ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕಿತ್ಸೆಗೆ 4,816 ಹಾಸಿಗೆಗಳ ವ್ಯವಸ್ಥೆ: ಕೋಟ ಶ್ರೀನಿವಾಸ ಪೂಜಾರಿ

ಕೋವಿಡ್‌ ನಿಯಂತ್ರಣ ಮಾರ್ಗಸೂಚಿ ಕಟ್ಟುನಿಟ್ಟಿನ ಜಾರಿ
Last Updated 24 ಏಪ್ರಿಲ್ 2021, 5:32 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊರಡಿಸಿರುವ ಹಲವು ಕಠಿಣ ನಿಯಮಗಳನ್ನು ಒಳಗೊಂಡ ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

3,035 ಸಾಮಾನ್ಯ ಬೆಡ್‌ಗಳು, 1,263 ಆಕ್ಸಿಜೆನ್ ಬೆಡ್‌ಗಳು, 243 ಹೈಪ್ರೆಷರ್ ಬೆಡ್‌ಗಳು, 135 ಐಸಿಯು ಬೆಡ್‌ಗಳು, 140 ವೆಂಟಿಲೇಟರ್ ಐಸಿಯು ಬೆಡ್‌ ಸೇರಿದಂತೆ ಒಟ್ಟು 66 ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4,816 ಹಾಸಿಗೆಗಳನ್ನು ಕಾದಿರಿಸಲಾಗಿದೆ ಎಂದರು.

ಕೊರೊನಾ ನಿರೋಧಕ ಲಸಿಕೆ ಯನ್ನು 18 ವರ್ಷ ಮೇಲಿನ ಎಲ್ಲರಿಗೂ ನೀಡಲು ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಇದನ್ನು ಅನುಷ್ಠಾನಗೊಳಿಸಲು ಅವಶ್ಯವಿರುವ ಲಸಿಕೆ ದಾಸ್ತಾನು ಇಟ್ಟುಕೊಳ್ಳಬೇಕು. ಎಲ್ಲರಿಗೂ ಲಸಿಕೆ ನೀಡಲು ಕ್ರಮಬದ್ಧ ಯೋಜನೆ ರೂಪಿಸುವಂತೆ ಸೂಚಿಸಿದರು.

ಸಂಸದ ನಳಿನ್‌ಕುಮಾರ್ ಕಟೀಲ್ ಮಾತನಾಡಿ, ಕರಾವಳಿ ಜಿಲ್ಲೆ ಗಳು ಇತರ ಜಿಲ್ಲೆಗಳಿಗಿಂತ ಸ್ವಲ್ಪ ವಿಭಿನ್ನ ವಾಗಿದ್ದು, ಮಾರ್ಗಸೂಚಿಗಳನ್ನು ಅನುಷ್ಠಾನ ಮಾಡುವಾಗ ಇಲ್ಲಿನ ಕಾರ್ಯ ಚಟುವಟಿಕೆಗಳನ್ನು ಅರಿತು ಕಾರ್ಯ ರೂಪಕ್ಕೆ ತರಬೇಕು. ಮೀನುಗಾರಿಕಾ ಚಟುವಟಿಕೆಗಳಿಗೆ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು, ಹೊರ ರಾಜ್ಯದಿಂದ ಉದ್ಯೋಗ ಅರಸಿ ಕಟ್ಟಡ ನಿರ್ಮಾಣ ಸೇರಿದಂತೆ ಮತ್ತಿತರ ಕೆಲಸ ನಿರ್ವಹಿಸಲು ಬಂದಿರುವ ಕಾರ್ಮಿಕರು ವಾಪಸ್ ಹೋಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣ ಹಾಗೂ ಚಿಕಿತ್ಸೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಯ ನಿರ್ವಹಣೆಯ ಮೇಲುಸ್ತು ವಾರಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.

ವೆನ್‍ಲಾಕ್ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡಲು ಹೆಚ್ಚಿನ ವೈದ್ಯರು, ಶುಶ್ರೂಷಕರು ಹಾಗೂ ಮತ್ತಿತರ ಸಿಬ್ಬಂದಿ ನೇಮಕ ಮಾಡಲು ಕೆಎಂಸಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಯು., ಹರೀಶ್ ಪೂಂಜ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಳಾ ರಾವ್, ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್ ಇದ್ದರು.

‘ಹೆಚ್ಚು ಶುಲ್ಕ ಪಡೆದಲ್ಲಿ ದೂರು ನೀಡಿ’
ಕೋವಿಡ್ ದೃಢಪಟ್ಟು ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವಂತಹ ಪ್ರಕರಣಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಅಡಿಯಲ್ಲಿ ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸಾಮಾನ್ಯ ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ದರದಲ್ಲಿ ಶುಲ್ಕವನ್ನು ಪಡೆಯಬಹುದು. ಹೆಚ್ಚಿನ ಶುಲ್ಕ ಪಡೆದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಬಹುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT