ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದು

ಗಡಿ ಭಾಗದಲ್ಲಿ ವಿಧಿಸಿರುವ ನಿರ್ಬಂಧ, ಮಾರ್ಗಸೂಚಿ ಮುಂದುವರಿಕೆ
Last Updated 9 ಸೆಪ್ಟೆಂಬರ್ 2021, 15:25 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯ ವರ್ತಕರು, ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿರುವ ಸರ್ಕಾರ, ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿದೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಹೊಸ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮಾತ್ರ ವಿಧಿಸಿದ್ದಾರೆ.

ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ತರಕಾರಿ, ದಿನಸಿ, ಹಣ್ಣು, ಮಾಂಸ, ಮೀನು ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಅದನ್ನು ಹೊರತುಪಡಿಸಿ, ಬೇರೆ ಯಾವುದೇ ಅಂಗಡಿಗಳಿಗೆ ಅನುಮತಿ ನೀಡಿರಲಿಲ್ಲ. ಇದರಿಂದಾಗಿ ಜಿಲ್ಲೆಯ ಹಲವೆಡೆ ವರ್ತಕರು ಪ್ರತಿಭಟನೆ ನಡೆಸಿದ್ದು, ವಾರಾಂತ್ಯದ ಕರ್ಫ್ಯೂ ರದ್ದುಪಡಿಸಲು ಒತ್ತಾಯಿಸಿದ್ದರು. ಜೊತೆಗೆ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮನವಿ ಮಾಡಿದ್ದರು.

10 ದಿನಕ್ಕೊಮ್ಮೆ ಆರ್‌ಟಿಪಿಸಿಆರ್‌ ಪರೀಕ್ಷೆ ಕಡ್ಡಾಯ:

ಜಿಲ್ಲಾಧಿಕಾರಿ ಹೊರಡಿಸಿರುವ ಹೊಸ ಆದೇಶದಲ್ಲಿ ಜಿಲ್ಲೆಯಾದ್ಯಂತ ಎಲ್ಲ ದಿನಗಳಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಎಲ್ಲ ತರಹದ ಅಂಗಡಿಗಳನ್ನು ಬೆಳಿಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ.

ಎಲ್ಲ ಅಂಗಡಿಗಳ ಮಾಲೀಕರು, ಸಿಬ್ಬಂದಿ ಕನಿಷ್ಠ 1 ಡೋಸ್ ಕೋವಿಡ್–19 ತಡೆ ಲಸಿಕೆ ಪಡೆದಿರಬೇಕು. ಅಲ್ಲದೇ ಎಲ್ಲ ಅಂಗಡಿಗಳ ಮಾಲೀಕರು, ಸಿಬ್ಬಂದಿ ಪ್ರತಿ 10 ದಿನಕ್ಕೊಮ್ಮೆ ಕೋವಿಡ್–19 ಪರೀಕ್ಷೆಗೆ ಒಳಪಡಬೇಕು. ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹಾಜರುಪಡಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಇಳಿಮುಖವಾಗುತ್ತಿದ್ದು, ಜಿಲ್ಲೆಯ ಪ್ರಸಕ್ತ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಗಡಿಭಾಗದಲ್ಲಿ ನಿಯಮ ಮುಂದುವರಿಕೆ:

ಕೇರಳದಿಂದ ಜಿಲ್ಲೆಗೆ ಬರುವವರಿಗೆ ಈ ಮೊದಲು ವಿಧಿಸಲಾಗಿದ್ದ ನಿರ್ಬಂಧಗಳು ಹಾಗೂ ಮಾರ್ಗಸೂಚಿಗಳು ಯಥಾವತ್ತಾಗಿ ಮುಂದುವರಿಯಲಿವೆ ಎಂದು ಹೊಸ ಆದೇಶದಲ್ಲಿ ತಿಳಿಸಲಾಗಿದೆ.

ಕೇರಳದಿಂದ ಬರುವವರು ಆರ್‌ಟಿಪಿಸಿಆರ್ ನೆಗೆಟಿವ್‌ ವರದಿಯನ್ನು ಕಡ್ಡಾಯವಾಗಿ ತರಬೇಕು ಎಂದು ಈ ಹಿಂದೆಯೇ ಜಿಲ್ಲಾಡಳಿತ ಸೂಚನೆ ನೀಡಿದೆ.

ವಾರಾಂತ್ಯದ ಕರ್ಫ್ಯೂ ಇಲ್ಲ

ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಿಲಿಕೆಯಾಗಿದೆ. ಇದರಿಂದ ಸಾರ್ವಜನಿಕರ ಚಟುವಟಿಕೆಗಳಿಗೆ ಅನುಕೂಲ ಆಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ತಿಳಿಸಿದ್ದಾರೆ.

ವಾರಾಂತ್ಯದ ಕರ್ಫ್ಯೂ ಸಡಿಲಿಸಿದ್ದರೂ, ಸಾರ್ವಜನಿಕರು ಆರೋಗ್ಯದ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಮಾಸ್ಕ್‌ ಧಾರಣೆ, ಸುರಕ್ಷಿತ ಅಂತರ ಪಾಲನೆಯ ಮೂಲಕ ಸ್ವಯಂ ಪ್ರೇರಿತರಾಗಿ ಕೋವಿಡ್–19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಜೊತೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT