ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ನೀರಾವರಿ ಸೌಲಭ್ಯಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಆಶ್ವಾಸನೆ

ಸರ್ಕಾರಕ್ಕೆ ವರ್ಷ, ಫಲಾನುಭವಿಗಳೊಂದಿಗೆ ಸಂವಾದ
Last Updated 27 ಜುಲೈ 2020, 16:17 IST
ಅಕ್ಷರ ಗಾತ್ರ

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿಗೆ ಸಂಪೂರ್ಣ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ ಜಿಲ್ಲೆಯ ನೀರಾವರಿ ಯೋಜನೆಗೆ ಒತ್ತು ನೀಡಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆಶ್ವಾಸನೆ ನೀಡಿದರು.

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಯಡಿಯೂರಪ್ಪ ಅವರು ಫಲಾನುಭವಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು. ಹಿರಿಯೂರು ತಾಲ್ಲೂಕಿನ ಕಾಟನಾಯಕನಹಳ್ಳಿಯ ರೈತ ಮಹಿಳೆ ವಸಂತಕುಮಾರಿ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂವಾದಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.

‘ಮಳೆ ಹೇಗೆ ಬಂದಿದೆ? ಬಿತ್ತನೆ ಮಾಡಿದ್ದೀರಾ’ ಎಂದು ರೈತ ಮಹಿಳೆಯನ್ನು ಮುಖ್ಯಮಂತ್ರಿ ವಿಚಾರಿಸಿದರು. ‘ನೀರಾವರಿ ಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಸರ್ಕಾರ ಆದ್ಯತೆ ನೀಡಲಿದೆ’ ಎಂದು ಭರವಸೆ ನೀಡಿದರು.

ಲಾಕ್‌ಡೌನ್ ಸಂದರ್ಭದಲ್ಲಿ ಈರುಳ್ಳಿ ಬೆಳೆ ಮಾರಾಟ ಮಾಡಲು ಸಾಧ್ಯವಾಗದ ರೈತ ಮಹಿಳೆ ವಸಂತಕುಮಾರಿ, ಸಾಮಾಜಿಕ ಜಾಲತಾಣದಲ್ಲಿ ಸಂಕಷ್ಟ ತೋಡಿಕೊಂಡಿದ್ದರು. ಯಡಿಯೂರಪ್ಪ ಅವರೇ ಖುದ್ದು ದೂರವಾಣಿ ಕರೆ ಮಾಡಿ ಈರುಳ್ಳಿಗೆ ಮಾರುಕಟ್ಟೆ ಒದಗಿಸುವ ಆಶ್ವಾಸನೆ ನೀಡಿದ್ದರು. ತೋಟಗಾರಿಕೆ ಇಲಾಖೆ ಈರುಳ್ಳಿಗೆ ಮಾರುಕಟ್ಟೆ ಕಲ್ಪಿಸಿತ್ತು. ಸಂವಾದಲ್ಲಿ ಇದನ್ನು ವಸಂತಕುಮಾರಿ ಸ್ಮರಿಸಿದರು. ಸಕಾಲಕ್ಕೆ ಸ್ಪಂದಿಸಿದ್ದಕ್ಕೆ ಮುಖ್ಯಮಂತ್ರಿಗೆ ಧನ್ಯವಾದ ಸಲ್ಲಿಸಿದರು.

‘ಈರುಳ್ಳಿ ಕೈಸೇರಿದಾಗ ತುಂಬಾ ಸಂತೋಷವಾಗಿತ್ತು. ಆದರೆ, ಲಾಕ್‌ಡೌನ್ ಸಂದರ್ಭದಲ್ಲಿ ಮಾರುಕಟ್ಟೆಗೆ ಈರುಳ್ಳಿ ಸಾಗಿಸಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದೆವು. ಸರ್ಕಾರ ಸ್ಪಂದಿಸಿದ ರೀತಿಗೆ ಅಭಾರಿಯಾಗಿದ್ದೇನೆ. ನೀವು (ಯಡಿಯೂರಪ್ಪ) ರೈತ ನಾಯಕ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದೀರಿ’ ಎಂದು ವಸಂತಕುಮಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

‘ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬರುತ್ತಿಲ್ಲ. ಹೀಗಾಗಿ, ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಹಿರಿಯೂರು ತಾಲ್ಲೂಕಿಗೆ ನೀರಾವರಿ ಸೌಲಭ್ಯ ಕಲ್ಪಿಸಿದರೆ ರೈತರಿಗೆ ಅನುಕೂಲವಾಗಲಿದೆ’ ಎಂದು ಕೋರಿಕೆ ಸಲ್ಲಿಸಿದರು.

‘ಸವಾಲುಗಳ ಒಂದು ವರ್ಷ- ಪರಿಹಾರದ ಸ್ಪರ್ಶ’ ಕಿರುಹೊತ್ತಿಗೆ ಹಾಗೂ ಜನಪದ ಮತ್ತು ಮಾರ್ಚ್‍ ಆಪ್ ಕರ್ನಾಟಕ ವಿಶೇಷ ಸಂಚಿಕೆಯನ್ನು ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಕೆ.ಪೂರ್ಣಿಮಾ ಬಿಡುಗಡೆಗೊಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಗೈರು ಹಾಜರಾಜರಾಗಿದ್ದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಜಿ. ನಂದಗಾವಿ, ಉಪವಿಭಾಗಾಧಿಕಾರಿ ವಿ.ಪ್ರಸನ್ನ, ಜಿಲ್ಲಾ ವಾರ್ತಾಧಿಕಾರಿ ಧನಂಜಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT