ಉಜಿರೆ: ಇಲ್ಲಿನ ಹಳೆಪೇಟೆ ನಿವಾಸಿ ರಿಕ್ಷಾ ಚಾಲಕ ಮಹಮ್ಮದ್ ಆಶಿಕ್ ಮೇಲೆ ದೈಹಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇತ್ತೀಚೆಗೆ ಮಹಮ್ಮದ್ ಆಶಿಕ್ ತನ್ನ ರಿಕ್ಷಾದಲ್ಲಿ ಯುವತಿಯೊಬ್ಬಳನ್ನು ಉಜಿರೆಯಿಂದ ಧರ್ಮಸ್ಥಳದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದರು. ವಾಪಸ್ ಉಜಿರೆಗೆ ಬಂದಾಗ ಅಪರಿಚಿತ ಯುವಕರ ತಂಡ ಅವರ ಮೇಲೆ ಹಲ್ಲೆ ನಡೆಸಿತ್ತು. ಗಂಭೀರವಾಗಿ ಗಾಯಗೊಂಡ ಅವರು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ಉಪ್ಪಿನಂಗಡಿಯ ಅಕ್ಷತ್, ಧರ್ಮಸ್ಥಳದ ಅವಿನಾಶ್ ಮತ್ತು ಸಂದೀಪ್ ಬಂಧಿತ ಆರೋಪಿಗಳು. ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬ್ಯಾನರ್ ತೆರವಿಗೆ ಒತ್ತಾಯ
ಉಜಿರೆ: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಹಲವೆಡೆ ಬ್ಯಾನರ್‌ಗಳನ್ನು ಹಾಕಲಾಗಿದೆ.
ಬೆಳ್ತಂಗಡಿ ತಾಲ್ಲೂಕಿನ ಪ್ರಜ್ಞಾವಂತ ನಾಗರಿಕರು ಎಂಬ ಹೆಸರಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಅನಾಮಿಕ ಪತ್ರ ಬರೆದಿದ್ದು ಬ್ಯಾನರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇದನ್ನು ಗಂಭಿರವಾಗಿ ಪರಿಗಣಿಸಿದ ಎಸ್.ಪಿ. ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆ ಇರುವುದರಿಂದ ಅನಧಿಕೃತವಾಗಿ ಹಾಕಿರುವ ರಾಜಕೀಯ, ಧಾರ್ಮಿಕ ಹಾಗೂ ಸೌಜನ್ಯ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದ ಎಲ್ಲ ಬ್ಯಾನರ್ ಮತ್ತು ಫ್ಲೆಕ್ಸ್ ತೆರವುಗೊಳಿಸುವಂತೆ ಆದೇಶ ನೀಡಿ, ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ಮತ್ತು ತಾಲ್ಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಲ್ಲಾ ಗ್ರಾಮ ಪಂಚಾಯಿತಿ ಪಿಡಿಒಗೆ ಪತ್ರ ಬರೆದು ಅನಧಿಕೃತವಾದ ಎಲ್ಲ ಬ್ಯಾನರ್ ತೆರವುಗೊಳಿಸಲು ನಿರ್ದೇಶನ ನೀಡಿದ್ದಾರೆ.
ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.4ರಂದು ಉಜಿರೆಯಲ್ಲಿ ಸಮಾವೇಶ ನಡೆದಿದ್ದು, ಆ. 28ರಂದು ಬೆಳ್ತಂಗಡಿ ತಾಲ್ಲೂಕು ಕೇಂದ್ರದಲ್ಲಿ ಮತ್ತೊಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.