ಶುಕ್ರವಾರ, ಸೆಪ್ಟೆಂಬರ್ 24, 2021
26 °C
ಕೋವಿಡ್‌ ಆರೈಕೆ ಕೇಂದ್ರಕ್ಕೆ ಸ್ಥಳಾಂತರ: ಪ್ರಕರಣ ದಾಖಲು

ಶಾರ್ಜಾಕ್ಕೆ ತೆರಳಲು ಯತ್ನಿಸಿದ ಸೋಂಕಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೋವಿಡ್–19 ದೃಢಪಟ್ಟ ವ್ಯಕ್ತಿಯೊಬ್ಬ ಸೋಮವಾರ ಇಲ್ಲಿನ ವಿಮಾನ ನಿಲ್ದಾಣದ ಮೂಲಕ ಶಾರ್ಜಾಗೆ ತೆರಳಲು ಯತ್ನಿಸಿದ್ದು, ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಆತನ ವಿರುದ್ಧ ಪ್ರಕರಣ ದಾಖಲಿಸಿರುವ ಆರೋಗ್ಯ ಅಧಿಕಾರಿಗಳು, ಆತನನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

ಶಾರ್ಜಾಗೆ ತೆರಳಲು 48 ಗಂಟೆಯೊಳಗಿನ ಆರ್‌ಟಿಪಿಸಿಆರ್‌ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಈ ವ್ಯಕ್ತಿಗೆ ಕೋವಿಡ್–19 ದೃಢಪಟ್ಟಿದ್ದರೂ, ಶಾರ್ಜಾಕ್ಕೆ ತೆರಳಲು ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿದ್ದ. ಆದರೆ, ಪ್ರವೇಶದ್ವಾರದಲ್ಲಿ ಆತನನ್ನು ತಡೆಯಲಾಗಿತ್ತು ಎಂದು ಆರೋಗ್ಯ ಇಲಾಖೆ ಅಧಿಕಾರಿ ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಈ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಂಡಿಲ್ಲ. ಕೂಡಲೇ ಆತನನ್ನು ಪ್ರತ್ಯೇಕವಾಗಿ ಇರಿಸಿ, ಆತನ ವಿರುದ್ಧ ಸ್ಥಳೀಯ ಠಾಣೆಯಲ್ಲಿ ದೂರು ನೀಡಬೇಕಿತ್ತು. ಆದರೆ, ವಿಮಾನ ನಿಲ್ದಾಣದಲ್ಲಿ ಆತನಿಗೆ ಓಡಾಡಲು ಅವಕಾಶ ನೀಡಲಾಗಿತ್ತು ಎಂದು ಅಧಿಕಾರಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಘಟನೆ ನಡೆಯುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ವಿಮಾನ ಯಾನ ಸಂಸ್ಥೆಗಳ ಜೊತೆಗೆ ಬುಧವಾರ ಸಭೆ ನಡೆಸಿದೆ. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಯುಎಇಗೆ ತೆರಳಲು ಅಲ್ಲಿನ ಜನರಲ್‌ ಡೈರೆಕ್ಟರೇಟ್‌ ಆಫ್‌ ರೆಸಿಡೆನ್ಸಿ ಆಂಡ್‌ ಫಾರಿನ್ ಅಫೇರ್ಸ್‌ನ ವೆಬ್‌ಸೈಟ್‌ನಲ್ಲಿ 48 ಗಂಟೆಯೊಳಗಿನ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಸೇರಿದಂತೆ ಇತರ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ, ಪ್ರವೇಶಕ್ಕೆ ಅನುಮತಿ ಪಡೆಯಬೇಕು. ಆದರೆ, ಈ ವ್ಯಕ್ತಿ ವೆಬ್‌ಸೈಟ್‌ನಲ್ಲಿ ಯಾವ ನೆಗೆಟಿವ್ ವರದಿ ಅಪ್‌ಲೋಡ್ ಮಾಡಿದ್ದಾನೆ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.