ಉಪ್ಪಿನಂಗಡಿ (ದಕ್ಷಿಣ ಕನ್ನಡ): ಕಡಬ ತಾಲ್ಲೂಕಿನ ಕುಂತೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ದುರಸ್ತಿ ಕಾರ್ಯ ಪ್ರಗತಿಯಲ್ಲಿರುವಾಗಲೇ ಗೋಡೆ ಹಾಗೂ ಚಾವಣಿ ಕುಸಿದು ನಾಲ್ವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.
ಗೋಡೆ ಕುಸಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮೈದಾನದಲ್ಲಿ ಆಟೋಟ ಚಟುವಟಿಕೆಯಲ್ಲಿ ತೊಡಗಿದ್ದರು. ನಾಲ್ವರು ವಿದ್ಯಾರ್ಥಿನಿಯರು ಮಾತ್ರ ಕೊಠಡಿಯೊಳಗಿದ್ದರು. ಹಾಗಾಗಿ ಹೆಚ್ಚಿನ ಅನಾಹುತ ಆಗುವುದು ತಪ್ಪಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ‘ಈ ಶಾಲೆ 74 ವರ್ಷ ಹಳೆಯದು. ಇದರ ಕೊಠಡಿಗಳ ದುರಸ್ತಿಗೆ ಅನುದಾನ ಬಿಡುಗಡೆಯಾಗಿತ್ತು. ಕಟ್ಟಡದ ತಳಪಾಯವನ್ನು ಬಲಪಡಿಸಲು ಜೆಸಿಬಿ ಬಳಸಿ ಕಾಮಗಾರಿ ನಡೆಸಲಾಗುತಿತ್ತು. ಆಗ ಏಕಾಏಕಿ ಗೋಡೆ ಮತ್ತು ಚಾವಣಿ ಕುಸಿದಿದೆ. ನಾಲ್ವರು ಬಾಲಕಿಯರ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಗೆ ಚಿಕಿತ್ಸೆ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.
ಡಿಡಿಪಿಐ ವೆಂಕಟೇಶ ಪಟಗಾರ, ‘ಈ ಶಾಲೆಯಲ್ಲಿ 181 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕಟ್ಟಡ ಶಿಥಿಲಗೊಂಡಿದ್ದ ಕಾರಣ ದುರಸ್ತಿಗೆ ಪ್ರಕೃತಿ ವಿಕೋಪ ನಿಧಿಯಡಿ ₹ 1.50 ಲಕ್ಷ ಅನುದಾನ ಬಿಡುಗಡೆಯಾಗಿತ್ತು. ಇದರ ಕಾಮಗಾರಿ ನಡೆಯುತ್ತಿರುವಾಗಲೇ ಈ ಅನಾಹುತ ಸಂಭವಿಸಿದೆ’ ಎಂದು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.
‘ನಾಲ್ವರು ವಿದ್ಯಾರ್ಥಿನಿಯರು ಕೊಠಡಿಯೊಳಗೆ ಉಳಿದುಕೊಂಡಿದ್ದು ಹೇಗೆ ಎಂದು ಪರಿಶೀಲನೆ ನಡೆಸುತ್ತಿದ್ದೇವೆ. ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ಇರುವಾಗ ಒಬ್ಬರಾದರೂ ಶಿಕ್ಷಕರು ಆ ಕೊಠಡಿಯಲ್ಲಿರಬೇಕು. ಕರ್ತವ್ಯ ಲೋಪದ ಕಾರಣಕ್ಕೆ ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ವಹಿಸಲಾಗಿದೆ’ ಎಂದು ವೆಂಕಟೇಶ ಪಟಗಾರ ತಿಳಿಸಿದರು.
ಮಂಗಳವಾರ ಬೆಳಿಗ್ಗೆಯಿಂದಲೇ ಕುಂತೂರು ಪರಿಸರದಲ್ಲಿ ಮಳೆಯಾಗಿತ್ತು. ಶಾಲೆಯಲ್ಲಿ ಜೆಸಿಬಿ ಬಳಸಿ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.
ಎಚ್.ಎಂ. ಎಂಜಿನಿಯರ್ ಅಮಾನತು
ಕಾಮಗಾರಿ ವೇಳೆ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣಕ್ಕೆ ಶಾಲೆಯ ಮುಖ್ಯೋಪಾಧ್ಯಾಯಿನಿ ರಮ್ಯಶ್ರೀ ಹಾಗೂ ಕಿರಿಯ ಎಂಜಿನಿಯರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಮಾನತು ಮಾಡಿದ್ದಾರೆ.
‘ಕಾಮಗಾರಿ ಪ್ರಗತಿಯಲ್ಲಿರುವಾಗ ಆ ಸ್ಥಳದಲ್ಲಿ ವಿದ್ಯಾರ್ಥಿಗಳು ಇಲ್ಲದಂತೆ ಮುಖ್ಯೋಪಾಧ್ಯಾಯರು ಕ್ರಮ ವಹಿಸಬೇಕಿತ್ತು. ನಿತ್ಯವೂ ತರಗತಿ ಆರಂಭವಾಗುವ ಮುನ್ನ ಕೊಠಡಿಗಳ ಸುರಕ್ಷತೆಯನ್ನು ಖಾತರಿಪಡಿಸಿಕೊಂಡ ನಂತರವೇ ವಿದ್ಯಾರ್ಥಿಗಳು ಕೊಠಡಿ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಶಾಲೆಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಈ ಘಟನೆ ಬಗ್ಗೆ ಸಮಗ್ರವಾದ ತನಿಖೆ ನಡೆಸಲಿದ್ದೇವೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.