ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ವಜರ ತ್ಯಾಗ ಸ್ಮರಿಸೋಣ: ಗಿರೀಶ್ ನಂದನ್ ಆಶಯ

Last Updated 26 ಜನವರಿ 2023, 12:41 IST
ಅಕ್ಷರ ಗಾತ್ರ

ಪುತ್ತೂರು: ‘ಹಲವು ಭಾಗಗಳಾಗಿ ಹರಿದು ಹಂಚಿ ಹೋಗಿದ್ದ ಭಾರತವನ್ನು ಒಟ್ಟುಗೂಡಿಸುವ ಮೂಲಕ ಹಾಗೂ ಭಾಷೆ, ಪಂಗಡಗಳನ್ನು ಮೀರಿ ದೇಶವನ್ನು ಒಂದಾಗಿಸುವಲ್ಲಿ ನಮ್ಮ ಹಿರಿಯ ಪರಿಶ್ರಮ ಬಹಳಷ್ಟಿದೆ. ಇದಕ್ಕಾಗಿ ಶ್ರಮ ವಹಿಸಿದ ನಮ್ಮ ಪೂರ್ವಜರನ್ನು ಮರೆಯಬಾರದು’ ಎಂದು ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಹೇಳಿದರು.

ಪುತ್ತೂರು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಕೊಂಬೆಟ್ಟು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಅವರು ಧ್ವಜಾರೋಹಣ ನೆರವೇರಿಸಿ, ವಂದನೆ ಸ್ವೀಕರಿಸಿ ಸಂದೇಶ ನೀಡಿದರು.

‘ನಮ್ಮ ಸಂವಿಧಾನವು ನಮಗೇ ಅರ್ಪಣೆಗೊಂಡಿದೆ. ಸಂವಿಧಾನ ಅರ್ಪಿತವಾಗಿ 7 ದಶಕಗಳು ಕಳೆದಿವೆ. ಇದೀಗ ದೇಶವು ಶೈಕ್ಷಣಿಕ, ವಿಜ್ಞಾನ, ತಂತ್ರಜ್ಞಾನ ಇನ್ನಿತರ ಕ್ಷೇತ್ರಗಳಲ್ಲಿ ಸಾಕಷ್ಟು ಬೆಳವಣಿಗೆ ಕಂಡಿದೆ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ, ‘ಭಾರತೀಯರು ತಮ್ಮ ಹಕ್ಕುಗಳ ಜತೆಗೆ ತಮ್ಮ ಕರ್ತವ್ಯಗಳನ್ನೂ ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಪ್ರಜಾಪ್ರಭುತ್ವ ನೈಜತೆಯನ್ನು ಪಡೆಯಲಿದೆ. ಜಿ.20ರ ನಾಯಕತ್ವ ವಹಿಸಿಕೊಂಡಿರುವ ಭಾರತವು ತನ್ನ ಸ್ಥಾನಮಾನವನ್ನು ಹೆಚ್ಚಿಸಿಕೊಂಡಿದೆ. ರಾಷ್ಟ್ರಭಕ್ತಿಯೊಂದಿಗೆ ರಾಷ್ಟ್ರೋತ್ಥಾನದ ಕಡೆಗೆ ದೇಶವು ಸಾಗುತ್ತಿದ್ದು ಜಗದ್ಗುರುವಾಗುತ್ತಿದೆ’ ಎಂದರು.

ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಡಿವೈಎಸ್ಪಿ ವೀರಯ್ಯ ಹಿರೇಮಠ್ ಮಾತನಾಡಿದರು.

ನೌಕಾ ಸೇನೆಯ ಸಿಬ್ಬಂದಿಯಾದ ರಾಷ್ಟ್ರೀಯ ಈಜುಪಟು ಪುತ್ತೂರಿನ ವೈಷ್ಣವ್ ಹೆಗ್ಡೆ, ಗ್ರಾಮ 1 ಕೇಂದ್ರದ ನೇತೃತ್ವ ವಹಿಸಿ ಅತಿ ಹೆಚ್ಚು ಅರ್ಜಿ ವಿಲೇವಾರಿ ಮಾಡಿರುವ ಮುಸ್ತಫಾ, ಅಶೋಕ್ ಎಚ್. ಮತ್ತು ಭವಿಷ್ಯ ರೈ ಅವರನ್ನು ಗೌರವಿಸಲಾಯಿತು. ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಅತಿಹೆಚ್ಚು ಅಂಕ ಪಡೆದಿರುವ ನಾಲ್ವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.

ತಹಶೀಲ್ದಾರ್ ನಿಸರ್ಗಪ್ರಿಯ ಜೆ, ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ನಗರಸಭಾ ಸ್ಥಳೀಯ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್, ಪೌರಾಯುಕ್ತ ಮಧು ಎಸ್. ಮನೋಹರ್, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಸುಂದರ ಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜಾರಾಮ್, ಸಿಡಿಪಿಒ ಶ್ರೀಲತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್, ಉಪ ತಹಶೀಲ್ದಾರ್ ಸುಲೋಚನಾ ಇದ್ದರು.

ಪುತ್ತೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಳ್ ನಿರೂಪಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಮಹಾತ್ಮ ಗಾಂಧಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಪುತ್ತೂರು ನಗರಠಾಣೆಯ ಎಸ್ಐ ಶ್ರೀಕಾಂತ್ ರಾಥೋಡ್ ನೇತೃತ್ವದಲ್ಲಿ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಸುಂದರ ಗೌಡ ಸಂಯೋಜನೆಯಲ್ಲಿ ಪಥ ಸಂಚಲನ ನಡೆಯಿತು. ಪುತ್ತೂರಿನ ಪೊಲೀಸ್ ಘಟಕ, ಅಗ್ನಿಶಾಮಕ ದಳ, ಗೃಹರಕ್ಷಕ ದಳ, ವಿವಿಧ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳ ಎನ್‌ಸಿಸಿ, ಆರ್ಮಿ, ಏರ್ವಿಂಗ್, ನೇವಿ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವು. ಸಭಾ ಕಾರ್ಯಕ್ರಮದ ಬಳಿಕ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT