ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗೆ ತಡೆಗೋಡೆ ನಿರ್ಮಿಸಲು ಆಗ್ರಹ

Last Updated 10 ಅಕ್ಟೋಬರ್ 2020, 14:22 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಮುರುಘಾಮಠ ಮುಂಭಾಗದ ಕೆರೆ ಮಳೆಯಿಂದ ಭರ್ತಿಯಾಗಿದೆ. ಮಠದ ಕುರುಬರಹಟ್ಟಿ ಗ್ರಾಮದೊಳಗೆ ನೀರು ನುಗ್ಗುವ ಆತಂಕ ಎದುರಾಗಿದ್ದು, ಕೆರೆಗೆ ಅಡ್ಡಲಾಗಿ ತಡೆಗೋಡೆ ನಿರ್ಮಿಸಬೇಕು ಎಂದು ಒತ್ತಾಯಿಸಿ ಶನಿವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಮಠದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ‘ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಎಂ.ಕೆ.ಹಟ್ಟಿ ಕೆಳಗೆ ಅವೈಜ್ಞಾನಿಕವಾಗಿ ಕೆಳಸೇತುವೆ ನಿರ್ಮಿಸಿದ್ದಾರೆ. ಸಮಸ್ಯೆ ಬಗೆಹರಿಸಬೇಕು’ ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಆರ್.ನರಸಿಂಹರಾಜು, ‘2009-10 ರಲ್ಲೂ ಭಾರಿ ಮಳೆಯಾದ ಸಂದರ್ಭದಲ್ಲಿ ಮುರುಘಾಮಠ ಮುಂಭಾಗದ ಈ ಕೆರೆಯೂ ತುಂಬಿ, ಎಂ.ಕೆ.ಹಟ್ಟಿ ಗ್ರಾಮದೊಳಗೆ ನೀರು ನುಗ್ಗಿತ್ತು. ಆ ವೇಳೆ 40ರಿಂದ 50 ಮನೆಗಳು ಜಲಾವೃತಗೊಂಡಿದ್ದವು. ಅದು ಪುನರಾವರ್ತನೆ ಆಗದಂತೆ ತಡೆಯಲು ಮುಂದಾಗಬೇಕು’ ಎಂದು ಆಗ್ರಹಿಸಿದರು.

‘ಅಂದು ಕೂಡ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಎಂ.ಕೆ.ಹಟ್ಟಿಗೆ ಬಂದು ಹಟ್ಟಿಯೊಳಗೆ ನೀರು ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ, ಈವರೆಗೂ ಜಿಲ್ಲಾಡಳಿತವಾಗಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವಾಗಲಿ ಇತ್ತ ಗಮನಹರಿಸಿಲ್ಲ. ಈಗ ಮತ್ತೊಮ್ಮೆ ಕೆರೆ ತುಂಬಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಶೀಘ್ರ ಕೆರೆಗೆ ತಡೆಗೋಡೆ ನಿರ್ಮಿಸಿ, ರಾಜಕಾಲುವೆ ಮೂಲಕ ಕೆರೆ ನೀರು ಹರಿದು ಹೋಗುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಹೆದ್ದಾರಿ ತಡೆ ನಡೆಸಿ, ಪ್ರತಿಭಟನೆ ನಡೆಸಲಾಗುವುದು’ ಎಂದು ಅವರು ಎಚ್ಚರಿಸಿದರು.

ಮುಖಂಡರಾದ ಬಿ.ಟಿ. ಜಗದೀಶ್, ಮಂಜುನಾಥ್, ಅಜ್ಜಣ್ಣ, ದಾದಾಪೀರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT