ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಇಲ್ಲ ಮಂತ್ರಿ ಭಾಗ್ಯ

.
Published 27 ಮೇ 2023, 16:04 IST
Last Updated 27 ಮೇ 2023, 16:04 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಗಲಿದೆ ಎಂಬ ಭರವಸೆ ಹುಸಿಯಾಗಿದೆ.

ಉಭಯ ಜಿಲ್ಲೆಗಳ 13 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಎರಡು ಸ್ಥಾನಗಳಲ್ಲಿ ಮಾತ್ರ ಗೆದ್ದಿದೆ. ಮಂಗಳೂರು ಕ್ಷೇತ್ರದಿಂದ ಯು.ಟಿ. ಖಾದರ್‌ ಮತ್ತು ಪುತ್ತೂರಿನಿಂದ ಅಶೋಕ ಕುಮಾರ್‌ ರೈ ಗೆದ್ದಿದ್ದು, ಸತತ ಐದು ಬಾರಿ ಗೆಲುವು ಸಾಧಿಸಿರುವ ಯು.ಟಿ. ಖಾದರ್‌ ಸಚಿವರಾಗುವುದು ಖಚಿತ ಎಂದೇ ಹೇಳಲಾಗುತ್ತಿತ್ತು.

ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ವಿಧಾನ ಪರಿಷತ್‌ ಸದಸ್ಯರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಹರೀಶ್‌ ಕುಮಾರ್‌ ಅವರ ಹೆಸರು ಸಹ ಸಚಿವ ಸ್ಥಾನಕ್ಕೆ ಕೇಳಿ ಬಂದಿದ್ದವು.

ಯು.ಟಿ. ಖಾದರ್‌ ಅವರನ್ನು ವಿಧಾನಸಭೆಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಇನ್ನು ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ಸಿಗುವುದು ಖಚಿತ ಎಂದೇ ಸ್ಥಳೀಯ ಕಾಂಗ್ರೆಸ್ಸಿಗರು ನಂಬಿದ್ದರು.

‘ನಾನಾಗಿ ಸಚಿವ ಸ್ಥಾನ ಕೇಳುವುದಿಲ್ಲ. ಆದರೆ, ಪಕ್ಷದ ವರಿಷ್ಠರು ಸಚಿವ ಸ್ಥಾನ ನೀಡಲು ನಿರ್ಧರಿಸಿದರೆ, ಶಿರಸಾವಹಿಸಿ ಆ ಜವಾಬ್ದಾರಿ ನಿಭಾಯಿಸಲು ಸಿದ್ಧ’ ಎಂದು ಹರೀಶ್‌ ಕುಮಾರ್‌ ಆರಂಭದಲ್ಲಿ ಹೇಳಿದ್ದರು. ಆ ನಂತರ, ‘ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡುತ್ತಿಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ’ ಎಂದು ಅವರು ಹೇಳಿದ್ದರು.

‘ಪಕ್ಷವು ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸಲು ಸಿದ್ಧ. ಇದಕ್ಕಾಗಿ ದುಂಬಾಲು ಬೀಳುವುದಿಲ್ಲ’ ಎಂದೇ ಹೇಳುತ್ತಿದ್ದ ಮಂಜುನಾಥ ಭಂಡಾರಿ ಸಂಪುಟ ಸೇರಲು ಸಾಕಷ್ಟು ಕಸರತ್ತನ್ನೂ ನಡೆಸಿದ್ದರು. ಉಡುಪಿ ಜಿಲ್ಲೆಯ ಕೋಟಾದಲ್ಲಿ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಲೆಕ್ಕಾಚಾರವೂ ಸ್ಥಳೀಯ ಕಾಂಗ್ರೆಸ್ಸಿಗರಲ್ಲಿ ಇತ್ತು. ಆದರೆ, ಈ ಇಬ್ಬರೂ ವಿಧಾನ ಪರಿಷತ್‌ ಸದಸ್ಯರಿಗೆ ಮುಖ್ಯಮಂತ್ರಿ ಮಣೆ ಹಾಕಿಲ್ಲ.

ರಾಜ್ಯ ಸಂಪುಟದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರಾತಿನಿಧ್ಯ ಇಲ್ಲದಂತಾಗಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಬೇರೆ ಜಿಲ್ಲೆಯವರು ಉಸ್ತುವಾರಿ ಸಚಿವರಾಗುವುದು ಖಚಿತವಾಗಿದೆ. 

‘ಬೆಂಗಳೂರು ನಗರವನ್ನು ಹೊರತುಪಡಿಸಿದರೆ ಅಭಿವೃದ್ಧಿ ವಿಚಾರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮುಂಚೂಣಿಯಲ್ಲಿದೆ. ಮೂವರು ವಿಧಾನ ಪರಿಷತ್‌ ಸದಸ್ಯರು ಈ ಪ್ರದೇಶದವರಾಗಿದ್ದು, ಅವರಲ್ಲಿ ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಗಿದೆ. ಜನರಿಗೆ ನಿರೀಕ್ಷೆಗಳಿಗೆ ತಕ್ಷಣವೇ ಸ್ಪಂದಿಸುವ ದೃಷ್ಟಿಯಿಂದ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಆಯಾ ಪ್ರದೇಶದವರನ್ನೇ ‌ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡುವುದು ಒಳ್ಳೆಯದು. ಬೇರೆ ಜಿಲ್ಲೆಯವರು ಉಸ್ತುವಾರಿ ಸಚಿವರಾದರೆ ಅವರಿಗೆ ಸ್ಥಳೀಯ ಅವಶ್ಯಕತೆಗಳ ಬಗ್ಗೆ ಅಷ್ಟು ತಿಳಿದಿರುವುದಿಲ್ಲ. ಈ ಪ್ರದೇಶದ ಕಾಂಗ್ರೆಸ್‌ ಪ್ರಮುಖರ ನಿಯೋಗವು ಮುಖ್ಯಮಂತ್ರಿಯವರನ್ನು ಶೀಘ್ರವೇ ಭೇಟಿ ಮಾಡಿ ಈ ತಪ್ಪನ್ನು ಸರಿಪಡಿಸುವಂತೆ ಮನವಿ ಮಾಡಲಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT