಥ್, ಡಯಟ್ ಪ್ರಾಂಶುಪಾಲ ಎಸ್‍ಕೆಬಿ ಪ್ರಸಾದ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.