ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ: ಅವ್ಯವಸ್ಥೆ ಅನಾವರಣ

Last Updated 7 ಡಿಸೆಂಬರ್ 2022, 4:32 IST
ಅಕ್ಷರ ಗಾತ್ರ

ಮೊಳಕಾಲ್ಮುರು: ತಾಲ್ಲೂಕಿನ ಬಿ.ಜಿ. ಕೆರೆಯ ಬಿಸಿಎಂ ವಿದ್ಯಾರ್ಥಿ ನಿಲಯಕ್ಕೆ ಮಂಗಳವಾರ ಮಧ್ಯಾಹ್ನ ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ ದಿಢೀರ್ ಭೇಟಿ ನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು.

‘ಭೇಟಿ ಸಮಯದಲ್ಲಿ ವಾರ್ಡನ್‌ ಹಾಜರಿರಲಿಲ್ಲ. ಹಾಜರಾತಿ ಪುಸ್ತಕವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿರುವುದು, ಸ್ವಚ್ಛತೆ ಇಲ್ಲದಿರುವುದು, ತಾಲ್ಲೂಕು ಮತ್ತು ಜಿಲ್ಲಾ ಬಿಸಿಎಂ ಅಧಿಕಾರಿಗಳು ಕಾಲಕಾಲಕ್ಕೆ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿರುವುದು ಕಂಡುಬಂದಿದೆ. ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು’ ಎಂದು ಹೇಳಿದರು.

‘ಮೆನು ಪ್ರಕಾರ ಊಟ ನೀಡದಿರುವ ಬಗ್ಗೆ ದೂರು ಕೇಳಿ ಬಂದಿದೆ. ಆಹಾರ ಸಾಮಗ್ರಿಗಳನ್ನು ಹೊಣೆ ಹೊತ್ತಿರುವ ಏಜೆನ್ಸಿ ನಿಯಮದಂತೆ ಆಹಾರ ಪೂರೈಕೆ ಮಾಡಿಲ್ಲ. ಇಂತಹ ಸಮಸ್ಯೆ ಇದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಇದರಿಂದ ಏಜೆನ್ಸಿ ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ತಾಲ್ಲೂಕುಗಳ ಭೇಟಿ ಸಮಯದಲ್ಲಿ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಲಾಗುವುದು. ವಿದ್ಯಾರ್ಥಿ ನಿಲಯಗಳ ನಿರ್ವಹಣೆಗೆ ಸರ್ಕಾರ ಕೋಟ್ಯಂತರ ರೂಪಾಯಿ ವ್ಯಯ ಮಾಡುತ್ತಿದ್ದು ಸದುಪಯೋಗವಾಗಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಇದೇ ವೇಳೆ ಅವರು ಸಮೀಪದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು. ಎಸ್ಸೆಸ್ಸೆಲ್ಸಿ ವೇಳಾಪಟ್ಟಿ ಪ್ರಕಟವಾಗಿದ್ದು ಹೆಚ್ಚು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು. ಅಗತ್ಯ ಸಿದ್ಧತೆ, ಏಕಾಗ್ರತೆ ಅಳವಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಪ್ರಭಾರ ತಹಶೀಲ್ದಾರ್ ಎನ್. ರಘುಮೂರ್ತಿ, ಬಿಇಒ ಸಿ.ಎಸ್. ವೆಂಕಟೇಶಪ್ಪ, ಉಪ ಪ್ರಾಂಶುಪಾಲ ಎಂ. ಮಲ್ಲಿಕಾರ್ಜುನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT