ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿ ವರ್ಗಾವಣೆ ಹಿಂದಿನ ಕಾರಣ ತಿಳಿಸಿ: ಸರ್ಕಾರಕ್ಕೆ ಶಾಸಕ ಯು.ಟಿ. ಖಾದರ್ ಆಗ್ರಹ

Last Updated 30 ಜುಲೈ 2020, 16:34 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್, ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ’ ಎಂದು ಟೀಕಿಸಿದರು.

‘ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋದರೆ, ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ’ ಎಂದು ಪ್ರಶ್ನಿಸಿದರು.

‘ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆ ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ’ ಎಂದು ಆರೋಪಿಸಿದರು.

‘ನಮ್ಮ ಸರ್ಕಾರದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT