ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ದೆಹಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 29 ಜನರು ಪತ್ತೆ

300 ಮಸೀದಿಗಳಿಗೆ ನೋಟಿಸ್‌: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌
Last Updated 3 ಏಪ್ರಿಲ್ 2020, 20:30 IST
ಅಕ್ಷರ ಗಾತ್ರ

ವಿಜಯಪುರ: ದೆಹಲಿಯ ನಿಜಾಮುದ್ದೀನ್‌ ಪ್ರದೇಶದ ತಬ್ಲೀಗ್‌ ಜಮಾತ್‌ ಕೇಂದ್ರ ಕಚೇರಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ 29 ಜನರನ್ನು ಇದುವರೆಗೆ ಪತ್ತೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದರು.

ಕೊರೊನಾ ಸೋಂಕು ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಪರಿಶೀಲನಾ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪತ್ತೆ ಹಚ್ಚಲಾಗಿರುವ ದೆಹಲಿ ನಂಟಿರುವ ಎಲ್ಲರನ್ನೂ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ಹೇಳಿದರು.

ಮಸೀದಿಗಳಿಗೆ ನೋಟಿಸ್‌:ನಿಜಾಮುದ್ದೀನ್‌ ಧಾರ್ಮಿಕ ಸಭೆಗೆ ಹೋಗಿ ಬಂದಿರುವವರ ಮಾಹಿತಿಯನ್ನು ಕಡ್ಡಾಯವಾಗಿ ನೀಡಬೇಕು ಎಂದು ಜಿಲ್ಲೆಯ 300 ಮಸೀದಿಗಳಿಗೆ ನೋಟಿಸ್‌ ನೀಡಲಾಗಿದೆ. ಕೆಲವರು ಮಾಹಿತಿ ಮುಚ್ಚಿಡಲು ಯತ್ನಿಸುತ್ತಿದ್ದಾರೆ. ಹಾಗೊಂದು ವೇಳೆ ಮುಚ್ಚಿಟ್ಟರೆ ಅಂತವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಟ್ಟುನಿಟ್ಟಿನ ತಪಾಸಣೆ:ಜಿಲ್ಲೆಯಲ್ಲಿ ಒಟ್ಟು 27 ಚೆಕ್‌ ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗಿದೆ. ಗೂಡ್ಸ್‌, ಲಾರಿ, ಟ್ರಕ್‌ಗಳ ಮೂಲಕ ಸರಕು ಸಾಗಾಟಕ್ಕೆ ತೊಂದರೆಯಾಗದಂತೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಕ್ರಿಮಿನಲ್‌ ಕೇಸ್‌:ಹಂಜಗಿಯಲ್ಲಿ ಅನುಮತಿ ಇಲ್ಲದೇ ಧರ್ಮಪ್ರಚಾರದಲ್ಲಿ ನಿರತವಾಗಿದ್ದ ರಾಜಸ್ಥಾನದ 10 ಜನರನ್ನು ವಶಕ್ಕೆ ಪಡೆದು, ಅವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗಿದೆ ಎಂದು ಹೇಳಿದರು.

ನಿಷೇಧಾಜ್ಞೆ ಉಲ್ಲಂಘಿಸಿ ಪ್ರಾರ್ಥನೆಯಲ್ಲಿ ನಿರತ ಮೂರು ಮಸೀದಿಗಳ ವಿರುದ್ಧ ಹಾಗೂ ಸುಳ್ಳು ಸುದ್ದಿಯನ್ನು ವಾಟ್ಸ್‌ಆ್ಯಪ್‌ ಮೂಲಕ ಹರಿಬಿಟ್ಟಿದ್ದವರ ವಿರುದ್ಧ ಒಟ್ಟು 10 ಕ್ರಿಮಿನಲ್‌ ಕೇಸ್‌ಗಳನ್ನು ದಾಖಲಿಸಲಾಗಿದೆ ಎಂದರು.

950 ಬೈಕ್‌ ವಶ:ಲಾಕ್‌ಡೌನ್‌ ಆದ ಬಳಿಕ ರಸ್ತೆಯಲ್ಲಿ ಅನಗತ್ಯವಾಗಿ ಅಡ್ಡಾಡುತ್ತಿದ್ದ 950 ಬೈಕ್‌ಗಳನ್ನು ಸೀಜ್‌ ಮಾಡಲಾಗಿದೆ ಎಂದು ಹೇಳಿದರು.

ಮಾಹಿತಿ ನೀಡುವುದು ಕಡ್ಡಾಯ:ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದು, ಇವರಿಗೆ ಪ್ರತಿಯೊಬ್ಬರೂ ಮಾಹಿತಿ ನೀಡುವುದು ಕಡ್ಡಾಯ. ಮಾಹಿತಿ ನೀಡಲು ನಿರಾಕರಿಸಿದರೆ ಅಂತವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

ಸುಳ್ಳು ಸುದ್ದಿ ಹರಡಿದರೆ ಕ್ರಮ:ವಾಟ್ಸ್‌ಆ್ಯಪ್‌, ಯೂಟ್ಯೂಬ್‌ ಚಾನಲ್‌ಗಳಲ್ಲಿ ಕೊರೊನಾ ಸೋಂಕಿನ ಕುರಿತು ಸುಳ್ಳು ಸುದ್ದಿ ಹರಡಿ, ಜನರ ಜೀವನದ ಜೊತೆ ಚೆಲ್ಲಾಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಂಗಡಿ ಬಂದ್‌:ದಿನಸಿ, ಕಿರಾಣಿ ಅಂಗಡಿಗಳಲ್ಲಿ ಲಾಕ್‌ಡೌನ್‌ ಮುಗಿಯುವವರೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ವ್ಯಾಪಾರ, ವಹಿವಾಟು ನಡೆಸಿದರೆ ಅಂತಹ ಅಂಗಡಿಗಳನ್ನು ಬಂದ್ ಮಾಡಿಸಲಾಗುವುದು ಎಂದು ಹೇಳಿದರು.

ಅಕ್ರಮ ಮದ್ಯ:ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಮೇಲೆ ದಾಳಿ ನಡೆಸಿ, ದೂರು ದಾಖಲಿಸುವಂತೆ ಜಿಲ್ಲಾ ಅಬಕಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಹೇಂದ್ರ ಕಾಪ್ಸೆ, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಮುಕುಂದ ಗಲಗಲಿ, ಜಿಲ್ಲಾಸ್ಪತ್ರೆ ಸರ್ಜನ್‌ ಶರಣಪ್ಪ ಕಟ್ಟಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಜಂಟಿ ನಿರ್ದೇಶಕಿ ಸುರೇಖಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಮಲ್ಲನಗೌಡ ಬಿರಾದಾರ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಪ್ರಾಣೇಶ ಜಾಹಗೀರದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT