ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷರತ್ತು ಇಲ್ಲದೆ ಸಂಪೂರ್ಣ ಸಾಲ ಮನ್ನಾ ಮಾಡಿ: ಶಾಸಕ ಸಿ.ಟಿ. ರವಿ ಒತ್ತಾಯ

Last Updated 30 ಮೇ 2018, 15:39 IST
ಅಕ್ಷರ ಗಾತ್ರ

ಹಾಸನ: ‘ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯಾವುದೇ ಷರತ್ತುಗಳು ಇಲ್ಲದೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು’ ಎಂದು ಶಾಸಕ ಸಿ.ಟಿ.ರವಿ ಆಗ್ರಹಿಸಿದರು.

‘ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಪ್ರಣಾಳಿಕೆಯಲ್ಲಿ ಖಾಸಗಿ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿತ್ತು. ಆದರೆ, ಈಗ ಸಾಲ ಮನ್ನಾ ಸಂಬಂಧ ಮುಖ್ಯಮಂತ್ರಿ ನೀಡಿರುವ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲ. ಅಡ್ಡಗೋಡೆ ಮೇಲೆ ದೀಪ ಇಟ್ಟಂತಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ಸಣ್ಣ ಮತ್ತು ಮಧ್ಯಮ ಹಂತದ ಬೆಳೆಗಾರರ ಸಾಲವನ್ನು ಎರಡು ಹಂತದಲ್ಲಿ ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರ ₹ 50 ಸಾವಿರದವರೆಗೆ ಸಾಲ ಮನ್ನಾ ಮಾಡಿದ್ದಾರೆ. ಇದರಿಂದ ಸಣ್ಣ ಮತ್ತು ಮಧ್ಯಮ ಬೆಳೆಗಾರರ ಬಹುಪಾಲು ಸಾಲ ಮನ್ನಾ ಆಗಿದೆ. ಕುಮಾರಸ್ವಾಮಿ ಈಗ ಇದಕ್ಕೆ ಒಗ್ಗರಣೆ ಹಾಕುವ ಕೆಲಸ ಮಾಡುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.

‘ರಾಜ್ಯದಲ್ಲಿ ರೈತರ ಆತ್ಮಹತ್ಯೆ ತಡೆಗಟ್ಟಲು ಬಿತ್ತನೆಗೂ ಮುಂಚೆ ಬೆಲೆ ನಿಗದಿ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತಾರ್ಹ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕೆಂದು ಈಗಾಗಲೇ ಆನ್‌ಲೈನ್‌ ಮಾರುಕಟ್ಟೆ ಪದ್ಧತಿ ಜಾರಿಗೆ ತರಲಾಗಿದೆ. ಆನ್‌ಲೈನ್‌ನಲ್ಲಿ ಖರೀದಿ ನಡೆಯುತ್ತಿದೆ. ಆದರೆ, ಹಣ ಪಾವತಿ ಆಗುತ್ತಿಲ್ಲ. ಎಪಿಎಂಸಿ ಕಾಯ್ದೆಯಡಿ ರೈತರಿಂದ ಯಾವುದೇ ಕಮಿಷನ್ ಪಡೆಯದಂತೆ ನಿಯಮ ಇದ್ದರೂ ಶೇಕಡಾ 10ರಷ್ಟು ಕಮಿಷನ್ ಪಡೆಯಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ಕೇಂದ್ರ ಸರ್ಕಾರದ ಫಸಲ್ ಬಿಮಾ ಯೋಜನೆಯ ಲಾಭ ರೈತರಿಗೆ ತಲುಪುವಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT