ಭಾನುವಾರ, ಜನವರಿ 24, 2021
18 °C
ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ. ಪೊನ್ನುರಾಜ್ ಸೂಚನೆ

ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ವ್ಯವಸ್ಥಿತವಾಗಿ ಪೂರೈಕೆ ಮಾಡಲು ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ. ಪೊನ್ನುರಾಜ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿವರ್ಷ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಅಗತ್ಯವಿರುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

ಮಂಗಳೂರು ನಗರ ವ್ಯಾಪ್ತಿಯಲ್ಲಿ 24X7 ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗಳನ್ನು ಈಗಾಗಲೇ ಕೈಗೊಳ್ಳಲಾಗುತ್ತಿದ್ದು, ದಿನಪೂರ್ತಿ ನೀರನ್ನು ಒದಗಿಸಲು ನೀರಿನ ಲಭ್ಯತೆಯನ್ನು ಕ್ರೋಡಿಕರಿಸುವ ಕೆಲಸ ಆಗಬೇಕು. ಅಂದಾಗ ಮಾತ್ರ ಈ ಯೋಜನೆಯ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ರಸ್ತೆ ಹೊರತಾಗಿ ಜನಸಾಮಾನ್ಯರಿಗೆ ಅವಶ್ಯವಿರುವ ಮೂಲಸೌಕರ್ಯ ಸೇರಿದಂತೆ ಮತ್ತಿತರ ಆಶೋತ್ತರಗಳ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಸರ್ಕಾರದಿಂದ ಅವುಗಳನ್ನು ಈಡೇರಿಸುವ ಮೂಲಕ ಇಲ್ಲಿನ ಜನರು ವಲಸೆ ಹೋಗದಂತೆ ತಡೆಯಲು ಮುಂದಾಗಬೇಕು ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಆರ್. ಸೆಲ್ವಮಣಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕರಿಕಾಳನ್‌, ಅಧಿಕಾರಿಗಳು ಇದ್ದರು.

‘ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಿ’
ಕೋವಿಡ್ ಲಸಿಕೆಯನ್ನು ನೀಡಲು ಅಗತ್ಯವಿರುವ ಎಲ್ಲ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಎ.ಪೊನ್ನುರಾಜ್‌ ಹೇಳಿದರು.

ಜಿಲ್ಲೆಯಲ್ಲಿ ಈವರೆಗೆ 32,884 ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, 736 ಮಂದಿ ಮೃತಪಟ್ಟಿದ್ದಾರೆ. ಮಂಗಳೂರು ನಗರದಲ್ಲಿಯೇ 18,819 ಪ್ರಕರಣಗಳು ದೃಢವಾಗಿದ್ದು, 381 ಜನ ಮೃತಪಟ್ಟಿದ್ದಾರೆ. ಕೇರಳ, ವಿದೇಶದಿಂದ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಹೆಚ್ಚು ಜನರು ಬಂದು ಹೋಗುತ್ತಿರುವ ಹಿನ್ನೆಲೆ ಕೋವಿಡ್–19 ಎರಡನೇ ಅಲೆ ಉಂಟಾಗುವ ಸಾಧ್ಯತೆಗಳು ಇವೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.