ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾಪ್ರಭುತ್ವ ಶ್ರೀಮಂತಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಸಚಿವ ಸುನಿಲ್ ಕುಮಾರ್

ಡಾ. ಬಿ.ಆರ್‌.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ
Last Updated 14 ಏಪ್ರಿಲ್ 2022, 11:13 IST
ಅಕ್ಷರ ಗಾತ್ರ

ಮಂಗಳೂರು: ಡಾ. ಬಿ.ಆರ್.ಅಂಬೇಡ್ಕರ್ ರೂಪಿಸಿರುವ ಸಂವಿಧಾನದ ಮೂಲಕ ಗಟ್ಟಿಯಾದ ತಳಹದಿ ಇರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಶ್ರೀಮಂತಗೊಳಿಸಿ, ಸುದೀರ್ಘ ಕಾಲದವರೆಗೆ ಇದೇ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಗುರುವಾರ ಇಲ್ಲಿ ಆಯೋಜಿಸಿದ್ದ ಡಾ. ಬಿ.ಆರ್‌.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಸಂವಿಧಾನ ರಚನೆಯಿಂದ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ಅತ್ಯಂತ ಗಟ್ಟಿಯಾದ ಆಡಳಿತವನ್ನು ಜಗತ್ತಿಗೆ ಮಾದರಿಯಾದ ಆಡಳಿಯ ನಡೆಸುತ್ತಿದೆ. ಸಂವಿಧಾನದ ಕಾರಣಕ್ಕೆ ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಲು ಸಾಧ್ಯವಾಗಿದೆ. ಜಗತ್ತಿನ ಉಳಿದ ರಾಷ್ಟ್ರಗಳು ಪ್ರಜಾಪ್ರಭುತ್ವದ ಮಾದರಿ ನೋಡಲು ಭಾರತದೆಡೆಗೆ ದೃಷ್ಟಿ ಬೀರುವಂತಾಗಿದೆ. ಆಯಾಕಾಲಕ್ಕೆ ತಕ್ಕಂತೆ ಮಾರ್ಪಾಡು ಮಾಡಿಕೊಳ್ಳುತ್ತ ಪ್ರಜಾಪ್ರಭುತ್ವವನ್ನು ಇನ್ನಷ್ಟು ಶ್ರೀಮಂತ ಗೊಳಿಸುವ ಕಾರ್ಯವನ್ನು ಎಲ್ಲ ಸರ್ಕಾರಗಳು ಮಾಡುತ್ತ ಬಂದಿವೆ ಎಂದರು.

ದೀ‌ನರು, ಪರಿಶಿಷ್ಟರ ಅಭಿವೃದ್ಧಿ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಮಂಗಳೂರಿನಲ್ಲಿ ₹ 15 ಕೋಟಿ‌ ವೆಚ್ಚದಲ್ಲಿ ಅಂಬೇಡ್ಕರ್ ಭವನ‌ ನಿರ್ಮಾಣ‌ ಮಾಡಲಾಗಿದೆ. ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚಿನ ಅನುದಾನ ಮೀಸಲಿಟ್ಟು ಹಿಂದುಳಿದವರನ್ನು ಮೇಲೆತ್ತುವ ಕೆಲಸ ಮಾಡುತ್ತಿದೆ. ಅಂಬೇಡ್ಕರ್ ಅವರ ಸಮಾನತೆಯ ತತ್ವವನ್ನು ಮುಂದುವರಿಸಬೇಕಾಗಿದೆ ಎಂದು ಹೇಳಿದರು.

ಸಂಸದ ನಳಿನ್‌ಕುಮಾರ್ ಕಟೀಲ್ ಮಾತನಾಡಿ, ‘ಜಗತ್ತಿನ ಅತ್ಯುತ್ತಮ ಪ್ರಜಾಪ್ರಭುತ್ವ ದೇಶ ಭಾರತವಾಗಿದೆ. ಕುಗ್ರಾಮದಲ್ಲಿ ಹುಟ್ಟಿರುವ ಒಬ್ಬ ವ್ಯಕ್ತಿ ಉನ್ನತ ಸ್ಥಾನ ಏರಲು ಸಾಧ್ಯವಾಗಿದ್ದು ಬಿ.ಆರ್‌.ಅಂಬೇಡ್ಕರ್ ನೀಡಿರುವ ಸಂವಿಧಾನದ ಕಾರಣದಿಂದ. ಸ್ವಾತಂತ್ರ್ಯ ಪಡೆದ ನಂತರ ಭಾರತಕ್ಕೆ ಗುರಿ, ದೃಷ್ಟಿಕೋನ ನಿರ್ಧರಿಸಿದವರು ಅಂಬೇಡ್ಕರ್. ಅಧ್ಯಾತ್ಮ ಬೆಳಕು ನೀಡಿದ ಮಹಾವೀರ ಜಯಂತಿ ಮತ್ತು ಪವಿತ್ರವಾದ ಸಂವಿಧಾನ ನೀಡಿದ ಅಂಬೇಡ್ಕರ್ ಜಯಂತಿ ಏಕದಿನ ನಡೆದಿದೆ’ ಎಂದರು.

ಮೀನುಗಾರಿಕಾ ಕಾಲೇಜಿನ ಡೀನ್ ಶಿವಕುಮಾರ್ ಮುಗದ ವಿಶೇಷ ಉಪನ್ಯಾಸ ನೀಡಿದರು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಡಾ. ಭರತ್ ಶೆಟ್ಟಿ, ಯು.ಟಿ.ಖಾದರ್, ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್‌ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಸ್ಪಿ ಋಷಿಕೇಶ್ ಸೋನಾವಣೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT