ಸೋಮವಾರ, ಸೆಪ್ಟೆಂಬರ್ 27, 2021
21 °C
ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿದ ಸಚಿವ ಡಾ. ಸುಧಾಕರ

250 ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಡಾ.ಕೆ.ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಜಿರೆ: ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಖಾಲಿ ಹುದ್ದೆ ತುಂಬಿ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಚಾರ್ಮಾಡಿಯಲ್ಲಿ ₹ 1.37 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಹಾಗೂ ಕೊಕ್ಕಡದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದು, ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪ್ರಾಯೋಗಿಕವಾಗಿ ಮೇಲ್ದರ್ಜೆಗೇರಿಸಿ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಸವಲತ್ತು ನೀಡುವ ಉದ್ದೇಶವಿದೆ. ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 1,763 ವೈದ್ಯರು ಹಾಗೂ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಒಂದು ವರ್ಷ ಕಡ್ಡಾಯ ಸೇವೆಯಡಿ 2,050 ವೈದ್ಯರ ನೇಮಕವಾಗಿದೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ 26 ವೈದ್ಯರನ್ನು ನೀಡಲಾಗಿದೆ. ಹೊಸ ನೇಮಕಾತಿಯಲ್ಲಿ 18 ತಜ್ಞರು, 40 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ದಕ್ಷಿಣ ಕನ್ನಡದ ಆಸ್ಪತ್ರೆಗಳಲ್ಲಿ ನೇಮಿಸಲಾಗಿದೆ’ ಎಂದರು.

ಕೊಕ್ಕಡದಲ್ಲಿ 30 ಹಾಸಿಗೆಗಳ ₹ 4.8 ಕೋಟಿ ವೆಚ್ಚದ ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟಿಸಲಾಗಿದೆ. ಇಲ್ಲಿಗೆ ಬೇಕಾದ ಸಲಕರಣೆಗಳನ್ನು ಒದಗಿಸಲಾಗುವುದು. ಕೆಐಒಸಿಎಲ್ ಸಂಸ್ಥೆಯಿಂದ ಹಾಸಿಗೆಗಳನ್ನು ಇಲ್ಲಿಗೆ ನೀಡಲಾಗಿದೆ. ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಬಡವರು ಇಲ್ಲಿ ಪಡೆಯಬಹುದು ಎಂದು ತಿಳಿಸಿದರು.

ಸಂಭವನೀಯ ಕೋವಿಡ್ 3ನೇ ಅಲೆಗೆ ಪೂರಕವಾಗಿ ರಾಜ್ಯದಲ್ಲಿ 153 ಮಕ್ಕಳ ತಜ್ಞರನ್ನು ನೇಮಿಸಲಾಗಿದೆ. ತಾಲೂಕು ಆಸ್ಪತ್ರೆಗಳಿಗೆ ಕಳುಹಿಸಿರುವ ವೈದ್ಯರಿಗೆ ಮಕ್ಕಳ ಚಿಕಿತ್ಸೆ ಕುರಿತು ತರಬೇತಿ ನೀಡಲಾಗುವುದು. ನರ್ಸ್ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಲಾಗುತ್ತಿದೆ. ಜೊತೆಗೆ ಲಸಿಕೆ ನೀಡುವ ಕಾರ್ಯಕ್ರಮ ಉತ್ತಮವಾಗಿ ನಡೆಯುತ್ತಿದೆ. ಕೆಲದಿನಗಳಿಂದ ಲಸಿಕಾ ಅಭಿಯಾನ ಮಂದಗತಿಯಲ್ಲಿ ಸಾಗಿದೆ. ಮುಂದಿನ ತಿಂಗಳಿಂದ ಹೆಚ್ಚು ಲಸಿಕೆ ಕಳುಹಿಸಲಾಗುವುದು ಎಂದು ಸಚಿವ ಸುಧಾಕರ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು