ಬುಧವಾರ, ಸೆಪ್ಟೆಂಬರ್ 28, 2022
26 °C
ಜಿಲ್ಲಾ ಮಟ್ಟದಲ್ಲಿ ಸಾಧಕರಿಗೆ ಸನ್ಮಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ದೇವರಾಜ ಅರಸು ಜಯಂತಿ 3 ದಿನ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಹಿಂದುಳಿದ ವರ್ಗಗಳ ಸುಧಾರಣೆಯ ಹರಿಕಾರ ದಿ.ದೇವರಾಜ ಅರಸು ಅವರ 107ನೇ ಜನ್ಮ ದಿನದ ಅಂಗವಾಗಿ ಆ.20ರಿಂದ 22ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ. ಪ್ರತಿ ಜಿಲ್ಲೆಯಲ್ಲಿ ಹಿಂದುಳಿದ ಸಮುದಾಯದ ಒಬ್ಬರು ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ರಾಜ್ಯ ಮಟ್ಟದ ಅರಸು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆ.20ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯಲಿದೆ. ಅದೇ ದಿನ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿಯು ₹ 50 ಸಾವಿರ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಸಾಧಕರ ಆಯ್ಕೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಹಿಂದುಳಿದ ಸಮುದಾಯಗಳ ಕೈಮಗ್ಗ, ಕುಂಬಾರಿಕೆ ಮತ್ತಿತರ ಕುಲಕಸುಬಗಳ ಪ್ರದರ್ಶನ ಮತ್ತು ಉತ್ಪನ್ನಗಳ ಮಾರಾಟ ನಡೆಯಲಿದೆ. ಶಾಲಾ–ಕಾಲೇಜು ಮಟ್ಟದಲ್ಲಿ ಭಾಷಣ, ಚಿತ್ರಕಲೆ ಮೊದಲಾದ ಸ್ಪರ್ಧೆಗಳನ್ನು ನಡೆಸಿ, ಸಮಾರೋಪ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು’ ಎಂದರು.

ಕೊರೊನಾ ಕಾರಣಕ್ಕೆ ಸ್ಥಗಿತಗೊಂಡಿದ್ದ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಯೋಜನೆಗಳನ್ನು ಈ ವರ್ಷದಿಂದ ಮತ್ತೆ ಅನುಷ್ಠಾನಕ್ಕೆ ತರಲಾಗುವುದು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗಕ್ಕೆ ₹ 15 ಲಕ್ಷ ನೆರವು, ಮಹಿಳೆಯರಿಗೆ ಹೊಲಿಗೆ ತರಬೇತಿ, ಚೈತನ್ಯ ಯೋಜನೆ ಸೇರಿದಂತೆ ನನೆಗುದಿಗೆ ಬಿದ್ದಿದ್ದ ಎಲ್ಲ ಯೋಜನೆಗಳನ್ನು ಪುನಃ ಪ್ರಾರಂಭಿಸಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯದಲ್ಲಿ ಒಟ್ಟು 2,400 ಹಾಸ್ಟೆಲ್‌ಗಳು ಇದ್ದು, 1.20 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ, ಪ್ರವೇಶಕ್ಕೆ ಕಾಯುತ್ತಿದ್ದಾರೆ. ವಿದ್ಯಾಸಿರಿ ಯೋಜನೆಯಡಿ ₹145 ಕೋಟಿ, ರಾಜ್ಯದಲ್ಲಿ 50 ಕನಕದಾಸ ಹಾಸ್ಟೆಲ್ ತೆರೆಯಲು ₹ 3.50 ಕೋಟಿ, ಶೈಕ್ಷಣಿಕ ಸಂಸ್ಥೆಗಳ ಪ್ರಧಾನ ಐದು ನಗರಗಳಲ್ಲಿ ದೀನ್‌ ದಯಾಳ್ ಉಪಾಧ್ಯಾಯ ಹೆಸರಿನಲ್ಲಿ ತಲಾ ಒಂದು ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುವುದು. ಇನ್ನು ಎರಡು ವರ್ಷಗಳಲ್ಲಿ ಎಲ್ಲ ಹಿಂದುಳಿದ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸುವ ಯೋಜನೆ ಹೊಂದಲಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು