ಗುರುವಾರ , ಮೇ 26, 2022
23 °C
ಮಾಜಿ ಸಚಿವ ರಮಾನಾಥ ರೈ ಆಗ್ರಹ

ಬಿಟ್‌ ಕಾಯಿನ್; ನ್ಯಾಯಾಧೀಶರಿಂದ ತನಿಖೆ ನಡೆಯಲಿ: ರಮಾನಾಥ ರೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್‍ನವರೂ ಇದ್ದಾರೆ ಎಂದು ಹೇಳುವ ಮೂಲಕ ಪ್ರಕರಣ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ. ನ್ಯಾಯಾಧೀಶರಿಂದ ಈ ಪ್ರಕರಣದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆಗ್ರಹಿಸಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಗರಣದಲ್ಲಿ ರಾಜಕಾರಣಿಗಳ ಜತೆಗೆ ಅಧಿಕಾರಿಗಳು ಶಾಮೀಲಾಗಿರುವ ಆರೋಪ ಇದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವ ಮೂಲಕ ಹಗರಣದಲ್ಲಿ ಭಾಗಿಯಾದವರ ಹೆಸರನ್ನು ಪ್ರಕಟಿಸಬೇಕು ಎಂದರು.

ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ನಿರ್ಲಕ್ಷ್ಯ ವಹಿಸುವಂತೆ ಹೇಳಿದ್ದಾರೆಂದು ಮುಖ್ಯಮಂತ್ರಿ ಹೇಳುತ್ತಿರುವುದು ಬೀಸುವ ದೊಣ್ಣೆಯಿಂದ ಪೆಟ್ಟು ತಪ್ಪಿಸಿಕೊಳ್ಳುವ ತಂತ್ರವಾಗಿದೆ. ಈ ಹಿಂದೆ ಹಗರಣದ ಆರೋಪ ಎದುರಾದಾಗ ಕಾಂಗ್ರೆಸ್ ತನಿಖೆ ನಡೆಸಿದೆ. ಕೇಂದ್ರದಲ್ಲಿ ಬಿಜೆಪಿ, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿದ್ದ ವೇಳೆ 8 ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿತ್ತು. ಈಗ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿ ಕೇಂದ್ರದ ಕೆಲವು ವೆಬ್‍ಸೈಟ್‍ಗಳೂ ಹ್ಯಾಕ್ ಆಗಿರುವುದು ಗಂಭೀರ ವಿಷಯ. ಜನ್‌ಧನ್ ಖಾತೆ, ಪಿಂಚಣಿ, ಗ್ಯಾಸ್ ಸಬ್ಸಿಡಿ ಖಾತೆಗಳೂ ಹ್ಯಾಕ್ ಆಗಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಹೆಸರು ಕೇಳಿಬಂದಿದ್ದು, ಅವರು ಈ ಬಗ್ಗೆ ಮಾತನಾಡುತ್ತಿಲ್ಲ. ಪ್ರಭಾವಿ ನಾಯಕರು ಈ ಪ್ರಕರಣದಲ್ಲಿ ಶಾಮೀಲಾಗಿರುವ ಶಂಕೆ ಇದೆ’ ಎಂದರು

ಹಗರಣದ ಪ್ರಮುಖ ಆರೋಪಿಯಾಗಿರುವ ಶ್ರೀಕೃಷ್ಣ ಎಲ್ಲ ವಿವರ ನೀಡಿದ್ದಾನೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಹಣ ದೋಚಿರುವ ಬಗ್ಗೆಯೂ ಒಪ್ಪಿಕೊಂಡಿದ್ದಾನೆ. ಹೀಗಿದ್ದಾಗ ಆರೋಪದಲ್ಲಿ ಹೆಸರು ಕೇಳಿ ಬಂದವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ರಮಾನಾಥ ರೈ ಆಗ್ರಹಿಸಿದರು.

ಮುಖಂಡರಾದ ಶಶಿಧರ ಹೆಗ್ಡೆ, ಪ್ರಕಾಶ್ ಸಾಲಿಯಾನ್, ಹರಿನಾಥ್, ವಿಶ್ವಾಸ್ ಕುಮಾರ್ ದಾಸ್, ಲುಕ್ಮಾನ್ ಬಂಟ್ವಾಳ, ಸಲೀಂ, ಸುರೇಂದ್ರ ಕಾಂಬ್ಳಿ, ಸವದ್, ಸಾಹುಲ್ ಹಮೀದ್, ಶುಭೋದಯ ಆಳ್ವ, ಸದಾಶಿವ ಶೆಟ್ಟಿ, ನೀರಜ್ ಪಾಲ್, ನಝೀರ್ ಬಜಾಲ್, ಮುಹಮ್ಮದ್ ಕುಂಜತ್ತಬೈಲ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು