ಭಾನುವಾರ, ಆಗಸ್ಟ್ 1, 2021
25 °C

ಸಿಪಿಎಂನಿಂದ ಇದೇ 16 ರಂದು ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಲಾಕ್‌ಡೌನ್‌ನಿಂದಾಗಿ ಜನಸಾಮಾನ್ಯರಿಗೆ ಉಂಟಾಗಿರುವ ಕಷ್ಟಗಳನ್ನು ಪರಿಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಿಪಿಎಂನಿಂದ ಇದೇ 16ರಂದು ಧರಣಿ ಹಮ್ಮಿಕೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಿಪಿಎಂ ಜಿಲ್ಲಾ ಸಮಿತಿ ಕಾರ್ಯದರ್ಶಿ ವಸಂತ ಆಚಾರಿ, ‘ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಮತ್ತು ಮಂಗಳೂರು ತಾಲ್ಲೂಕಿನ ವಲಯ ಕೇಂದ್ರಗಳಲ್ಲಿ ಈ ಪ್ರತಿಭಟನೆ ನಡೆಯಲಿದೆ’ ಎಂದರು.

ಲಾಕ್‌ಡೌನ್ ಸಂದರ್ಭದಲ್ಲಿ ಜಿಲ್ಲೆಯ ಸಂಸದರು ಹಾಗೂ ಶಾಸಕರು ಸರ್ವಾಧಿಕಾರಿಯಾಗಿ ವರ್ತಿಸಿದ್ದು, ಜಿಲ್ಲಾಡಳಿತವನ್ನು ಕಡೆಗಣಿಸಿದ್ದಾರೆ. ಇದರಿಂದಾಗಿ ಕಾರ್ಮಿಕರು ತೊಂದರೆಗಳನ್ನು ಅನುಭವಿಸಿದ್ದಾರೆ. ವಲಸೆ ಕಾರ್ಮಿಕರು ಆದಾಯವಿಲ್ಲದೇ ಬೀದಿಪಾಲಾಗಿದ್ದಾರೆ. ಕೇಂದ್ರ ಸರ್ಕಾರ ಕೊರೊನಾ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದರು.

ಕಾರ್ಮಿಕರು, ನೌಕರರು ಉದ್ಯೋಗ ಕಡಿತ, ವೇತನ ಕಡಿತ, ಕೆಲಸದ ಅವಧಿ ಹೆಚ್ಚಳದಂತಹ ಕ್ರಮಗಳಿಗೆ ಬಲಿಯಾಗುತ್ತಿದ್ದಾರೆ. ನೊಂದ ಕುಟುಂಬಗಳಿಗೆ ಪರಿಹಾರ ನೀಡಬೇಕಾದ ಕೇಂದ್ರ ಸರ್ಕಾರ ಲಾಕ್‌ಡೌನ್ ಹಿಂತೆಗೆದು ಕೊರೊನಾ ತಡೆಗಟ್ಟುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರಕ್ಕೆ ಹೊರಿಸಲು ಮುಂದಾಗಿದೆ ಎಂದರು.

ಈ ವಿಷಯದಲ್ಲಿ ಕೇರಳ ರಾಜ್ಯ ವಿಶ್ವಕ್ಕೆ ಮಾದರಿಯಾಗಿದೆ. ಯೋಜನಾಬದ್ಧವಾಗಿ ಅಲ್ಲಿನ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ಇದನ್ನು ಪರಿಗಣಿಸುತ್ತಿಲ್ಲ. ಕೊರೊನಾ ನಿಯಂತ್ರಣದಲ್ಲಿ ಕೇಂದ್ರದ ವೈಫಲ್ಯ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾಕ್‌ಡೌನ್‌ನ ಎಲ್ಲ ನಿಯಮಗಳನ್ನು ಪಾಲಿಸಿಕೊಂಡು ಧರಣಿ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ. ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.