ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು | ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಆಕ್ರೋಶ: ಬಿಜೆಪಿಯಿಂದ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಆಕ್ರೋಶ, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆ
Published 20 ಜೂನ್ 2024, 14:18 IST
Last Updated 20 ಜೂನ್ 2024, 14:18 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್‌ ಬೆಲೆ ಹೆಚ್ಚಳ ಮಾಡಿರುವುದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿಯವರು ಗುರುವಾರ ನಗರದ ಪಿವಿಎಸ್ ವೃತ್ತದಲ್ಲಿ ಮಾನವ ಸರಪಳಿ ಮೂಲಕ ರಸ್ತೆ ತಡೆದು ಪ್ರತಿಭಟಿಸಿದರು.

ಮಂಗಳೂರು ದಕ್ಷಿಣ ಮಂಡಲ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ‘ಕಾಂಗ್ರೆಸ್‌ ಪಕ್ಷದೊಳಗಿನ ಗೊಂದಲ ಮರೆಮಾಚಲು ಜನರ ಗಮನ ಬೇರೆಡೆ ಸೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದಾರೆ. ಇಂಧನ ಬೆಲೆ ಏರಿಕೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಜನರ ಹಣ ಲೂಟಿ ಮಾಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಜನರು ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದಕ್ಕಾಗಿ ಈ ಶಿಕ್ಷೆ ನೀಡಿದೆ’ ಎಂದು ಆರೋಪಿಸಿದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ರಾಜ್ಯದ ಬೊಕ್ಕಸ ಭರ್ತಿ‌ ಇದೆ‌ ಎನ್ನುವ ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದ ಅವರು, ‘ಬಿಜೆಪಿ ರಸ್ತೆ ತಡೆ ನಡೆಸಿದರೆ ಲಾಠಿ ಚಾರ್ಜ್ ನಡೆಸುವಂತೆ ಗೃಹ ಸಚಿವರು ಪೊಲೀಸರಿಗೆ ಸೂಚಿಸಿದ್ದಾರೆ. ಲಾಠಿ ಎತ್ತಿದರೆ ಉತ್ತರಿಸುವ ತಾಕತ್ತು ಬಿಜೆಪಿ ಕಾರ್ಯಕರ್ತರಿಗೆ ಇದೆ’ ಎಂದರು.

ಪಿವಿಎಸ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಮಾನವ ಸರಪಳಿ ರಚಿಸಿ, ಸುಮಾರು 20 ನಿಮಿಷ ರಸ್ತೆ ತಡೆ ನಡೆಸಿದರು. ಅಷ್ಟರಲ್ಲಾಗಲೇ ಮಳೆ ಆರಂಭವಾಯಿತು. ಕಾರ್ಯಕರ್ತರು ಚದುರಿದರು. ಪೊಲೀಸರು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕೆಲವು ಕಾರ್ಯಕರ್ತರು ಮತ್ತೆ ರಸ್ತೆ ತಡೆಗೆ ಮುಂದಾದಾಗ ಪೊಲೀಸರು, ಅದಕ್ಕೆ ಅವಕಾಶ ನೀಡಿಲ್ಲ. ಸಂಸದರು, ಶಾಸಕರು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಲು ಮುಂದಾದಾಗ ಪೊಲೀಸರು ವಶಕ್ಕೆ ಪಡೆದು, ಬಸ್‌ನಲ್ಲಿ ಅವರನ್ನು ಕರೆದೊಯ್ದರು.

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯರಾದ ಪೂರ್ಣಿಮಾ, ಕಿರಣ್ ಕೋಡಿಕಲ್, ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಪ್ರಮುಖರಾದ ನಿತಿನ್ ಕುಮಾರ್, ರವಿಶಂಕರ್ ಮಿಜಾರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT