ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ–ಮತದಾರರ ಚೀಟಿ ಶೀಘ್ರ

ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಹೇಳಿಕೆ
Last Updated 25 ಜನವರಿ 2021, 14:33 IST
ಅಕ್ಷರ ಗಾತ್ರ

ಚಿತ್ರದುರ್ಗ: ಫೆಬ್ರುವರಿ ತಿಂಗಳಿಂದ ಇ–ಮತದಾರರ ಚೀಟಿ ವಿತರಣೆ ಮಾಡಲಾಗುತ್ತಿದೆ. ಇನ್ನು ಮುಂದೆ ಮತದಾರರು ಮೊಬೈಲ್‌ನಲ್ಲಿಯೂ ಮತದಾರರ ಚೀಟಿ ಇಟ್ಟುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಹೇಳಿದರು.

ಇಲ್ಲಿನ ತರಾಸು ರಂಗಮಂದಿರದಲ್ಲಿ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ 13,71,454 ಮತದಾರರಿದ್ದಾರೆ. ಇದರಲ್ಲಿ 6,88,585 ಪುರುಷ ಹಾಗೂ 6,82,886 ಮಹಿಳಾ ಮತದಾರರು ಇದ್ದಾರೆ. 83 ಇತರೆ ಹಾಗೂ 10,942 ಯುವ ಮತದಾರರಿದ್ದಾರೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಎಂ.ಮನಗೂಳಿ ಪ್ರೇಮಾವತಿ, ‘18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು. ಜನಪ್ರತಿನಿಧಿ ಆಯ್ಕೆ ಮಾಡುವಾಗ ಜಾತಿ, ಧರ್ಮ ಪರಿಗಣಿಸಬಾರದು. ಆಮಿಷಗಳಿಗೆ ಬಲಿಯಾಗದೇ ಮತದಾನದ ಹಕ್ಕು ಚಲಾವಣೆ ಮಾಡಬೇಕು. ಯೋಗ್ಯ ಅಭ್ಯರ್ಥಿ ಆಯ್ಕೆ ಮಾಡಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ‘ಜಿಲ್ಲೆಯಲ್ಲಿ ಮತದಾರರ ಜಾಗೃತಿ ಮೂಡಿಸಲಾಗಿದೆ. ಹೋಬಳಿ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಸಪ್ರಶ್ನೆ, ಭಿತ್ತಿಚಿತ್ರ, ಕೊಲಾಜ್‌ ಮೇಕಿಂಗ್ ಸ್ಪರ್ಧೆಗಳು ನಡೆದಿವೆ’ ಎಂದರು.

ಮತದಾರರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್‍ಒಗಳನ್ನು ಸನ್ಮಾನಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ, ಉಪವಿಭಾಗಾಧಿಕಾರಿ ಡಾ.ನಾಗರಾಜ್, ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯ, ನಗರಸಭೆ ಪೌರಾಯುಕ್ತ ಜೆ.ಟಿ.ಹನುಂತರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT