ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ರಾಮಾಯಣ ಪವಿತ್ರ ಕಾವ್ಯ: ಸಚಿವ ಎ. ನಾರಾಯಣಸ್ವಾಮಿ

ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಸಚಿವ ಎ. ನಾರಾಯಣಸ್ವಾಮಿ ಅಭಿಮತ
Last Updated 21 ಅಕ್ಟೋಬರ್ 2021, 7:27 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ವಾಲ್ಮೀಕಿ ರಾಮಾಯಣ ಕಥೆಯ ರೂಪದಲ್ಲಿ ಇಲ್ಲ. ರಾಮಾಯಣ ಮಹಾಕಾವ್ಯಕ್ಕೆ ತನ್ನದೇ ಆದ ಶ್ರೇಷ್ಠತೆ ಮತ್ತು ಪಾವಿತ್ರ್ಯ ಇದೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

‘ಮಾನವೀಯ ಮೌಲ್ಯ, ವ್ಯಕ್ತಿತ್ವ, ಜನರ ಬದುಕು, ಸಮಾಜ ಹಾಗೂ ಸಂಸ್ಕೃತಿಯ ಚಿತ್ರಣವಿದೆ. ಅರ್ಥ ಮಾಡಿಕೊಳ್ಳಬೇಕಾದ ಸಾಕಷ್ಟು ವಿಚಾರಗಳು ಅಡಗಿವೆ. ರಾಮಾಯಣದ ಮೌಲ್ಯಗಳು ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಇಡೀ ವಿಶ್ವಕ್ಕೆ ದರ್ಶನ ನೀಡುವಂತಹ ಮೌಲ್ಯಗಳನ್ನು ಒಳಗೊಂಡಿದೆ. ರಾಮಾಯಣ ಮಹಾಕಾವ್ಯ ವಿಶ್ವಕ್ಕೆ ಮಾದರಿಯಾಗಿದೆ’ ಎಂದು ಹೇಳಿದರು.

‘ಪ್ರತಿಯೊಬ್ಬರ ಬದುಕು, ವ್ಯಕ್ತಿತ್ವದ ಮೇಲೆ ರಾಮಾಯಣದ ಪ್ರಭಾವವಿದೆ. ಈ ಮಹಾಕಾವ್ಯದ ಮೌಲ್ಯಗಳು ಪ್ರತಿಯೊಬ್ಬರಿಗೂ ತಲುಪಬೇಕು. ವಾಲ್ಮೀಕಿ ಜಯಂತಿಯನ್ನು ಆಚರಿಸುವ ಮೂಲಕ ರಾಮಾಯಣ ದರ್ಶನ ಮಾಡಲಾಗುತ್ತಿದೆ. ಅದರಲ್ಲಿ ಅಡಗಿರುವ ಸಂಸ್ಕಾರ, ಜೀವನ ಶೈಲಿ, ಪ್ರಾಮಾಣಿಕತೆ, ಆದರ್ಶದ ಬದುಕನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಿದೆ’ ಎಂದು ಹೇಳಿದರು.

ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮಾತನಾಡಿ, ‘ಇಡೀ ದೇಶದಾದ್ಯಂತ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿ ಸೇರಿದಂತೆ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅಳವಡಿಸಿಕೊಂಡು ನಮ್ಮ ಸಂವಿಧಾನ ರಚನೆ ಮಾಡಲಾಗಿದೆ’ ಎಂದು ಹೇಳಿದರು.

‘ಎಲ್.ಜಿ. ಹಾವನೂರು ಅವರು ಕೊಟ್ಟ ವರದಿಯನ್ನು ಅಂದಿನ ಮುಖ್ಯಮಂತ್ರಿ ಯಥಾವತ್ತಾಗಿ ಅನುಷ್ಠಾನ ಮಾಡಿದರು. ಈ ವರದಿಯು ವಾಲ್ಮೀಕಿ ಜನಾಂಗಕ್ಕೆ ಮಾತ್ರವಲ್ಲದೇ ಪ್ರತಿಯೊಂದು ಜನಾಂಗಕ್ಕೂ ಭಗವದ್ಗೀತೆಯಾಗಿ ಪರಿಣಮಿಸಿತು. ಎಲ್ಲ ವರ್ಗದ ಜನರಿಗೂ ಅನುಕೂಲ ಕಲ್ಪಿಸಿಕೊಡಲಾಗಿದೆ. ಎಲ್.ಜಿ. ಹಾವನೂರು ಅಂತಹವರು ಈ ಸಮಾಜದಲ್ಲಿ ಹುಟ್ಟಿರುವುದು, ನಾಯಕ ಸಮಾಜಕ್ಕೆ ಕೀರ್ತಿ’ ಎಂದು ಅಭಿಪ್ರಾಯಪಟ್ಟರು.

ವಾಲ್ಮೀಕಿ ನಾಯಕ ನೌಕರರ ಸಂಘದ ಡಾ.ಎಚ್. ಗುಡ್ಡದೇಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತ್ತರ ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಡಾ.ಬಿ.ಜಯಮ್ಮ ಅವರು ಮಹರ್ಷಿ ವಾಲ್ಮೀಕಿ ಕುರಿತು ವಿಶೇಷ ಉಪನ್ಯಾಸ ನೀಡಿದರು.

ನಗರಸಭೆ ಅಧ್ಯಕ್ಷೆ ಬಿ. ತಿಪ್ಪಮ್ಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಬದರಿನಾಥ್, ವಾಲ್ಮೀಕಿ ನಾಯಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಜೆ. ಕೃಷ್ಣಮೂರ್ತಿ, ಚಿತ್ರದುರ್ಗ ತಾಲ್ಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಬಿ. ಕಾಂತರಾಜು, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ. ನಂದಿನಿದೇವಿ, ಉಪವಿಭಾಗಾಧಿಕಾರಿ ಚಂದ್ರಯ್ಯ, ತಹಶೀಲ್ದಾರ್ ಸತ್ಯನಾರಾಯಣ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎನ್. ಮಂಜುನಾಥ್
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT