ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘1 ಲಕ್ಷ ಪ್ರತಿನಿಧಿಗಳು ಪಾಲ್ಗೊಳ್ಳುವ ನಿರೀಕ್ಷೆ’

ಜ.21ಕ್ಕೆ ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ
Published 13 ಜನವರಿ 2024, 7:15 IST
Last Updated 13 ಜನವರಿ 2024, 7:15 IST
ಅಕ್ಷರ ಗಾತ್ರ

ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ದೇಶನದಂತೆ ಎಲ್ಲ ರಾಜ್ಯಗಳಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ನಡೆಯುತ್ತಿದ್ದು, ಕರ್ನಾಟಕ ರಾಜ್ಯದ ಸಮಾವೇಶವು ಮಂಗಳೂರಿನಲ್ಲಿ ಜ.21ರಂದು ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ಶುಕ್ರವಾರ ಇಲ್ಲಿ ನಡೆದ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 1 ಲಕ್ಷ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೂತ್, ಗ್ರಾಮ, ವಾರ್ಡ್, ಬ್ಲಾಕ್ ಮಟ್ಟದ ಕಾರ್ಯಕರ್ತರು ತಪ್ಪದೇ ಭಾಗವಹಿಸುವಂತೆ ಪದಾಧಿಕಾರಿಗಳು ನೋಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಹರೀಶ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಬಿ.ರಮಾನಾಥ್ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಶಾಸಕರಾದ ಅಶೋಕ್ ಕುಮಾರ್ ರೈ, ಮಂಜುನಾಥ್ ಭಂಡಾರಿ, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಜೆ.ಆರ್. ಲೋಬೊ, ಐವನ್ ಡಿಸೋಜ, ಇಬ್ರಾಹಿಂ ಕೋಡಿಜಾಲ್, ಪಿ.ವಿ ಮೋಹನ್, ಮಮತಾ ಗಟ್ಟಿ, ರಕ್ಷಿತ್ ಶಿವರಾಮ್, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕೊಡವೂರ್, ಯು.ಕೆ ಮೋನು, ಎಂ.ಎ ಗಫೂರ್, ಸದಾಶಿವ ಉಳ್ಳಾಲ್ ಇದ್ದರು. 

‘ಕೇಂದ್ರದ ವಿರುದ್ಧ ಮಾತನಾಡುವ ಧೈರ್ಯ ಸಂಸದರಿಗೆ ಇಲ್ಲ’

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಒಬ್ಬ ಸಂಸದರೂ ಮಾತನಾಡುತ್ತಿಲ್ಲ ಬದಲಾಗಿ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಬರ ಪರಿಹಾರ ಅನುದಾನ ಬಿಡುಗಡೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದೆ. ಆದರೆ ಕೇಂದ್ರದ ವಿರುದ್ಧ ಮಾತನಾಡುವ ಧೈರ್ಯ ರಾಜ್ಯದ ಸಂಸದರಿಗೆ ಇಲ್ಲ’ ಎಂದರು. ‘ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಕಾಂಗ್ರೆಸ್‌ ಸಂಸದರು ಹೆಚ್ಚಿನ ಸಂಖ್ಯೆಯಲ್ಲಿ ಇರಬೇಕು. ಬರಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೆಚ್ಚು ಸದಸ್ಯರು ಸಂಸತ್ ಪ್ರವೇಶಿಸುವ ವಿಶ್ವಾಸವಿದೆ. ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿ ಈಗಲೇ ಏನನ್ನೂ ಹೇಳಲಾಗದು ಇನ್ನೂ ಸಾಕಷ್ಟು ಸಮಯ ಇದೆ’ ಎಂದರು. ‘ಸಭೆಯಲ್ಲಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿ ಯಾವುದೇ ಚರ್ಚೆ ನಡೆದಿಲ್ಲ. ಮಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ಸೀಮಿತವಾಗಿ ಸಭೆ ನಡೆದಿದೆ’ ಎಂದು ಸಲೀಂ ಅಹ್ಮದ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT