ಸೋಮವಾರ, ಜೂನ್ 21, 2021
21 °C
ಹೋಂ ಐಸೋಲೇಷನ್‌ನಲ್ಲಿ ಶೇ 85ರಷ್ಟು ರೋಗಿಗಳು: ಶ್ರೀನಿವಾಸ ಪೂಜಾರಿ

Covid-19 | ನಿತ್ಯ ಆರೋಗ್ಯ ವಿಚಾರಿಸಿ: ಸೂಕ್ತ ಚಿಕಿತ್ಸೆ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕೋವಿಡ್‌–19 ಸೋಂಕಿತರಲ್ಲಿ ಶೇ 85.70 ಗೂ ಹೆಚ್ಚು ರೋಗಿಗಳು ಹೋಂ ಐಸೋಲೇಷನ್ ಚಿಕಿತ್ಸೆ ಪಡೆಯುತ್ತಿದ್ದು, ಇವರ ಆರೋಗ್ಯ ಕ್ಷೇಮಗಳನ್ನು ವಿಚಾರಿಸಲು ವೈದ್ಯಕೀಯ ತಂಡಗಳನ್ನು ರಚನೆ ಮಾಡಬೇಕು. ಅವರಿಗೆ ಸೂಕ್ತ ಚಿಕಿತ್ಸೆ ಕೊಡಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂ ಗಣದಲ್ಲಿ ಬುಧವಾರ ನಡೆದ ವೈದ್ಯಕೀಯ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 8,414 ಸಕ್ರಿಯ ಪ್ರಕರಣಗಳಿದ್ದು, 1,204 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7,210 ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೇ 14.30 ರಷ್ಟು ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ, ಉಳಿದವರು ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ. ಅವರಲ್ಲಿ ಶೇ 75 ರಷ್ಟು ನಗರ ಪ್ರದೇಶದವರೇ ಇದ್ದಾರೆ, ಅವರಿಗೆ ಸೂಕ್ತ ಚಿಕಿತ್ಸೆ ನೀಡಿ, ನಿತ್ಯ ಯೋಗಕ್ಷೇಮ ವಿಚಾರಿಸಬೇಕು ಎಂದು ಹೇಳಿದರು.

ಇವರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರನ್ನು ಒಳಗೊಂಡ 78 ಕ್ಕೂ ಹೆಚ್ಚು ತಂಡಗಳನ್ನು ರಚಿಸಲಾಗಿದೆ. ಮನೆ ಮನೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು. ಇವುಗಳ ಮೇಲ್ವಿಚಾರಣೆ ಮಾಡಲು ಸಹ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಸಂಸದ ನಳಿನ್‌ಕುಮಾರ್ ಕಟೀಲ್ ಮಾತನಾಡಿ, ಮನೆಯಲ್ಲಿಯೇ ಚಿಕಿತ್ಸೆ ಪಡೆಯುವವರಲ್ಲಿ ಉಸಿರಾಟದ ಸಮಸ್ಯೆ ಉಂಟಾಗಿ ಕೊನೆ ಗಳಿಗೆ ಯಲ್ಲಿ ಆಸ್ಪತ್ರೆಗೆ ಬರುತ್ತಾರೆ. ಇದಕ್ಕೆ ಆಸ್ಪದ ನೀಡಬಾರದು. ಸೋಂಕಿ ತರು ತಮಗಾಗುವ ತೊಂದರೆ ಗಳನ್ನು ನಿತ್ಯ ಕಂಟ್ರೋಲ್ ರೂಂನಲ್ಲಿ ಕಾರ್ಯ ನಿರ್ವಹಿಸುವ ವೈದ್ಯಾಧಿಕಾರಿಗಳು ಹಾಗೂ ಎಎನ್ಎಂಗಳನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದ್ದು, ವೆಂಟಿಲೇಟರ್‌ಗಳು ಹಾಗೂ ವೆಂಟಿಲೇಟರ್‌ಗಳನ್ನು ಒಳಗೊಂಡ ಆಂಬುಲೆನ್ಸ್‌ಗಳನ್ನು ಜಿಲ್ಲಾಡಳಿತದಿಂದ ಒದಗಿಸಲಾಗುವುದು. ಅದಕ್ಕೆ ಅಗತ್ಯವಿರುವ ಸಿದ್ಧತೆಗಳನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೆಲವು ಖಾಸಗಿ ಸಂಸ್ಥೆಗಳು ಧಾರ್ಮಿಕ ಸಂಸ್ಥೆಗಳು ಕೋವಿಡ್ ಕೇರ್ ಸೆಂಟರ್ ಗಳನ್ನು ತೆಗೆಯಲು ಮುಂದೆ ಬರುತ್ತಿವೆ. ಮೂಲ ಸೌಕರ್ಯಗಳ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಪರಿಶೀಲನೆ ನಡೆಸಿ ಒಪ್ಪಿಗೆ ನೀಡಿದ ನಂತರ ಇಂತಹ ಕೇಂದ್ರಗಳನ್ನು ತೆರೆಯಲು ಮುಂದಾಗಬೇಕು ಎಂದರು.

ಶಾಸಕ ಡಾ.ಭರತ್ ವೈ. ಶೆಟ್ಟಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ದಿನೇಶ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್, ಜಿಲ್ಲಾ ಶಸ್ತ್ರಚಿಕಿತ್ಸಕ ಚಿಕಿತ್ಸಕ ಡಾ. ಸದಾಶಿವ ಶ್ಯಾನುಭೋಗ್‌, ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ.ಆರ್., ಡಾ.ಚಕ್ರಪಾಣಿ, ಡಾ. ಅಭಯ ನಿರ್ಗುಡೆ, ಡಾ. ಶ್ರೀಪಾದ ಜಿ. ಮಚಂದಳಿ, ವೈದ್ಯಾಧಿಕಾರಿಗಳು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು