ಮಂಗಳೂರು: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂದಿನ 48 ಗಂಟೆಗಳ ಅವಧಿಯವರೆಗೆ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆ ಖಂಡಿಸಿ ಮಂಗಳೂರಿನಲ್ಲಿ ಈಚೆಗೆ ನಡೆದ ಪ್ರತಿಭಟನೆ ವೇಳೆ ಶರಣ್ ಪಂಪ್‌ವೆಲ್,' ಹಿಂದೂಗಳು ಮನಸು ಮಾಡಿದರೆ ಈದ್ ಮೆರವಣಿಗೆ ಅಸಾಧ್ಯ' ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಹೇಳಿಕೆ ನೀಡಿದ್ದ ಮಹಮ್ಮದ್ ಶರೀಫ್ ‘ತಾಕತ್ತಿದ್ದರೆ ಬಿ.ಸಿ.ರೋಡ್ ಗೆ ಬನ್ನಿ’ ಎಂದು ಸವಾಲೆಸೆದಿದ್ದರು.
ಈ ಕುರಿತು ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದ ಬಜರಂಗದಳ ಮುಖಂಡ ಪುನೀತ್ ಅತ್ತಾವರ್, ‘ನಾವು 'ಚಲೋ ಬಿ.ಸಿ.ರೋಡ್’ ಹಮ್ಮಿಕೊಳ್ಳುತ್ತೇವೆ. ತಡೆಯುವವರು ತಡೆಯಿರಿ ' ಎಂದು ಪ್ರತಿ ಸವಾಲು ಹಾಕಿದ್ದರು. ಸೋಮವಾರ ಬೆಳಿಗ್ಗೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದವರು ಬಿ.ಸಿ.ರೋಡ್‌ನಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿ ಪ್ರತಿಭಟನದ ನಡೆಸಿದ್ದರು.
ಇದರ ಬೆನ್ನಲ್ಲೇ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಅವರು, ‘ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾರ್ಯಕರ್ತರು ಅಲ್ಲಲ್ಲಿ ಸೇರಿಕೊಂಡು ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆಗಳಿವೆ. ಬಂಟ್ವಾಳ ನಗರ ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತವನ್ನು ಕೋರಿದ್ದರು. ಬಳಿಕ ಜಿಲ್ಲಾಧಿಕಾರಿಯವರು ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಸಲುವಾಗಿ ಈ ಆದೇಶ ಹೊರಡಿಸಿದ್ದಾರೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.