ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಹಣಕಾಸಿನ ಕೊರತೆ ಇಲ್ಲ: ನಳಿನ್‌ಕುಮಾರ್ ಕಟೀಲ್

ವಲಸೆ ಕಾರ್ಮಿಕರ ವಿಷಯದಲ್ಲಿ ಕಾಂಗ್ರೆಸ್‌ ರಾಜಕಾರಣ: ನಳಿನ್‌
Last Updated 6 ಮೇ 2020, 14:08 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್-19 ಸೋಂಕಿನ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.

ನಗರದ ಪಕ್ಷದ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 40 ದಿನಗಳಿಂದ ಬಿಜೆಪಿ ಕಾರ್ಯಕರ್ತರು ಕಾರ್ಮಿಕರು ಇರುವ ಸ್ಥಳಗಳಿಗೆ ಹೋಗಿ ಆಹಾರಗಳನ್ನು ನೀಡುತ್ತಿದ್ದಾರೆ. ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ದೂರಿದರು.

ಲಾಕ್‌ಡೌನ್‌ನ 40 ದಿನಗಳ ಅವಧಿಯಲ್ಲಿ ಕಾಂಗ್ರೆಸ್ ಮೌನ ವಹಿಸಿತ್ತು. ಕಾರ್ಮಿಕ ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಊಟೋಪಚಾರ ಹಾಗೂ ಅವರನ್ನು ಸ್ವಗ್ರಾಮಗಳಿಗೆ ಕಳುಹಿಸುವ ವ್ಯವಸ್ಥೆ ಮಾಡುತ್ತಿದ್ದರು. ಕೇಂದ್ರ ಹಾಗೂ ರಾಜ್ಯದ ಕೋವಿಡ್ ಪರಿಹಾರ ನಿಧಿಗೆ ನಿಧಿ ಸಂಗ್ರಹಿಸುವ ಕೆಲಸ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ಗೆ ಆಗ ಏಕೆ ಇದೆಲ್ಲ ನೆನಪಾಗಿಲ್ಲ? ಈಗ ವಲಸೆ ಕಾರ್ಮಿಕರ ಬಗ್ಗೆ ಕಾಳಜಿ ತೋರಿಸುವ ಅಗತ್ಯ ಕಾಂಗ್ರೆಸ್‌ಗೆ ಇಲ್ಲ ಎಂದು ತಿರುಗೇಟು ನೀಡಿದರು.

ರಾಜ್ಯ ಸರ್ಕಾರದಲ್ಲಿ ಹಣಕಾಸಿನ ಕೊರತೆ ಇಲ್ಲ. ಹಾಗಾಗಿಯೇ ಕಾರ್ಮಿಕರನ್ನು ಉಚಿತವಾಗಿ ಬಸ್‌ಗಳಲ್ಲಿ ಅವರ ಊರುಗಳಿಗೆ ಕಳುಹಿಸಿಕೊಡುತ್ತಿದೆ. ಅದಕ್ಕಾಗಿಯೇ ಕೆಪಿಸಿಸಿ ನೀಡಲು ಮುಂದಾದ ಚೆಕ್‌ ಅನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸ್ವೀಕರಿಸಿಲ್ಲ ಎಂದು ಹೇಳಿದರು.

ಕಾರ್ಮಿಕರ ಬಗ್ಗೆ ಅನುಕಂಪ ವ್ಯಕ್ತಪಡಿಸುವ ಕಾಂಗ್ರೆಸಿಗರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಏಕೆ ಪರಿಹಾರ ನೀಡಿಲ್ಲ ಎಂದು ಪ್ರಶ್ನಿಸಿದ ಅವರು, ಜಾತಿ, ಮತ, ಪಂಥ, ರಾಜಕಾರಣ ಬಿಟ್ಟು ಕೆಲಸ ಮಾಡಬೇಕು. ಇಂತಹ ಸಂದರ್ಭಗಳಲ್ಲಿ ಜನತೆಯ ಜತೆಗೆ ಇರುವಂತೆ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದರು.

ಬಿಜೆಪಿ ಪ್ರಮುಖರಾದ ರವಿಶಂಕರ ಮಿಜಾರ್, ಜಗದೀಶ ಶೇಣವ, ಜಿತೇಂದ್ರ ಕೊಟ್ಟಾರಿ, ಸುಧೀರ್ ಶೆಟ್ಟಿ ಕಣ್ಣೂರು, ಸಂದೇಶ್ ಶೆಟ್ಟಿ ಹಾಜರಿದ್ದರು.

ಸಾಮಾಜಿಕ ಸುಧಾರಣೆ ಮಹಾಪರ್ವ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪರಿಶ್ರಮದಿಂದ ರಾಜ್ಯದಲ್ಲಿ ಕೊರೊನಾ ವೈರಸ್‌ ಹರಡುವಿಕೆ ನಿಯಂತ್ರಣದಲ್ಲಿದೆ. ಲಾಕ್‌ಡೌನ್ ಅವಧಿಯಲ್ಲಿ ಸಂಕಷ್ಟದಲ್ಲಿರುವ ಬಡವರ ಸಬಲೀಕರಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ₹1,610 ಕೋಟಿ ಯೋಜನೆ ಪ್ರಕಟಿಸಿರುವುದು ಸಾಮಾಜಿಕ ಸುಧಾರಣೆಯ ಮಹಾಪರ್ವ ಎಂದು ಸಂಸದ ನಳಿನ್‌ಕುಮಾರ್‌ ಕಟೀಲ್‌ ಬಣ್ಣಿಸಿದರು.

ಆರ್ಥಿಕ ಸಮಸ್ಯೆಯ ಸಂದರ್ಭದಲ್ಲೂ ಬಡವರು, ಅಸಂಘಟಿತ ಕಾರ್ಮಿಕರ ಬದುಕಿಗೆ ಆಧಾರವಾಗುವ ದೃಷ್ಟಿಯಿಂದ ಅಭೂತಪೂರ್ವ ಸ್ಪಂದನೆ ನೀಡಲಾಗಿದ್ದು, ರಾಜ್ಯದ ಇತಿಹಾಸದಲ್ಲಿಯೇ ಇದು ಮೊದಲು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT