ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರೈತರ ಕುಂದುಕೊರತೆ ಸಭೆ ಮಾಡದ ಸಿ.ಎಂ’

ನ.19ರಂದು ರೈತ ಸಂಘದಿಂದ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ
Last Updated 8 ನವೆಂಬರ್ 2018, 19:51 IST
ಅಕ್ಷರ ಗಾತ್ರ

ಚನ್ನಪಟ್ಟಣ: ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ನ.19ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಎಂ.ರಾಮು ತಿಳಿಸಿದರು.

ಪಟ್ಟಣದ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಸಮರೋಪಾದಿಯಲ್ಲಿ ಎದುರಿಸಬೇಕು. ಕೊಡುಗು ಪುನರ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದ ಪುನಶ್ಚೇತನಕ್ಕೆ ವಿಶೇಷ ಪ್ಯಾಕೇಜ್ ರೂಪಿಸಲು ಒತ್ತಾಯಿಸಲಾಗುವುದು ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ ನುಡಿದಂತೆ ನಡೆದು ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ರೈತ ಕುಲದ ಉಳಿವಿಗಾಗಿ ಸ್ಪಷ್ಟ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.

ಸಂಕಷ್ಟಕ್ಕೆ ಸಿಲುಕಿರುವ ರೈತರ ಕುಟುಂಬದ ಸಕಲ ಏಳಿಗೆಗೆ ನೆರವು ನೀಡಬೇಕು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದರು.

ಕ್ಷೇತ್ರದ ಶಾಸಕರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಗೆದ್ದು ಹೋದ ನಂತರ ತಾಲ್ಲೂಕಿನಲ್ಲಿ ರೈತರ ಕುಂದುಕೊರತೆ ಸಭೆ ಮಾಡಿಲ್ಲ. ಕೂಡಲೇ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ಮಾಡಿ ರೈತರ ಕುಂದು ಕೊರತೆ ಆಲಿಸಬೇಕು ಎಂದು ಆಗ್ರಹಿಸಿದರು.

ರೈತರು ಕೃಷಿ ಚಟುವಟಿಕೆಗಳಿಗಾಗಿ ಬ್ಯಾಂಕ್‌ಗಳಲ್ಲಿ ಅಡವಿಟ್ಟಿರುವ ಒಡವೆಗಳನ್ನು ಸರ್ಕಾರದ ಸ್ಪಷ್ಟ ಸೂಚನೆ, ಆದೇಶ ಬರುವವರೆಗೆ ಹರಾಜು ಹಾಕುವುದನ್ನು ನಿಲ್ಲಿಸಬೇಕು. ಜಿಲ್ಲೆಯಲ್ಲಿ ಯಾವುದೇ ಬ್ಯಾಂಕ್ ಅಧಿಕಾರಿಗಳು ರೈತರಿಗೆ ಕೃಷಿ ಸಾಲ ಪಾವತಿಸುವಂತೆ ಒತ್ತಾಯ, ಹಿಂಸೆ, ಕಿರುಕುಳ ನೀಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಲ್ಲಯ್ಯ ಮಾತನಾಡಿ, ಕುಮಾರಸ್ವಾಮಿ ಅವರು ತಾವು ನೀಡಿದ್ದ ಭರವಸೆ ಈಡೇರಿಸಬೇಕು. ಕನ್ನಂಬಾಡಿ ಅಣೆಕಟ್ಟೆ ಉಳಿಸಲು ಅದರ ಸುತ್ತಮುತ್ತಲು ನಡೆಯುತ್ತಿರುವ ಗಣಿಗಾರಿಕೆ ಶಾಶ್ವತವಾಗಿ ನಿಷೇಧಿಸಬೇಕು ಎಂದರು.

ಮೇಕೆದಾಟು ಅಣೆಕಟ್ಟು ಯೋಜನೆ ತ್ವರಿತವಾಗಿ ಪ್ರಾರಂಭ ಮಾಡಲು ಒತ್ತಾಯಿಸಿ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಕಾರ್ಯಕರ್ತರು ಸ್ವಯಂಪ್ರೇರಣೆಯಿಂದ ಭಾಗವಹಿಸಿ ಹೋರಾಟ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ರೈತ ಸಂಘದ ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷ, ಅಮ್ಮಳ್ಳಿದೊಡ್ಡಿ ಎಚ್.ನಾಗೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಕೃಷ್ಣಪ್ಪ, ಕಾರ್ಯದರ್ಶಿ ವಿಜಯಕುಮಾರ್, ಮಳೂರು ಹೋಬಳಿ ಘಟಕದ ಅಧ್ಯಕ್ಷ ಕನ್ನಸಂದ್ರದ ಗುರುಲಿಂಗಯ್ಯ, ಕಸಬಾ ಹೋಬಳಿ ಅಧ್ಯಕ್ಷ ಅಮ್ಮಳ್ಳಿದೊಡ್ಡಿ ನಾಗರಾಜು, ಚಿಕ್ಕತಾಯಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT