ಮಂಗಳೂರು: ನಗರದ ಬಂದರಿನ ದಕ್ಕೆ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಲ ಕಾರ್ಮಿಕರನ್ನು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮಕ್ಕಳ ಸಹಾಯವಾಣಿಗೆ ಬಂದ ದೂರು ಆಧರಿಸಿ ಗುರುವಾರ ರಕ್ಷಣೆ ಮಾಡಿದ್ದಾರೆ. ಅವರನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ.
ಕಾರ್ಮಿಕ ಇಲಾಖೆ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಪೊಲೀಸ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
'14 ವರ್ಷದೊಳಗಿನ ಬಾಲ ಕಾರ್ಮಿಕರನ್ನು ಯಾವುದೇ ಕೆಲಸಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ. 15ರಿಂದ 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವಂತಿಲ್ಲ. ಈ ನಿಯಮವನ್ನು ಉಲ್ಲಂಘಿಸಿದ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗುತ್ತದೆ. ಮಾಲೀಕರಿಗೆ ₹ 50 ಸಾವಿರದವರೆಗೆ ದಂಡ ಹಾಗೂ ಎರಡು ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲು ಬಾಲ ನ್ಯಾಯ ಕಾಯ್ದೆಯಲ್ಲಿ ಅವಕಾಶವಿದೆ.'
ಬಾಲಕಾರ್ಮಿಕರ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿಗೆ (1098) ಅಥವಾ ಕಾರ್ಮಿಕ ಇಲಾಖೆಗೆ (ದೂರವಾಣಿ ಸಂಖ್ಯೆ 0824-2435343, 2433132, 2437479) ಅಥವಾ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘಕ್ಕೆ (ದೂರವಾಣಿ ಸಂಖ್ಯೆ 2433131) ದೂರು ನೀಡಬಹುದು ಎಂದು ಕಾರ್ಮಿಕರ ಇಲಾಖೆಯ ಪ್ರಕಟಣೆ ತಿಳಿಸಿದೆ.