ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಮುಂಜಾಗ್ರತೆಗೆ ಸೂಚನೆ

ಡಿಸಿ ನೇತೃತ್ವದಲ್ಲಿ ಜಿಲ್ಲಾಮಟ್ಟದ ಜಾಗೃತಿ ಸಮಿತಿ ರಚನೆ
Last Updated 13 ಮಾರ್ಚ್ 2020, 14:12 IST
ಅಕ್ಷರ ಗಾತ್ರ

ವಿಜಯಪುರ: ‘ಜಿಲ್ಲೆಯಾದ್ಯಂತ ಕೊರೊನಾ ವೈರಸ್ (ಕೋವಿಡ್-19) ಪ್ರಕರಣಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮುತುವರ್ಜಿವಹಿಸಿ ಕಾರ್ಯ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೊರೊನಾ ವೈರಸ್ (ಕೋವಿಡ್-19) ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಸಂಬಂಧ ತಜ್ಞ ವೈದ್ಯರನ್ನು ಒಳಗೊಂಡ ಜಾಗೃತಿ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯ ಸದಸ್ಯರು ಜಿಲ್ಲಾ ಹಾಗೂ ತಾಲ್ಲೂಕು ಕಾರ್ಯಕ್ಷೇತ್ರದ ವ್ಯಾಪ್ತಿಯ ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಕೊರೊನಾ ವೈರಸ್ ಕುರಿತು ಜನರಿಗೆ ತಿಳಿವಳಿಕೆ ನೀಡಲು ಹಾಗೂ ಈ ವೈರಸ್ ಬಗ್ಗೆ ಮುನ್ನೆಚ್ಚರಿಕೆ ನೀಡಬೇಕು. ಕೊರೊನಾ ವೈರಸ್ ಪ್ರಕರಣಗಳು ಸಾಂಕ್ರಾಮಿಕವಾಗಿ ಹರಡದಂತೆ ಮುಂಜಾಗ್ರತೆ ವಹಿಸಬೇಕು’ ಎಂದು ಸೂಚಿಸಿದರು.

‘ಕೊರೊನಾ ವೈರಸ್ ತಡೆಗಟ್ಟಲು ಜಾಗೃತಿ ಸಮಿತಿಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ಎಸ್.ಎಲ್.ಲಕ್ಕಣ್ಣನವರ ಅವರಿಗೆ ವಿಜಯಪುರ ನಗರವನ್ನು ಕಾರ್ಯಕ್ಷೇತ್ರವನ್ನಾಗಿ ನೀಡಲಾಗಿದೆ. ಜಿಲ್ಲಾ ಕುಷ್ಠರೋಗ ನಿರ್ವಹಣಾಧಿಕಾರಿ ಡಾ.ಸಂಪತ್ ಗುಣಾರೆ ಅವರಿಗೆ ವಿಜಯಪುರ ಗ್ರಾಮೀಣ, ಬಸವನಬಾಗೇವಾಡಿ, ಮುದ್ದೇಬಿಹಾಳ ತಾಲ್ಲೂಕುಗಳನ್ನು ನೀಡಲಾಗಿದೆ. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಈರಣ್ಣ ಧಾರವಾಡಕರ್ ಅವರಿಗೆ ಇಂಡಿ ಹಾಗೂ ಸಿಂದಗಿ ತಾಲ್ಲೂಕುಗಳನ್ನು ನೀಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಸರ್ವೇಕ್ಷಣಾಧಿಕಾರಿ ಮುಕುಂದ ಗಲಗಲಿ ಅವರು ಕೊರೊನಾ ವೈರಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಗೃತಿ ಸಮಿತಿಯ ವೈದ್ಯಾಧಿಕಾರಿಗಳಿಂದ ಮಾಹಿತಿಯನ್ನು ಸಂಗ್ರಹಿಸಿ, ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ತಿಳಿಸಿದರು.

‘ಜಿಲ್ಲೆಗೆ ಸಂಬಂಧಿಸಿದಂತೆ ಕಾರ್ಯದ ಮೇಲುಸ್ತುವಾರಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಹಿಸಿಕೊಳ್ಳಬೇಕು ಹಾಗೂ ಎಲ್ಲಾ ತಾಲ್ಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸುಸಜ್ಜಿತವಾಗಿಟ್ಟುಕೊಳ್ಳಬೇಕು. ಜೊತೆಗೆ ಕೊರೊನಾ ವೈರಸ್ ಪ್ರಕರಣಗಳು ಹರಡದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ವಿಜಯಪುರದಿಂದ ಹಜ್ ಯಾತ್ರೆಗೆ ಹೋಗಿರುವ 10 ಜನರ ಮಾಹಿತಿಯನ್ನು ಹಜ್ ಕಮಿಟಿಯಿಂದ ಪಡೆಯಲಾಗಿದೆ. ಯಾತ್ರೆಯಿಂದ ಮರಳಿದ ತಕ್ಷಣ ಕೊರೊನಾ ವೈರಸ್‌ಗೆ ಸಂಬಂಧಿಸಿದ ಲಕ್ಷಣಗಳು ಕಂಡುಬಂದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಹಾಗೂ ಲ್ಯಾಬ್ ಪರೀಕ್ಷೆಗೆ ಕಳುಹಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಂದ್ರ ಕಾಪ್ಸೆ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ವಿಶ್ವ ಆರೋಗ್ಯ ಸಂಸ್ಥೆ ಸರ್ವೇಕ್ಷಣಾಧಿಕಾರಿ ಡಾ.ಮುಕುಂದ ಗಲಗಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT