ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೆ ಬಂದರು: ಮೀನು ವ್ಯಾಪಾರ ನಿಷೇಧ -ಜಿಲ್ಲಾಧಿಕಾರಿ ಸೂಚನೆ

ಶಾಸಕರು, ಮೀನುಗಾರಿಕೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ
Last Updated 4 ಮೇ 2021, 3:35 IST
ಅಕ್ಷರ ಗಾತ್ರ

ಮಂಗಳೂರು: ನಗರದ ಮೀನುಗಾರಿಕಾ ಬಂದರಿನಲ್ಲಿ ಚಿಲ್ಲರೆ ಮೀನು ಮಾರಾಟ ಹಾಗೂ ಸಾರ್ವಜನಿಕರು ಖರೀದಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಹಳೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ಸೋಮವಾರ ನಡೆದ ಶಾಸಕರು ಹಾಗೂ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಮೀನುಗಾರಿಕಾ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಗಳನ್ನು ಗಾಳಿಗೆ ತೂರಿ, ಮೀನು ಖರೀದಿಗೆ ದುಂಬಾಲು ಬೀಳುತ್ತಿದ್ದಾರೆ. ಇದರಿಂದ ಸೋಂಕು ಹರಡುವ ಸಾಧ್ಯತೆ ಇದ್ದು, ಸಾರ್ವಜನಿಕರು ಬಂದರು ದಕ್ಕೆಯಲ್ಲಿ ಮೀನು ಖರೀದಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮಗಳ ಉಲ್ಲಂಘನೆ ಮಾಡಿದರೆ ಅಂಥವರ ವಿರುದ್ಧ ದಂಡ ವಸೂಲಿ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಾರ್ವಜನಿಕರು ಸ್ಥಳೀಯ ಮೀನು ಮಾರುಕಟ್ಟೆಗಳಲ್ಲಿ ಮೀನು ಖರೀದಿಸಿ, ಅಲ್ಲೇ ಕಟ್ಟಿಂಗ್ ಮತ್ತು ಶುಚಿಗೊಳಿಸಬಹುದು ಎಂದ ಅವರು, ಪಾಲಿಕೆ ವ್ಯಾಪ್ತಿ ಹೋಲ್‌ಸೇಲ್ ಮಾರುಕಟ್ಟೆಯಲ್ಲಿ ಹೊರ ರಾಜ್ಯದ ಮೀನು ತಂದು ರಿಟೇಲ್ ಅಥವಾ ಚಿಲ್ಲರೆ ವ್ಯಾಪಾರವನ್ನು ಕೂಡ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಜನ ಅನಗತ್ಯವಾಗಿ ಬಂದರಿನಲ್ಲಿ ಓಡಾಡುವು ದನ್ನು ಕಡ್ಡಾ ಯವಾಗಿ ನಿಷೇಧಿಸಲಾಗಿದೆ ಎಂದರು.

ವರ್ತಕರು ಕಾರ್ಮಿಕರಿಗೆ ಸ್ಯಾನಿಟೈಸರ್ ಮತ್ತು ಸಾಧ್ಯವಾಗುವಷ್ಟು ಬಟ್ಟೆಯಿಂದ ತಯಾರಿಸಿರುವ ಮಾಸ್ಕ್‌ಗಳನ್ನು ಒದಗಿಸಬೇಕು. ಬಂದರು ದಕ್ಕೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ ಮೀನುಗಾರಿಕಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುವುದು ಎಂದು ಹೇಳಿದರು.

‘ಮಾರ್ಗಸೂಚಿ ಉಲ್ಲಂಘಿಸಿದರೆ ಶಿಕ್ಷೆ’: ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ 1 ವರ್ಷದ ಜೈಲು ಶಿಕ್ಷೆ ಅಥವಾ ಆದೇಶ ಪಾಲಿಸದಿದ್ದರೆ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು. ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ ಪ್ರಕಾರ ಮೂರು ತಿಂಗಳಿಗೆ ಕಡಿಮೆಯಿಲ್ಲದ, ಐದು ವರ್ಷಗಳಿಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ₹50 ಸಾವಿರದಿಂದ ₹ 2 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಎಚ್ಚರಿಸಿದರು.

ಶಾಸಕ ವೇದವ್ಯಾಸ್ ಕಾಮತ್, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ದಿನೇಶ್‌ ಕುಮಾರ್, ಎಸಿಪಿ ಪಿ.ಎ.ಹೆಗ್ಡೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT