ಶನಿವಾರ, ಸೆಪ್ಟೆಂಬರ್ 25, 2021
30 °C
ಪದಗ್ರಹಣ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್

ಸಂವಿಧಾನ ವಿರೋಧಿಗಳೇ ದೇಶದ್ರೋಹಿಗಳು: ಬಿ.ಕೆ. ಹರಿಪ್ರಸಾದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ದೇಶದಲ್ಲಿ ಸಂವಿಧಾನ ಬದಲಾವಣೆ ಮಾಡುವ ಹುನ್ನಾರ ನಡೆಯುತ್ತಿದೆ. ಎಲ್ಲರಿಗೂ ಸಮಾನ ಹಕ್ಕು ನೀಡಿರುವ ಸಂವಿಧಾನವನ್ನು ವಿರೋಧಿಸುವವರೇ ನಿಜವಾದ ದೇಶದ್ರೋಹಿಗಳು' ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ವಿಶ್ವಾಸ್ ಕುಮಾರ್‌ ದಾಸ್‌ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ದೇಶ ಕವಲು ದಾರಿಯಲ್ಲಿದೆ. ಕೆಳವರ್ಗ, ಹಿಂದುಳಿದ ವರ್ಗಗಳನ್ನು ತುಳಿಯಲಾಗುತ್ತಿದೆ. ಮಹಾತ್ಮ ಗಾಂಧಿಯ ಚಿಂತನೆ ದೇಶಕ್ಕೆ ಅಗತ್ಯವಾಗಿದೆ. ಪ್ರತಿಯೊಬ್ಬ ಭಾರತೀಯನಿಗೆ ಸಂವಿಧಾನವೇ ಮುಖ್ಯವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅಧಿಕಾರ ನೀಡುವ ಶಕ್ತಿ, ಆತನ ಕಣ್ಣೀರು ಒರೆಸುವ ಶಕ್ತಿ ಸಂವಿಧಾನಕ್ಕೆ ಇದೆ. ಇಂತಹ ಪವಿತ್ರ ಸಂವಿಧಾನವನ್ನು ರಾಷ್ಟ್ರಪ್ರೇಮ-ರಾಷ್ಟ್ರ ಭಕ್ತಿಯ ಹೆಸರಿನಲ್ಲಿ ಬದಲಾವಣೆ ಮಾಡಲು ಹೊರಟಿರುವುದು ಖಂಡನೀಯ’ ಎಂದರು.

ಜಾತಿ- ಧರ್ಮದ ಹೆಸರಿನಲ್ಲಿ ಹಿಂದುಳಿದ ವರ್ಗದವರನ್ನು ಎತ್ತಿಕಟ್ಟಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸಂವಿಧಾನ ರಕ್ಷಣೆ ಮಾಡಿದರೆ ಮಾತ್ರ ಈ ರಾಷ್ಟ್ರಕ್ಕೆ ಉಜ್ವಲ ಭವಿಷ್ಯವಿದೆ ಎಂದು ಹೇಳಿದರು.

ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಎಂ.ಡಿ. ಲಕ್ಷ್ಮಿನಾರಾಯಣ ಮಾತನಾಡಿ, ‘ಹಿಂದುತ್ವ ವಿಚಾರ ಮುಂದಿಟ್ಟು ಬಿಜೆಪಿ, ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ. ಆಗ ಬಿಜೆಪಿಗೆ ಮತ ನೀಡಿದವರು ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರಬೇಕು’ ಎಂದರು.

ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಯು.ಟಿ. ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಮೊಯಿಯುದ್ದೀನ್ ಬಾವ, ಶಕುಂತಳಾ ಶೆಟ್ಟಿ, ಐವನ್ ಡಿಸೋಜ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಮುಖಂಡರಾದ ಶಶಿಧರ್ ಹೆಗ್ಡೆ, ಸುರೇಶ್ ಬಲ್ಲಾಳ್, ಎ.ಸಿ. ಭಂಡಾರಿ, ಶಾಲೆಟ್ ಪಿಂಟೊ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು