ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆನ್ಲಾಕ್‌ಗೆ ಹೆಚ್ಚುವರಿ ಪರೀಕ್ಷಾ ಯಂತ್ರ

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
Last Updated 30 ಏಪ್ರಿಲ್ 2021, 16:30 IST
ಅಕ್ಷರ ಗಾತ್ರ

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕು ಪರೀಕ್ಷಿಸುವ ಹೆಚ್ಚುವರಿ ಪರೀಕ್ಷಾ ಯಂತ್ರವನ್ನು ₹ 25 ಲಕ್ಷ ವೆಚ್ಚದಲ್ಲಿ ಮೂರು ದಿನಗಳ ಒಳಗೆ ಅಳವಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆ ನೀಡುವ ಕುರಿತು ಬಂಟ್ವಾಳ, ಪುತ್ತೂರು, ಸುಳ್ಯ ತಾಲ್ಲೂಕುಗಳ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಶುಕ್ರವಾರ ಇಲ್ಲಿ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಯ ಫಲಿತಾಂಶ ವಿಳಂಬವಿಲ್ಲದೇ ದೊರೆಯಬೇಕು ಎಂಬ ಉದ್ದೇಶದಿಂದ ವೆನ್ಲಾಕ್‌ ಆಸ್ಪತ್ರೆಗೆ 3ನೇ ಹೆಚ್ಚುವರಿ ಪರೀಕ್ಷಾ ಯಂತ್ರ ಅಳವಡಿಸಲಾಗುತ್ತದೆ ಎಂದರು.

ಕೋವಿಡ್ ಸೋಂಕು ನಿಯಂತ್ರಣ ತರಲು ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದು, ಅದನ್ನು ಜಿಲ್ಲೆಯಲ್ಲಿ ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಕೋವಿಡ್‍ನಿಂದ ಮರಣ ಹೊಂದಿದವರ ಶವ ಸಾಗಾಣೆಗೆ ಉಚಿತ ಆಂಬುಲೆನ್ಸ್ ನೀಡುವ ಜತೆಗೆ ಶವ ಸಂಸ್ಕಾರದ ವೆಚ್ಚವನ್ನು ಸಹ ಸರ್ಕಾರವೇ ಭರಿಸುತ್ತದೆ. ತಹಶೀಲ್ದಾರ್‌ಗಳಿಗೆ ತಕ್ಷಣ ಹಣ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವವರಿಗೆ ಉತ್ತಮ ಚಿಕಿತ್ಸೆ ನೀಡುವ ಜೊತೆಗೆ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಗುರುತಿಸಿ, ಹೋಮ್‌ ಕ್ವಾರಂಟೈನ್ ಮಾಡಬೇಕು. ಮೊಬೈಲ್ ಸ್ವ್ಯಾಬ್ ಟೆಸ್ಟಿಂಗ್ ವಾಹನವನ್ನು ಅವರಿದ್ದಲ್ಲಿಯೇ ಕೊಂಡೊಯ್ದು ಗಂಟಲು ದ್ರವ ಸಂಗ್ರಹಿಸಬೇಕು. ತಾಲ್ಲೂಕು ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ 50 ಐಸಿಯು ಘಟಕಗಳನ್ನು ಸ್ಥಾಪಿಸಿ, ಚಿಕಿತ್ಸೆ ನೀಡಬೇಕು. ಇದರಿಂದ ಜಿಲ್ಲಾ ಮಟ್ಟದ ಕೋವಿಡ್ ಕೇಂದ್ರಗಳಲ್ಲಿ ಒತ್ತಡ ಕಡಿಮೆಯಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಶಾಸಕ ರಾಜೇಶ್ ನಾಯ್ಕ್, ಕುಟುಂಬ ಕಲ್ಯಾಣ ಅಧಿಕಾರಿ ಕಿಶೋರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT